ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ

ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ತಕ್ಷ ಸ್ಥಾನಕ್ಕೆ ಹೊಸಬರನ್ನು ಆಯ್ಕೆ ಮಾಡಲಾಗಿದೆ. ಅಖಿಲ ಭಾರತ ವೀರಶೈವ ರಾಷ್ಟ್ರೀಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಚಿವ ಈಶ್ವರ್ ಖಂಡ್ರೆ ಅವರೇ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಹೆಸರು ಹೇಳಿಬಂದಿತ್ತಾದರೂ ಅಂತಿಮವಾಗಿ ಈಶ್ವರ್ ಖಂಡ್ರೆ ಅವರಿಗೆ ಮಣೆ ಹಾಕಲಾಗಿದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ಈಶ್ವರ್ ಖಂಡ್ರೆ ಆಯ್ಕೆ
Eshwar Khandre

Updated on: Jan 20, 2026 | 3:28 PM

ಬೆಂಗಳೂರು, (ಜನವರಿ 20): ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ (all india veerashaiva lingayat Mahasabha) ನೂತನ ಅಧ್ಯಕ್ಷರಾಗಿ ಸಚಿವ ಈಶ್ವರ್ ಖಂಡ್ರೆ (Eshwar Khandre) ಆಯ್ಕೆಯಾಗಿದ್ದಾರೆ. ಶಾಮನೂರು ಶಿವಶಂಕಪ್ಪ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಹಲವು ಘಟಾನುಘಟಿ ನಾಯಕರ ಹೆಸರು ಕೇಳಿಬಂದಿದ್ದವು. ಆದ್ರೆ, ಅಂತಿಮವಾಗಇಂದು (ಜನವರಿ 20) ಬೆಂಗಳೂರಿನ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ್ ಖಂಡ್ರೆ ಅವರನ್ನು ಅವಿರೋಧ ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಈಶ್ವರ್ ಖಂಡ್ರೆ ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧ್ಯಕ್ಷ ಎನ್ನಿಸಿಕೊಂಡಿದ್ದಾರೆ.

ಈ ಹಿಂದೆ ಈಶ್ವರ್ ಖಂಡ್ರೆ ಅವರ ತಂದೆ ಭೀಮಣ್ಣ ಖಂಡ್ರೆ ಕೂಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರಾಗಿದ್ದರು. ಬೆಂಗಳೂರಿನ ಸದಾಶಿವನಗರದ ಅರಮನೆ ರಸ್ತೆಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಗೆ ಶಾಮನೂರು ಶಿವಶಂಕರಪ್ಪ ಅಧ್ಯಕ್ಷರಾಗಿದ್ದರು. ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಈಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಹೆಸರು ಕೂಡ ಕೇಳಿ ಬಂದಿತ್ತು. ಲಿಂಗಾಯತ ಪಂಚಪೀಠದ ಪೀಠಾಧಿಪತಿಗಳೊಬ್ಬರು ಯಡಿಯೂರಪ್ಪ ಅವರು ವೀರಶೈವ ಮಹಾಸಭಾದ ಅಧ್ಯಕ್ಷರಾದರೇ, ಸಂತೋಷ ಎಂದು ಸಹ ಬಹಿರಂಗವಾಗಿಯೇ ಹೇಳಿದ್ದರು. ಆದ್ರೆ, ಈಗ ಕೊನೆಗೆ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿ ಭಾಲ್ಕಿ ಕ್ಷೇತ್ರದ ಶಾಸಕ, ರಾಜ್ಯದ ಅರಣ್ಯ, ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.

ನೂತನ ಅಧ್ಯಕ್ಷರ ಮೊದಲ ಪ್ರತಿಕ್ರಿಯೆ

ಇವತ್ತು ರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆದಿದ್ದು, 52 ಸದಸ್ಯರು ಭಾಗವಹಿಸಿದ್ದಾರೆ.ತೆರವಾದ ರಾಷ್ಟ್ರೀಯ ಅಧ್ಯಕ್ಷರ ಹುದ್ದೆಗೆ ನನ್ನನ್ನು ಆಯ್ಕೆ ಮಾಡಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಸ್ಥಾಪನೆಯಾಗಿದ್ದು 1904 ರಲ್ಲಿ. ಸಾಮಾನ್ಯ ಸಣ್ಣ ಸಂಸ್ಥೆಗಳಂತಲ್ಲ ಇದು. ಅಖಂಡ ವೀರಶೈವ ಲಿಂಗಾಯತರೆಲ್ಲ‌ ಪ್ರಾತಿನಿಧಿಕ ಸಂಸ್ಥೆ ಅಖಿಲ ಭಾರತ ವೀರಶೈವ ಮಹಾಸಭಾ. ಇಲ್ಲಿಯವರೆಗೆ ಒಟ್ಟು 23 ಮಂದಿ ಅಧ್ಯಕ್ಷರಾಗಿದ್ದಾರೆ. ಈಗ ನನಗೆ ಜವಾಬ್ದಾರಿ ಕೊಟ್ಟಿದ್ದು ನನ್ನ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.

ಬೆಂಗಳೂರಿನ ಸದಾಶಿವ ನಗರದ ಅಖಿಲ ಭಾರತ ವೀರಶೈವ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಭೆಯಲ್ಲಿ ಸಚಿವ ಶರಣಬಸಪ್ಪ ದರ್ಶನಪುರ್, ಪ್ರಭಾಕರ್ ಕೋರೆ, ವೀರಣ್ಣ ಚರಂತಿಮಠ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್ ಹುಮ್ನಾಬಾದ್ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ಕಾರ್ಯಕಾರಿ ಮಂಡಳಿ ಸದಸ್ಯರು ಭಾಗವಹಿಸಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:08 pm, Tue, 20 January 26