ಮುಡಾ ಹಗರಣ: ವಿಡಿಯೋ ಸಮೇತ ‘ವೈಟ್ನರ್‌’ ಹಿಂದಿರುವ ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 26, 2024 | 3:27 PM

ಮುಡಾ ದಾಖಲೆ ತಿದ್ದುಪಡಿಗೆ ವೈಟ್ನರ್‌ ಬಳಕೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿದ್ದರು. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿಡಿಯೋ ಹಂಚಿಕೊಳ್ಳುವ ಮೂಲಕ ಬಿಜೆಪಿ-ಜೆಡಿಎಸ್ ನಾಯಕರ ಟೀಕೆಗೆ ಸ್ಪಷ್ಟನೆ ನೀಡಿದ್ದಾರೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ವಾಗ್ದಾಳಿ ಮಾಡಿದ್ದಾರೆ.

ಮುಡಾ ಹಗರಣ: ವಿಡಿಯೋ ಸಮೇತ ‘ವೈಟ್ನರ್‌’ ಹಿಂದಿರುವ ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಮುಡಾ ಹಗರಣ: ವಿಡಿಯೋ ಸಮೇತ ‘ವೈಟ್ನರ್‌’ ಹಿಂದಿರುವ ಅಸಲಿ ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
Follow us on

ಬೆಂಗಳೂರು, ಆಗಸ್ಟ್​​ 26: ಕಳೆದ ಕೆಲ ದಿನಗಳಿಂದ ಸುದ್ದಿಯಲ್ಲಿರುವ ಮುಡಾ ಹಗರಣಕ್ಕೆ ಸರ್ಕಾರವೇ ತಲ್ಲಣಗೊಂಡಿದೆ. ಆದರೆ ಈ ತಲ್ಲಣಕ್ಕೆ ಜಗ್ಗದೇ ಕುಗ್ಗದೇ ತೊಡೆ ತಟ್ಟಿ ನಿಂತಿರುವ ಸಿಎಂ ಸಿದ್ದರಾಮಯ್ಯ (Siddaramaiah) ಕಾನೂನು ಸಮರ ನಡೆಸುತ್ತಿದ್ದಾರೆ. ಮುಡಾ ದಾಖಲೆ ತಿದ್ದುಪಡಿಗೆ ವೈಟ್ನರ್‌ ಬಳಕೆ ಮಾಡಲಾಗಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿದ್ದರು. ಇದೀಗ ಈ ಆರೋಪಕ್ಕೆ ಸಿದ್ದರಾಮಯ್ಯ ವಿಡಿಯೋ ಸಮೇತ ಬಿಜೆಪಿ-ಜೆಡಿಎಸ್ ನಾಯಕರ ಟೀಕೆಗೆ ಸ್ಪಷ್ಟನೆ ನೀಡಿದ್ದಾರೆ.

ಬಿಜೆಪಿ-ಜೆಡಿಎಸ್​ ನಾಯಕರ ವಿರುದ್ಧ ಸಿದ್ದರಾಮಯ್ಯ ಕಿಡಿ

ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಸಿದ್ದರಾಮಯ್ಯ, ಮುಡಾ ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ನಮ್ಮ ಕುಟುಂಬದ ಜಮೀನಿಗೆ ಬದಲಿ ಭೂಮಿ ನೀಡುವಂತೆ ನನ್ನ ಪತ್ನಿ ಸಲ್ಲಿಸಿದ್ದ ಅರ್ಜಿಯಲ್ಲಿ ನಾಲ್ಕೈದು ಪದಗಳಿಗೆ ವೈಟ್ನರ್‌ ಹೆಚ್ಚಿದನ್ನೇ ಮಹಾನ್‌ ಅಪಾರಾಧವೆಂಬಂತೆ ಗಂಟಲು ಹರಿದುಕೊಂಡ ಬಿಜೆಪಿ – ಜೆಡಿಎಸ್‌ ನಾಯಕರೇ, ವೈಟ್ನರ್‌ ಹಿಂದಿರುವ ಅಕ್ಷರಗಳೇನು ಎಂಬುದು ಈ ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣುತ್ತಿದೆ. ನಿಮ್ಮ ದ್ವೇಷದ ಕನ್ನಡಕ ಕಳಚಿಟ್ಟು ಸರಿಯಾಗಿ ಕಣ್ಣುಬಿಟ್ಟು ನೋಡಿ ಎಂದು ಕಿಡಿಕಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ನನ್ನ ಪತ್ನಿ ಬದಲಿ ಭೂಮಿ ಕೇಳಿದ್ದು ತನ್ನದೇ ಜಮೀನನ್ನು ಮುಡಾ ವಶಕ್ಕೆ ಪಡೆದು ಅಭಿವೃದ್ಧಿಪಡಿಸಲಾದ ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ ಪ್ರಾಧಿಕಾರವು ಅಭಿವೃದ್ಧಿ ಪಡಿಸಿದ ಸಮಾನಾಂತರ ಬಡಾವಣೆಯಲ್ಲಿ. ಅಲ್ಲಿ ನಿವೇಶನಗಳು ಲಭ್ಯವಿರದ ಕಾರಣಕ್ಕೆ “ದೇವನೂರು 3ನೇ ಹಂತದ ಬಡಾವಣೆಯಲ್ಲಿ ಅಥವಾ ನಂತರ” ಎಂಬ ನಾಲ್ಕೈದು ಪದಗಳಿಗೆ ವೈಟ್ನರ್‌ ಹಾಕಿ, ಪ್ರಾಧಿಕಾರ ಅಭಿವೃದ್ಧಿ ಪಡಿಸಿದ ಸಮಾನಂತರ ಬಡಾವಣೆಯಲ್ಲಿ ನಿವೇಶನ ನೀಡಬೇಕೆಂಬ ಮನವಿ ಮಾಡಿದ್ದಾರೆ. ಇದರಲ್ಲಿ ಟಿಪ್ಪಣಿಯೂ ಇಲ್ಲ, ಆದೇಶವೂ ಇಲ್ಲ, ಅಪ್ಪಣೆಯೂ ಇಲ್ಲ. ತನಗೆ ಸೇರಿದ ಭೂಮಿಯಲ್ಲೇ ನಿವೇಶನ ಕೊಡಿ ಎಂಬ ಮನವಿ ಅಷ್ಟೆ ಇದೆ ಎಂದಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಹೈಕಮಾಂಡ್ ಬೆಂಬಲ ನೀಡಿದ್ದರೂ ಮುಂದಿದೆ ಬದಲಾವಣೆ? ಕಾಂಗ್ರೆಸ್ ಉನ್ನತ ಮೂಲಗಳಿಂದ ಸುಳಿವು

“ವೈಟ್ನರ್‌ ಹಚ್ಚಿ ಕಪ್ಪು ಚುಕ್ಕೆ ಅಳಿಸಿಕೊಳ್ಳಲು ಸಾಧ್ಯವಿಲ್ಲ, ಸಿಎಂ ಪತ್ನಿ ನಿವೇಶನ ಕೇಳಿದ್ದು ವಿಜಯನಗರದಲ್ಲಿ, ಮುಡಾ ವಿಚಾರ ಚರ್ಚೆಗೆ ಬಂದ ನಂತರ ಸಿದ್ದರಾಮಯ್ಯ ಅವರ ಪರವಾಗಿ ಯಾರೋ ಹೋಗಿ ವೈಟ್ನರ್‌ ಹಚ್ಚಿ ಬಂದಿದ್ದಾರೆಂದು” ಬೊಬ್ಬೆ ಹಾಕುತ್ತಿದ್ದ ಸ್ವಯಂ ಘೋಷಿತ ಕಾನೂನು ಪಂಡಿತರು ಈಗೇನು ಹೇಳುತ್ತಾರೆ? ಆತುರದಲ್ಲಿ ಮೂಗು ಕತ್ತರಿಸಿಕೊಂಡು, ರಾತ್ರಿಯೆಲ್ಲ ಕನ್ನಡಿ ಮುಂದೆ ನಿಂತು ಕಣ್ಣೀರು ಹಾಕಿದ್ದರಂತೆ ಹಾಗಾಯಿತು ಕೆಲವು ಅತಿ ಬುದ್ದಿವಂತರ ಕತೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಹೈಕಮಾಂಡ್ ಜತೆ ಏನೇನು ಚರ್ಚೆ ನಡೆಯಿತು? ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಹೇಳಿದ್ದಿಷ್ಟು

ಕಪೋಲ ಕಲ್ಪಿತ ಕಟ್ಟುಕತೆಗಳ ಮೂಲಕ ನನ್ನನ್ನು ಹಾಗೂ ನನ್ನ ಕುಟುಂಬವನ್ನು ವಿನಾಕಾರಣ ಅಪರಾಧಿಗಳಂತೆ ಬಿಂಬಿಸಿ ಬಾಯಿಗೆ ಬಂದಂತೆ ಮಾತನಾಡಿರುವ ಬಿಜೆಪಿ-ಜೆಡಿಎಸ್‌ ಪಕ್ಷಗಳ ವಿವೇಕ ಶೂನ್ಯ ನಾಯಕರು ಇಂದು ಜನರೆದುರು ಬೆತ್ತಲಾಗಿದ್ದಾರೆ. ಸತ್ಯ ಹಾಗೆಯೇ, ಅರಿವಿಗೆ ಬರುವುದು ಸ್ವಲ್ಪ ತಡವಾಗಬಹುದು, ಆದರೆ ಅಂತಿಮ ಗೆಲುವು ಸತ್ಯದ್ದೇ ಆಗಿರುತ್ತದೆ ಎಂದು ಹರಿಹಾಯ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.