ಮುಡಾ ಹಗರಣ: ಹೈಕೋರ್ಟ್ ತೀರ್ಪು ಬಂದಾಯ್ತು, ಮುಂದಿನ ಕಾನೂನು ಪ್ರಕ್ರಿಯೆ ಏನಿರಲಿದೆ? ಇಲ್ಲಿದೆ ವಿವರ
ರಾಜ್ಯಪಾಲರು ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಮುಂದೇನು ಎಂಬ ಪ್ರಶ್ನೆ ಉದ್ಭವಿಸಿದೆ. ಮುಂದಿನ ಕಾನೂನು ಪ್ರಕ್ರಿಯೆ ಏನಿರಲಿದೆ? ಸಿಎಂ ಸಿದ್ದರಾಮಯ್ಯ ಪರ ವಕೀಲರ ನಡೆ ಏನಿರಲಿದೆ? ಮಾಹಿತಿ ಇಲ್ಲಿದೆ.
ಬೆಂಗಳೂರು, ಸೆಪ್ಟೆಂಬರ್ 24: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್, ಮಂಗಳವಾರ ವಜಾಗೊಳಿಸಿದೆ. ಇದರೊಂದಿಗೆ, ಮುಂದಿನ ಕಾನೂನು ಪ್ರಕ್ರಿಯೆ ಏನಿರಲಿದೆ? ಸಿದ್ದರಾಮಯ್ಯ ವಿರುದ್ಧದ ದೂರಿನ ವಿಚಾರಣೆ ಯಾವ ರೀತಿ ಸಾಗಲಿದೆ ಎಂಬ ಕುತೂಹಲ ಮೂಡಿದೆ. ಈ ಬಗ್ಗೆ ದೂರುದಾರರಾದ ಸ್ನೇಹಮಯಿ ಕೃಷ್ಣ ಹಾಗೂ ಟಿಜೆ ಅಬ್ರಹಾಂ ಮಾಹಿತಿ ನೀಡಿದ್ದಾರೆ.
ಸಿದ್ದರಾಮಯ್ಯ ವಿರುದ್ಧದ ಪ್ರಕರಣ ಇಂದು ಅಥವಾ ನಾಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಸದ್ಯ ದೂರುದಾರರು ಹೈಕೋರ್ಟ್ ಆದೇಶದ ಪ್ರತಿಯೊಂದಿಗೆ ತೆರಳಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವಿಚಾರಣೆಗಾಗಿ ಮನವಿ ಮಾಡಲಿದ್ದಾರೆ. ಇದನ್ನು ಪರಿಗಣಿಸಿ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡುವ ಸಾಧ್ಯತೆ ಇದೆ.
ಒಂದು ವೇಳೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶ ನೀಡಿದಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಲಿದೆ. ಇದು ಸಿದ್ದರಾಮಯ್ಯ ಅವರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಲಿದೆ.
ರಾಜ್ಯಪಾಲರ ಆದೇಶ ಕಾನೂನು ಬದ್ಧವಾಗಿದೆ. ಇದರಿಂದ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬ ದೂರುದಾರ ಟಿಜೆ ಅಬ್ರಹಾಂ ಪ್ರತಿಕ್ರಿಯಿಸಿ, ನಮ್ಮ ಮನವಿಗಳ ಆಧಾರದಲ್ಲಿಯೇ ನ್ಯಾಯಾಲಯದ ತೀರ್ಪು ಬಂದಿದೆ ಎಂದಿದ್ದಾರೆ.
ವಿಭಾಗೀಯ ಪೀಠಕ್ಕೆ ಮೇಲ್ಮನವಿಗೆ ಸಿಎಂ ಪರ ವಕೀಲರಿಂದ ಸಿದ್ಧತೆ
ಈ ಮಧ್ಯೆ, ಸಿಎಂ ಅರ್ಜಿಯನ್ನು ತಿರಸ್ಕರಿಸಿದ ಆದೇಶದ ವಿರುದ್ಧ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ನಾಳೆಯೇ ಮೇಲ್ಮನವಿ ಸಲ್ಲಿಸಲು ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಇಂದು ಆದೇಶದ ಪ್ರತಿ ಪಡೆಯಲಿರುವ ವಕೀಲರು, ನಾಳೆಯೇ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:51 pm, Tue, 24 September 24