ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲು
ಮೈಸೂರಿನಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಮುಸ್ಲಿಂ ವಿರೋಧಿ ಹೇಳಿಕೆ ನೀಡಿದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ಯೂತ್ ಕಾಂಗ್ರೆಸ್ ನಾಯಕ ಸೈಯದ್ ಅಬ್ರಾರ್ ಅವರ ದೂರಿನ ಆಧಾರದ ಮೇಲೆ ಉದಯಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಲಾಗಿದೆ.

ಮೈಸೂರು, ಫೆಬ್ರವರಿ 22: ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಮೇಲೆ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (pratap simha) ವಿರುದ್ಧ ಎಫ್ಐಆರ್ ದಾಖಲಾಗಿದೆ. ಯೂತ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ನೀಡಿದ್ದ ದೂರು ಆಧರಿಸಿ ಮೈಸೂರು ಉದಯಗಿರಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರಿನಲ್ಲೇನಿದೆ?
ಮಾಜಿ ಸಂಸದ ಪ್ರತಾಪ್ ಸಿಂಹ ಫೆಬ್ರವರಿ 20 ರಂದು ಉದಯಗಿರಿ ವ್ಯಾಪ್ತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪ್ರತಿಕ್ರಿಯಿಸಿದ್ದಾರೆ. ಮುಸ್ಲಿಂ ಸಮುದಾಯದವರು ಈ ದೇಶದ ಪ್ರಜೆಗಳೇ ಅಲ್ಲ ಎಂಬ ರೀತಿಯಲ್ಲಿ ಹೇಳಿದ್ದಾರೆ. ಮುಸ್ಲಿಂ ಸಮುದಾಯದ ಜನ ಸಂಖ್ಯೆ ಜಾಸ್ತಿ ಮಾಡಿಕೊಂಡು ಹೆಚ್ಚು ಮಕ್ಕಳು ಹುಟ್ಟಿಸುತ್ತಿದ್ದಾರೆ ಎಂಬ ಹೇಳಿಕೆಯನ್ನು ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಅವರಲ್ಲಿರುವ ಎದೆಗಾರಿಕೆ, ಧಾಡಸಿತನ ಸಿದ್ದರಾಮಯ್ಯ ಅವರಲ್ಲಿ ಯಾಕಿಲ್ಲ? ಪ್ರತಾಪ್ ಸಿಂಹ
ಮುಸ್ಲಿಂ ಮತ್ತು ಹಿಂದೂ ಸಮುದಾಯದ ನಡುವೆ ಕೋಮು ಘರ್ಷಣೆ ಉಂಟುಮಾಡುವ ರೀತಿಯಲ್ಲಿ ಹೇಳಿಕೆಯನ್ನು ನೀಡಿದ್ದಾರೆ. ಮುಸ್ಲಿಂ ಸಮುದಾಯದ ಜನರನ್ನು ನಿಂದಿಸುವ ರೀತಿಯಲ್ಲಿ ಪ್ರಚೋದನಾ ಭಾಷಣವನ್ನು ಮಾಡಿದ್ದಾರೆ. ಆದ್ದರಿಂದ ಪ್ರತಾಪ್ ಸಿಂಹರವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಯೂತ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಬ್ರಾರ್ ದೂರು ನೀಡಿದ್ದಾರೆ.
ಪ್ರತಾಪ್ ಸಿಂಹ ಹೇಳಿದ್ದೇನು?
ಮೈಸೂರಿನ ಉದಯಗಿರಿ ಠಾಣೆ ಮೇಲಿನ ಕಲ್ಲು ತೂರಾಟ ಪ್ರಕರಣ ವಿಚಾರವಾಗಿ ಇತ್ತೀಚೆಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದ ಪ್ರತಾಪ್ ಸಿಂಹ, ದೇಶ ಇಬ್ಭಾಗ ಆದಾಗಲೇ ಮುಸ್ಲಿಂರು ಈ ದೇಶವನ್ನು ಬಿಟ್ಟು ತೊಲಗಬೇಕಿತ್ತು. ಆದರೆ ಇಲ್ಲಿ ಉಳಿದಕೊಂಡು ಮಕ್ಕಳನ್ನು ಹುಟ್ಟಿಸುವುದು ಬಿಟ್ಟು ಬೇರೇನು ಮಾಡುತ್ತಿದ್ದಾರೆ ಹೇಳಿ? ಎಂದಿದ್ದರು. ಸದ್ಯ ಪ್ರತಾಪ್ ಸಿಂಹರ ಈ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:58 pm, Sat, 22 February 25