ಪಾದಯಾತ್ರೆಗೆ ಸಿಮೀತವಲ್ಲ ಬಿಜೆಪಿ ಹೋರಾಟ: ಬಳ್ಳಾರಿಯಲ್ಲಿ ನಡೆಯಲಿದೆ ಬೃಹತ್ ಸಮಾವೇಶ
ಮುಡಾ ಹಗರಣ ಖಂಡಿಸಿ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ, ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ಇಷ್ಟಕ್ಕೇ ನಮ್ಮ ಹೋರಾಟ ಮುಗಿಯದು ಎಂಬ ಸಂದೇಶ ನೀಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿಯೂ ಹಗರಣ ನಡೆದಿರುವುದನ್ನು ಸಿಎಂ ಸಿದ್ದರಾಮಯ್ಯರೇ ಒಪ್ಪಿಕೊಂಡಿದ್ದಾರೆ. ಈ ತಿಂಗಳ ಅಂತ್ಯದಲ್ಲಿ ಬಳ್ಳಾರಿಯಲ್ಲಿ ಬೃಹತ್ ಸಮಾವೇಶ ಆಯೋಜಿಸಲು ಚಿಂತನೆ ನಡೆದಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.
ಬಿಡದಿ, ಆಗಸ್ಟ್ 5: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆ ಹಮ್ಮಿಕೊಂಡಿರುವ ಬಿಜೆಪಿ ಹೋರಾಟವನ್ನು ಇನ್ನೂ ತೀವ್ರಗೊಳಿಸಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾನುವಾರ ಹೇಳಿದ್ದಾರೆ. ಮೈಸೂರು ಚಲೋ ಪಾದುಯಾತ್ರೆಯ ಎರಡನೇ ದಿನ ಮಾತನಾಡಿದ ಅವರು, ‘ನಮ್ಮ ಹೋರಾಟ ಯಾವುದೇ ವ್ಯಕ್ತಿಯ ವಿರುದ್ಧವಲ್ಲ. ಆದರೆ ಭ್ರಷ್ಟಾಚಾರ ಮತ್ತು ಅಧಿಕಾರದ ದುರಹಂಕಾರದ ವಿರುದ್ಧ. ಈ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಲು ಆಗಸ್ಟ್ 10 ರಂದು ಪಾದಯಾತ್ರೆ ಮುಗಿದ ನಂತರ ನಾವು ಒಂದೆರಡು ಕಾರ್ಯಕ್ರಮಗಳನ್ನು ಯೋಜಿಸುತ್ತಿದ್ದೇವೆ ಎಂದಿದ್ದಾರೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅವ್ಯವಹಾರದಲ್ಲಿ ಶಾಮೀಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಡ ಹೇರಲು ಆಗಸ್ಟ್ ಅಂತ್ಯದ ವೇಳೆಗೆ ಬಳ್ಳಾರಿಯಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲು ಬಿಜೆಪಿ ಚಿಂತನೆ ನಡೆಸಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ವಿ ಸುನೀಲ್ ಕುಮಾರ್ ಹೇಳಿದ್ದಾರೆ.
ಬಿಡದಿ ವೃತ್ತದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಆಡಳಿತಾರೂಢ ಕಾಂಗ್ರೆಸ್ ಜನಾಂದೋಲನ ಸಭೆಗಳನ್ನು ಆಯೋಜಿಸುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದು ನಮ್ಮ ಕಾಲದ ವಿಪರ್ಯಾಸವಲ್ಲವೇ? ಅವರು ಅಧಿಕಾರದಲ್ಲಿದ್ದಾರೆ ಮತ್ತು ಎಲ್ಲಾ ದುಡ್ಡು ಹೊಂದಿದ್ದಾರೆ. ಆದರೆ ಅವರು ನಮ್ಮ ಪಾದಯಾತ್ರೆಯನ್ನು ಎದುರಿಸಲು ಜನಾಂದೋಲನ ಸಭೆಗಳನ್ನು ಆಯೋಜಿಸುತ್ತಿದ್ದಾರೆ. ಇದು, ನಮ್ಮ ಪಾದಯಾತ್ರೆಯಿಂದ ಸರ್ಕಾರಕ್ಕೆ ಆತಂಕ ಸೃಷ್ಟಿಯಾಗಿದೆ ಎಂಬುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಬಗ್ಗೆ ನಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ‘ಮಂತ್ರಿಪಟ್ಟ ಕಳೆದುಕೊಳ್ಳಲು ರೆಡಿಯಾಗಿ’: ಸಚಿವರ ಜತೆ ಹೈಕಮಾಂಡ್ ಸಭೆಯ ಇನ್ಸೈಡ್ ಡಿಟೇಲ್ಸ್ ಇಲ್ಲಿದೆ
ವಾಲ್ಮೀಕಿ ಅಭವೃದ್ಧಿ ನಿಗಮದ ಹಗರಣದಲ್ಲಿ ಅಕ್ರಮವಾಗಿ ವರ್ಗಾವಣೆಯಾಗಿರುವುದು 189 ಕೋಟಿ ರೂ. ಅಲ್ಲ, 89 ಕೋಟಿ ರೂ. ಎಂದು ನೀವೇ (ಸಿಎಂ ಸಿದ್ದರಾಮಯ್ಯ) ಹೇಳಿದ್ದೀರಿ. ಹೀಗಾಗಿ ನೀವು ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:10 am, Mon, 5 August 24