ಸಿಎಂಗೆ ಮತ್ತಷ್ಟು ಸಂಕಷ್ಟ ತಂದಿಟ್ಟ ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ಗೆ ದೂರು ದಾಖಲು!
ಮುಡಾ ಹಗರಣ ಆರೋಪ ಕಾಂಗ್ರೆಸ್ ಸರ್ಕಾರವನ್ನೇ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದು, ಭಾರೀ ಸಂಚಲನ ಮೂಡಿಸಿದೆ. ಇದರ ಮಧ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು ದಾಖಲಿಸಲಾಗಿದೆ.
ಬೆಂಗಳೂರು, (ಆಗಸ್ಟ್ 08): ಮುಡಾ ಸೈಟ್ ಹಗರಣ (MUDA Scam) ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು (Private Complaint) ದಾಖಲಾಗಿದೆ. ಸ್ನೇಹಮಯಿ ಕೃಷ್ಣ ಎಂಬುವರು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದ್ದು, ಕೇಸ್ನ್ನು ವಿಚಾರಣೆಗೆ ಸ್ವೀಕರಿಸಬಹುದೇ ಎಂದು ನಾಳೆ(ಆಗಸ್ಟ್ 08) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಗಳಿವೆ.
ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸ್ನೇಹಮಯಿ ಕೃಷ್ಣ ಎಂಬುವರು ದಾಖಲಿಸಿರುವ ಖಾಸಗಿ ದೂರನ್ನು ನಾಳೆ ಜನಪ್ರತಿನಿಧಿಗಳ ನ್ಯಾಯಾಲಯವು ವಿಚಾರಣೆ ನಡೆಸುವ ಸಾಧ್ಯತೆಗಳಿದ್ದು, ಈ ಕೇಸ್ ಅನ್ನು ವಿಚಾರಣೆಗೆ ಸ್ವೀಕರಿಸಬಹುದೇ ಎಂಬ ವಾದ ನಡೆಯಲಿದೆ.
ಇದನ್ನೂ ಓದಿ: ಖುದ್ದು ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ಗೆ ಕೋರ್ಟ್ ಸಮನ್ಸ್
ಇನ್ನು ಕೋರ್ಟ್ನಲ್ಲಿ ಖಾಸಗಿ ದೂರು ದಾಖಲಿಸಿರುವ ಬಗ್ಗೆ ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಸುಳ್ಳು ಕೇಸ್ಗಳನ್ನು ದಾಖಲಿಸಿದರೆ ಉತ್ತರ ಕೊಡಲು ಶಕ್ತಿ ಇದೆ. ಕಾನೂನಿನಲ್ಲಿ ಸುಳ್ಳು ಕೇಸ್ಗಳು ನಿಲ್ಲುವುದಿಲ್ಲ ಎಂದು ಹೇಳಿದರು.
ಈಗಾಗಲೇ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ ಅವರ ದೂರಿನ ಮೇರೆ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ಅವರು ಸಿಎಂ ಸಿದ್ದರಾಮಯ್ಯಗೆ ನಿಮ್ಮ ವಿರುದ್ಧ ಏಕೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬಾರದು ಎಂದು ಶೋಕಾಸ್ ನೋಟಿಸ್ ನೀಡಿದ್ದಾರೆ. ಅಲ್ಲದೇ ಈ ಬಗ್ಗೆ ಏಳು ದಿನಗಳ ಒಳಗೆ ಉತ್ತರ ನೀಡುವಂತೆ ಸೂಚಿಸಿದ್ದರು. ಅದರಂತೆ ಮುಖ್ಯಮಂತ್ರಿ ಸಿದ್ದರಾಂಯ್ಯ ಅವರು ಸುದೀರ್ಘವಾಗಿ ರಾಜ್ಯಪಾಲರಿಗೆ ಉತ್ತರ ನೀಡಿದ್ದಾರೆ.
ಸದ್ಯ ಇದೀಗ ರಾಜ್ಯಪಾಲರು ಯಾವ ಕ್ರಮಕೈಗೊಳ್ಳುತ್ತಾರೆ ಎನ್ನುವುದೇ ಕುತೂಹಲಕ್ಕೆ ಕಾರಣವಾಗಿದೆ. ಇದರ ಮಧ್ಯ ಕೋರ್ಟ್‌ಗೆ ಖಾಸಗಿ ದೂರು ದಾಖಲಾಗಿದ್ದು, ಸಿದ್ದರಾಮಯ್ಯಗೆ ಮೇಲೆಂದ ಮೇಲೆ ಸಂಕಷ್ಟಗಳು ಎದುರಾಗುತ್ತಲೇ ಇವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 4:43 pm, Thu, 8 August 24