ಮುಡಾ ಪ್ರಕರಣಕ್ಕೆ ಹೊಸ ತಿರುವು: ‘ಬಿ’ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಇಡಿ
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಹಾಕಿರುವ 'ಬಿ' ವರದಿಯನ್ನು ಪ್ರಶ್ನಿಸಿ ಈ ಹಿಂದೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಜಾರಿ ನಿರ್ದೇಶನಾಲಯ (ಇ.ಡಿ) ಸಹ ಬಿ ರಿಪೋರ್ಟ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದೆ. ಈ ಮೂಲಕ ಮುಡಾ ಪ್ರಕರಣಕ್ಕೆ ಹೊಸ ತಿರುವು ಪಡೆದುಕೊಂಡಿದೆ.

ಬೆಂಗಳೂರು, (ಸೆಪ್ಟೆಂಬರ್ 01): ಮುಡಾ ಪ್ರಕರಣಕ್ಕೆ (Muda Scam Case) ಹೊಸ ತಿರುವು ಸಿಕ್ಕಿದೆ. ಮುಡಾ ಪ್ರಕರಣ ಬಿ ರಿಪೋರ್ಟ್ ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಹೈಕೋರ್ಟ್ಗೆ (Karnataka High Court) ಅರ್ಜಿ ಸಲ್ಲಿಸಿದೆ. ಹಲವು ಅಂಶಗಳನ್ನು ಲೋಕಾಯುಕ್ತ ತನಿಖಾಧಿಕಾರಿ ಪರಿಗಣಿಸಿಲ್ಲ. ಇಡಿ ತನಿಖೆಯಲ್ಲಿ ಬೆಳಕಿಗೆ ಬಂದ ಅಂಶಗಳನ್ನು ಪರಿಗಣಿಸಿಲ್ಲ. ಕಾನೂನು ಬಾಹಿರ ಡಿನೋಟಿಫಿಕೇಷನ್ ಬಗ್ಗೆ ತನಿಖೆ ಸಮರ್ಪಕವಾಗಿಲ್ಲ. ಭೂ ಪರಿವರ್ತನೆ ಕಾನೂನುಬಾಹಿರವೆಂಬುದನ್ನು ಪರಿಗಣಿಸಿಲ್ಲ ಎಂದು ಜಾರಿ ನಿರ್ದೇಶನಾಲಯದ ಪರ ಎಎಸ್‌ಜಿ ಅರವಿಂದ್ ಕಾಮತ್ ವಾದ ಮಂಡಿಸಿದರು. ಈ ವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ, ವಿಚಾರಣೆyನ್ನು ನಾಳೆ (ಸೆಪ್ಟೆಂಬರ್2) ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಹಿಂದೆ ಏನೇನು ಆಗಿತ್ತು?
ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ 2025ರ ಫೆಬ್ರವರಿ 12ರಂದು ಬೆಂಗಳೂರಿನ 82ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ಅಂಗೀಕರಿಸಿ ವಿಶೇಷ ನ್ಯಾಯಾಲಯ 2026ರ ಜನವರಿ 28ರಂದು ಆದೇಶ ಹೊರಡಿಸಿದೆ. ಹೀಗಾಗಿ, ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಸಲ್ಲಿಸಿರುವ ʼಬಿʼ ರಿಪೋರ್ಟ್ ಅನ್ನು ಪಡೆದು ಪರಿಶೀಲಿಸಬೇಕು. ʼಬಿʼ ರಿಪೋರ್ಟ್ ಅಂಗೀಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು. ಅಲ್ಲದೆ, ಸ್ವತಂತ್ರ ತನಿಖಾ ಸಂಸ್ಥೆಗೆ ಪ್ರಕರಣದ ತನಿಖೆ ವರ್ಗಾಯಿಸಬೇಕು. ತನಿಖೆ ನಡೆಸಿ ಹೊಸದಾಗಿ ವರದಿ ಸಲ್ಲಿಸಲು ಸ್ವತಂತ್ರ ತನಿಖಾ ಸಂಸ್ಥೆಗೆ ನಿರ್ದೇಶಿಸಬೇಕು ಎಂದು ಸ್ನೇಹಮಯ ಕೃಷ್ಣ ಕೋರಿದ್ದರು. ಆದ್ರೆ, ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಸಹ ಕೋರ್ಟ್ ಮೆಟ್ಟಿಲೇರಿದ್ದು ಪ್ರಕರಣವು ಈಗ ಹೊಸ ಕಾನೂನು ತಿರುವು ಪಡೆದಿದೆ.
ಇದನ್ನೂ ಓದಿ: ಮೂಡಾ ಹಗರಣ: ಹಂಚಿಕೆಯಾಗಿದ್ದ ಎಲ್ಲಾ 1,100 ನಿವೇಶನಗಳನ್ನ ರದ್ದುಗೊಳಿಸಿದ ಸರ್ಕಾರ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರಿಗೆ ಮಾರ್ಟ್ 26ರಂದು ತುರ್ತು ನೋಟಿಸ್ ಜಾರಿ ಮಾಡಿದೆ. ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ‘ಬಿ’ ವರದಿಯನ್ನು ಪುರಸ್ಕರಿಸಿ ಸಿದ್ದರಾಮಯ್ಯ ಅವರಿಗೆ ಕ್ಲೀನ್ ಚೀಟ್ ನೀಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾಲೀಕರಿಗೆ ನೋಟಿಸ್ ನೀಡಿತ್ತು.
ಪ್ರಕರಣವೇನು?:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ.464ರ 3 ಎಕರೆ 16 ಗುಂಟೆ ಜಮೀನು ಸ್ವಾಧೀನಪಡಿಸಿಕೊಂಡು, ಅದರ ಬದಲಿಗೆ ಸುಮಾರು 56 ಕೋಟಿ ರೂ. ಮೌಲ್ಯದ 14 ನಿವೇಶನಗಳನ್ನು ಮುಡಾ ಅಕ್ರಮವಾಗಿ ಹಂಚಿಕೆ ಮಾಡಿದೆ. ಇದರಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಹೀಗಾಗಿ, ಪ್ರಕರಣದ ಕುರಿತು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ 2024ರ ಜುಲೈ 3ರಂದು ಸ್ನೇಹಮಯಿ ಕೃಷ್ಣ ದೂರು ದಾಖಲಿಸಿದ್ದರು. ನಂತರ ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ, 2024ರ ಜೂನ್-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.
ಈ ಬಗ್ಗೆ ಪರಿಶೀಲನೆ ನಡೆಸಿ, ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ.19ರಂದು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ್ದ ಹೈಕೋರ್ಟ್, ಪೊಲೀಸ್ ತನಿಖೆಗೆ ಅನುಮತಿಸಿ 2024ರ ಸೆಪ್ಟೆಂಬರ್ 24ರಂದು ಆದೇಶಿಸಿತ್ತು. ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ಸದಸ್ಯರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಅದನ್ನು ವಿಶೇಷ ನ್ಯಾಯಾಲಯ ಅಂಗೀಕರಿಸಿತ್ತು.




