ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರವಿಕುಮಾರ್ ಎಂಬುವವರು ನೀಡಿದ್ದ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಮೈಸೂರು ಜಿಲ್ಲೆ ಟಿ.ನರಸೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 504, 505(1),(B)ರಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
rajee_hindu ಇನ್ಸ್ಸ್ಟಾಗ್ರಾಂ ಐಡಿಯಿಂದ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್ ಹಾಕಲಾಗಿತ್ತು. ಈ ಬಗ್ಗೆ ರವಿಕುಮಾರ್ ಎಂಬುವವರು ಟಿ.ನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಿ ಪೋಸ್ಟ್ ಹಾಕಿದವರ ವಿರುದ್ಧ ಕಾನೂನು ರೀತಿ ಕ್ರಮಕೈಗೊಳ್ಳುವಂತೆ ಮನವಿ ಮಾಡಿದ್ದರು. ಅದರಂತೆ ಇದೀಗ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, rajee_hindu ಇನ್ಸ್ಸ್ಟಾಗ್ರಾಂ ಐಡಿ ಯಾರದ್ದು? ಅಂತೆಲ್ಲ ತನಿಖೆ ನಡೆಸಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಎಂಬವರನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ಕೊಲೆ ಮಾಡಲಾಗಿತ್ತು. ವೇಣುಗೋಪಾಲ್ ಟಿ.ನರಸೀಪುರದ ಶ್ರೀರಾಂಪುರ ಕಾಲೋನಿ ನಿವಾಸಿಯಾಗುದ್ದು, ಜು. 09 ಹನುಮ ಜಯಂತಿ ವೇಳೆ ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಇದು ತಾರಕಕ್ಕೆ ಏರಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿತ್ತು.
ಈ ಸಂಬಂಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ಕಾಂಗ್ರೆಸ್ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ನಾನಾ ಪೋಸ್ಟ್ಗಳನ್ನು ಹಾಕಿ ಆಕ್ರೋಶ ಹೊರ ಹಾಕಿದ್ದರು. ಅಲ್ಲದೇ ಈ ಕೊಲೆ ಕಾಂಗ್ರೆಸ್ ಕಾರಣ ಎಂದು ಗಂಭೀರ ಆರೋಪಗಳನ್ನು ಮಾಡಿದ್ದರು.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಮಣಿಕಂಠ, ಸಂದೇಶಮ ಅನಿಲ್, ಶಂಕರ್, ಮಂಜು ಮತ್ತು ಹ್ಯಾರಿಸ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದು, ವೈಯಕ್ತಿ ಕಾರಣದಿಂದ ಈ ಹತ್ಯೆ ನಡೆದಿದೆ ಎಂದು ಹೇಳಿದ್ದಾರೆ,