ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕಕ್ಕೆ (Invest Karnataka)’ ಪ್ರಧಾನಿ ನರೇಂದ್ರ ಮೋದಿ (Narendra Modi) ನವೆಂಬರ್ 2ರಂದು ವರ್ಚುವಲ್ ಆಗಿ ಚಾಲನೆ ನೀಡಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ಬೆಂಗಳೂರಿನಲ್ಲಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ 2ರ ಬೆಳಗ್ಗೆ 10.30ಕ್ಕೆ ಸಮಾವೇಶಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಪಿಯೂಷ್ ಗೋಯಲ್ ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ನವೆಂಬರ್ 2ರಿಂದ 4ರ ವರೆಗೆ ಸಮಾವೇಶ ನಡೆಯಲಿದೆ.
5 ಲಕ್ಷ ಕೋಟಿ ರೂ. ಹೂಡಿಕೆ ನಿರೀಕ್ಷೆ
ಮೂರು ದಿನಗಳ ಕಾಲ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಹೂಡಿಕೆ ಹರಿದುಬರುವ ನಿರೀಕ್ಷೆ ಇದೆ. ದುಬೈ ಎಕ್ಸ್ಪೋದಲ್ಲಿ ಭಾಗಿಯಾಗಿದ್ದ ಉದ್ಯಮಿಗಳು ಸಮಾವೇಶದಲ್ಲಿ ಭಾಗವಹಿಸಲಿದ್ದು, ಹೂಡಿಕೆ ಮಾಡಲಿದ್ದಾರೆ ಎಂದು ಸಚಿವರು ಹೇಳಿದರು. ದಾವೋಸ್ ವರ್ಲ್ಡ್ ಎಕಾನಾಮಿಕ್ ಫೋರಂನಲ್ಲಿ ಕೂಡ ಕರ್ನಾಟಕ ಅತಿ ಹೆಚ್ಚು ಒಪ್ಪಂದಗಳಿಗೆ ಸಹಿ ಹಾಕಿತ್ತು ಎಂದು ಅವರು ಹೇಳಿದರು.
ಇದನ್ನೂ ಓದಿ: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಜ್ಜು: ಸಚಿವ ನಿರಾಣಿ
ರಾಜ್ಯದಲ್ಲಿ 600ಕ್ಕೂ ಆರ್ ಆ್ಯಂಡ್ ಡಿ ಸಂಸ್ಥೆಗಳಿವೆ. ಸ್ಟಾರ್ಟ್ ಅಪ್ ಕಂಪನಿಗಳಲ್ಲೂ ರಾಜ್ಯ ಮುಂಚೂಣಿಯಲ್ಲಿದೆ. ಕಲ್ಯಾಣ ಕರ್ನಾಟಕದಲ್ಲೂ ಹಲವು ಯೋಜನೆಗಳನ್ನು ಹಮ್ಮಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ ಎಂದು ನಿರಾಣಿ ಹೇಳಿದರು.
ರಾಜ್ಯದ ಹಲವೆಡೆ ವಿಮಾನ ನಿಲ್ದಾಣ
ರಾಜ್ಯದ ಹಲವೆಡೆ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಚಿಕ್ಕಮಗಳೂರು, ಬಾದಾಮಿ, ಕೊಪ್ಪಳ, ರಾಯಚೂರು, ದಾವಣಗೆರೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ. ಕಾರವಾರ, ಮಂಗಳೂರು ಬಂದರು ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುರುಗೇಶ್ ನಿರಾಣಿ ತಿಳಿಸಿದರು.
ನವೆಂಬರ್ 4 ರಂದು ಹೂಡಿಕೆದಾರರ ಸಮಾವೇಶದ ಸಮಾರೋಪ ನಡೆಯಲಿದ್ದು, ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರ ಹಲವು ಕ್ಷೇತ್ರಗಳಲ್ಲಿ ಕೈಗೊಂಡಿರುವ ಕ್ರಮಗಳಿಂದಾಗಿ ರಾಜ್ಯಕ್ಕೆ ಬಂಡವಾಳ ಹೆಚ್ಚಿನ ಪ್ರಮಾಣದಲ್ಲಿ ಹರಿದುಬರಬಹುದೆಂದು ನಿರೀಕ್ಷಿಸಲಾಗಿದೆ ಎಂದು ನಿರಾಣಿ ತಿಳಿಸಿದರು.
ಸಮಾವೇಶಕ್ಕೆ ಎಲ್ಲ ರೀತಿಯ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಸಚಿವರು ಇತ್ತೀಚೆಗೆ ತಿಳಿಸಿದ್ದರು. ಸಮಾವೇಶಕ್ಕೆ ಪೂರ್ವಭಾವಿಯಾಗಿ ನಡೆಸಲಾಗಿರುವ ಅಂತಾರಾಷ್ಟ್ರೀಯ ಹಾಗೂ ದೇಶೀಯ ರೋಡ್ ಶೋ ಕೂಡ ಯಶಸ್ವಿಯಾಗಿದೆ ಎಂದು ಅವರು ಹೇಳಿದ್ದರು.
ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:43 pm, Mon, 31 October 22