ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಕಾನೂನು ತಜ್ಞರಿಂದ ವರದಿ ಪಡೆದ ರಾಜ್ಯಪಾಲ

| Updated By: ವಿವೇಕ ಬಿರಾದಾರ

Updated on: Jul 31, 2024 | 12:30 PM

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆಯ ಮುನ್ಸೂಚನೆ ಟಿವಿ9ಗೆ ದೊರೆತಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ​​ಕಾನೂನು ತಜ್ಞರಿಂದ ವರದಿ ಪಡೆದುಕೊಂಡಿದ್ದಾರೆ.

ಮುಡಾ ಹಗರಣ: ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಕಾನೂನು ತಜ್ಞರಿಂದ ವರದಿ ಪಡೆದ ರಾಜ್ಯಪಾಲ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು, ಜುಲೈ 31: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ಬೆಳವಣಿಗೆಯ ಮುನ್ಸೂಚನೆ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ವಿಚಾರಣೆಗೆ ಅನುಮತಿ ನೀಡುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot)​​ ಕಾನೂನು ತಜ್ಞರಿಂದ ವರದಿ ಪಡೆದುಕೊಂಡಿದ್ದಾರೆ. ಮಧ್ಯಪ್ರದೇಶ, ಮಹಾರಾಷ್ಟ್ರ, ಕರ್ನಾಟಕದ ಪ್ರಮುಖ ಪ್ರಕರಣ ಉಲ್ಲೇಖಿಸಿ ಕಾನೂನು ತಜ್ಞರು ರಾಜ್ಯಪಾಲರಿಗೆ ವರದಿ ನೀಡಿದ್ದಾರೆ ಎಂದು ಟಿವಿ9ಗೆ ಉನ್ನತ ಮೂಲಗಳಿಂದ ಮಾಹಿತಿ ದೊರೆತಿದೆ.

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಟಿ.ಜೆ.ಅಬ್ರಾಹಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್ ಅವರು ತುರ್ತು ಮಧ್ಯಸ್ಥಿಕೆ ವಹಿಸಬೇಕು ಎಂದು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಟಿಜೆ ಅಬ್ರಹಾಂ ಒತ್ತಾಯಿಸಿದ್ದರು.

ಕಳೆದ ಶುಕ್ರವಾರ ರಾಜ್ಯಪಾಲರನ್ನು ಭೇಟಿ ಮಾಡಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 218 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ, 1988 ರ ಸೆಕ್ಷನ್ 17 ಎ ಮತ್ತು 19 ರ ಅಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದರು.

ಇದನ್ನೂ ಓದಿ: ಮುಡಾ ಹಗರಣ: ಸಹಾಯಕ್ಕೆ ಬರಬೇಕೆಂದು ಹೈಕಮಾಂಡ್​ಗೆ ಸಿದ್ದರಾಮಯ್ಯ ಮನವಿ ಮಾಡಿದ್ಯಾಕೆ?

ವಿಚಾರಣಾ ಅನುಮತಿ ನೀಡುವುದನ್ನು ತಡೆಯಲು ಕಸರತ್ತು

ಮುಖ್ಯಮಂತ್ರಿಗಳ ವಿರುದ್ಧ ವಿಚಾರಣಾ ಅನುಮತಿ ನೀಡುವುದನ್ನು ತಡೆಯಲು ಮುಂದಿನ ಸಭೆಯಲ್ಲಿ ಮಹತ್ವದ ನಿರ್ಣಯ ಅಂಗೀಕರಿಸಲು ಸಂಪುಟ ಸದ್ದಿಲ್ಲದೆ ತಯಾರಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣ ಅನುಮತಿ ನೀಡದಂತೆ ಒಂದು ಸಾಲಿನ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಲಿದೆ. ಈ ಬಗ್ಗೆ ಈಗಾಗಲೇ ಕಾನೂನು ತಜ್ಞರಿಂದ ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಸಂಗ್ರಹಿಸಿದ್ದಾರೆ.

ಏನಿದು ಮುಡಾ ಹಗರಣ

ಸಿದ್ದರಾಮಯ್ಯ ಅವರ ಧರ್ಮಪತ್ನಿ ಪಾರ್ವತಿ ಅವರಿಗೆ ಮುಡಾ ಮೈಸೂರಿನ ವಿಜಯನಗರ ಪ್ರದೇಶದಲ್ಲಿ 14 ನಿವೇಶನಗಳನ್ನು ಅಕ್ರಮವಾಗಿ ಹಂಚಿಕೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಗರಣದಿಂದ ರಾಜ್ಯದ ಬೊಕ್ಕಸಕ್ಕೆ 45 ಕೋಟಿ ರೂಪಾಯಿಗಳ ನಷ್ಟವನ್ನುಂಟಾಗಿದೆ ಎಂದು ಹೇಳಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:11 pm, Wed, 31 July 24