ರಾಜ್ಯಾದ್ಯಂತ ಮುಂಗಾರು (Monsoon) ಚುರುಕುಗೊಂಡಿದ್ದು ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಹಲವು ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಲ್ಕಿ, ಉಪ್ಪಿನಂಗಡಿ, ಮಂಕಿ, ಹೊನ್ನಾವರ, ಕುಮಟಾ, ಕಾರವಾರ, ಕದ್ರಾ, ಮಾಣಿ, ಕ್ಯಾಸಲ್ ರಾಕ್, ಶಿರಾಲಿ, ಗೋಕರ್ಣ, ಕೋಟ, ಸುಳ್ಯ, ಸಿಂಧನೂರು, ಗೇರುಸೊಪ್ಪ, ಬೆಳ್ತಂಗಡಿ, ಕೊಲ್ಲೂರು, ಉಡುಪಿ, ಕುಂದಾಪುರ, ಕಾರ್ಕಳ, ಸಿದ್ದಾಪುರ, ಅಂಕೋಲಾ, ಧರ್ಮಸ್ಥಳ, ಪುತ್ತೂರಿನಲ್ಲಿ ಮಳೆಯಾಗಿದೆ.
ಕೆಲವು ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ, ಗಾಳಿಯ ವೇಗವು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬೀಸಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮತ್ತಷ್ಟು ಓದಿ: Cyclone Biporjoy: ರಾಜ್ಯದಲ್ಲಿ ಬಿಪರ್ ಜಾಯ್ ಚಂಡಮಾರುತ ಆರ್ಭಟ; ಕರಾವಳಿಯಲ್ಲಿ ಆತಂಕ
ಈ ಸಲ ಮುಂಗಾರು ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಇನ್ನೂ ಆರಂಭವಾಗಿಲ್ಲ. ಮೇನಲ್ಲಿ ಅಲ್ಪಸ್ವಲ್ಪ ಬಿದ್ದ ಮುಂಗಾರುಪೂರ್ವ ಮಳೆಯಿಂದಾಗಿ ಜಮೀನು ಹದಗೊಳಿಸಿದ್ದ ರೈತರು ಪ್ರಸಕ್ತ ತಿಂಗಳ ಮೊದಲ ವಾರದಲ್ಲಿ ಬಿತ್ತನೆ ಕಾರ್ಯ ನಡೆಸಿದ್ದರು.
ಬೆಂಗಳೂರು ಗ್ರಾಮಾಂತರ ದಲ್ಲಿ ಮುಂಗಾರು ಹಂಗಾಮಿನಲ್ಲಿ 71,246 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಅಂದಾಜಿಸಲಾಗಿದೆ. 59,100 ಹೆಕ್ಟೇರ್ನಲ್ಲಿ ರಾಗಿ, 8,136 ಹೆಕ್ಟೇರ್ ಜೋಳ, 948 ಹೆಕ್ಟೇರ್ ತೊಗರಿ, 215 ನೆಲಗಡಲೆ ಬಿತ್ತನೆ ನಿರೀಕ್ಷಿಸಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ಪ್ರಸ್ತುತ 1.54 ಲಕ್ಷ ಹೆಕ್ಟೇರ್ ಗುರಿಗೆ 152 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಬಹುತೇಕ ಕಡೆ ಅಂತರ್ಜಲ ಮಟ್ಟ ಕುಸಿದಿದ್ದು, ನೀರಿನ ಅಭಾವ ಸೃಷ್ಟಿಯಾಗಿದೆ.
ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:32 am, Mon, 19 June 23