ಇಂದು ಮೈಸೂರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಭೇಟಿ: ಸರಣಿ ಸಭೆ
Mysuru: ರಾಜ್ಯ ಸರ್ಕಾರ 100 ದಿನ ಪೂರೈಸಿದೆ. ಮತ್ತು ಗೃಹಲಕ್ಷ್ಮಿ ಯೋಜನೆಗೆ ಚಾಲನೆ. ಈ ಎರಡೂ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಒಟ್ಟಿಗೆ ನಡೆಸಲು ಸಿದ್ಧತೆ ನಡೆಸಿದ್ದು, ಆ.30 ರಂದು ಮೈಸೂರಿನಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದ ತಯಾರಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೈಸೂರು ಪ್ರವಾಸ ಕೈಗೊಳ್ಳಲಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಇಂದು (ಆ.28) ಮೈಸೂರಿಗೆ ಆಗಮಿಸಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಬೆಳಿಗ್ಗೆ 11 ಗಂಟೆಗೆ ರಸ್ತೆ ಮೂಲಕ ತವರು ಜಿಲ್ಲೆ ಮೈಸೂರಿಗೆ ಆಗಮಿಸಲಿದ್ದು, ಮೂರು ದಿನ ಸಾಂಸ್ಕೃತಿಕ ನಗರಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಮಧ್ಯಾಹ್ನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದಲ್ಲಿರುವ ಕಣ್ಣಿನ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಸಂಜೆ ಏಳು ಗಂಟೆಗೆ ಮಾನಸ ಗಂಗೋತ್ರಿ ವಿಶ್ವವಿದ್ಯಾಲಯ (Manasagangotri University) ವಿದ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಸಂಜೆ 4.30ಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಮೈಸೂರಿಗೆ ಬರಲಿದ್ದಾರೆ. ಇಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮದ ತಯಾರಿ ಕುರಿತು ಶಾಸಕರು ಮತ್ತು ಸಚಿವರ ಜೊತೆ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಇಂದು ಮೈಸೂರಿನಲ್ಲೇ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯ ಸರ್ಕಾರ 100 ದಿನ ಪೂರೈಸಿದೆ. ಮತ್ತು ಗೃಹಲಕ್ಷ್ಮಿ ಯೋಜನೆಗೆ ಚಾಲನೆ. ಈ ಎರಡೂ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಒಟ್ಟಿಗೆ ನಡೆಸಲು ಸಿದ್ಧತೆ ನಡೆಸಿದ್ದು, ಆ.30 ರಂದು ಮೈಸೂರಿನಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದ ತಯಾರಿ ಸಂಬಂಧ ಈಗಾಗಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಚಿವ ಹೆಚ್.ಸಿ ಮಹದೇವಪ್ಪ ಮೈಸೂರಿನಲ್ಲಿ ನೆಲೆವೂರಿದ್ದು, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರಕ್ಕೆ 100 ದಿನ ಸಂಭ್ರಮ: ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ, ಜನತೆಗೆ ಧನ್ಯವಾದ ತಿಳಿಸಿದ ಸಿಎಂ
ಇನ್ನು ಆಗಸ್ಟ್ 30 ರಂದು ನಡೆಯುವ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಮಹಾರಾಜ ಕಾಲೇಜು ಮೈದಾನದಲ್ಲಿ 80 ಅಡಿ ಉದ್ದ, 60 ಅಡಿ ಅಗಲ, 8 ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಿಸಲಾಗುತ್ತಿದೆ. ವೇದಿಕೆ ಮೇಲೆ ಬೃಹತ್ ಎಲ್ಇಡಿ ಪರದೆ ಹಾಕಲಾಗಿದೆ. ವಿಐಪಿ, ವಿವಿಐಪಿಗಳಿಗೆ ವಿಶ್ರಾಂತಿ ಕೊಠಡಿಗಳನ್ನೂ ಸಹ ನಿರ್ಮಾಣ ಮಾಡಲಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗಾಗಿ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ರೀತಿಯ ಸೌಕರ್ಯಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವೇದಿಕೆ ಮುಂಭಾಗ ಒಂದು ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ