Musician Rajeev Taranath: ಸಂಗೀತ ಲೋಕದ ಧ್ರುವತಾರೆ ಪಂಡಿತ್ ರಾಜೀವ್ ತಾರಾನಾಥ್ ನಿಧನ

Rajeev Taranath Passes Away: ಸಂಗೀತ ಲೋಕದ ಧ್ರುವತಾರೆ, ವಿಶ್ವದ ಶ್ರೇಷ್ಠ ಸರೋದ್‌ ವಾದಕರಲ್ಲಿ ಒಬ್ಬರೆನಿಸಿರುವ ರಾಜೀವ್ ತಾರಾನಾಥ್‌ ನಿಧನ ಹೊಂದಿದ್ದಾರೆ. ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು (ಜೂನ್ 11) ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Musician Rajeev Taranath: ಸಂಗೀತ ಲೋಕದ ಧ್ರುವತಾರೆ ಪಂಡಿತ್ ರಾಜೀವ್ ತಾರಾನಾಥ್ ನಿಧನ
ರಾಜೀವ್‌ ತಾರಾನಾಥ್‌
Follow us
|

Updated on:Jun 11, 2024 | 8:13 PM

ಮೈಸೂರು, (ಜೂ.11) ಸಂಗೀತ ಲೋಕದ ವಿಶ್ವ ಶ್ರೇಷ್ಠ ಸರೋದ್ ವಾದಕ ಪದ್ಮಶ್ರೀ ಪುರಸ್ಕೃತ, ಉಸ್ತಾದ್ ಆಲಿ ಅಕ್ಬರ್‌ ಖಾನ್‌ ಅವರ ಶಿಷ್ಯ ಪಂಡಿತ್ ರಾಜೀವ್ ತಾರಾನಾಥ್ ( musician Rajeev Taranath) ನಿಧನ ಹೊಂದಿದ್ದಾರೆ. ಕಳೆದ ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ರಾಜೀವ್‌ ತಾರಾನಾಥ್‌ ಅವರು ಇಂದು (ಜೂನ್ 11) ಆಸ್ಪತ್ರೆತಲ್ಲಿ ಕೊನೆಯುಸಿರೆಳೆದಿದ್ದಾರೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾಜೀವ್‌ ತಾರಾನಾಥ್‌ ಅವರನ್ನು ಸಚಿವ ಡಾ ಎಚ್ ಸಿ ಮಹದೇವಪ್ಪ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು, ಅಲ್ಲದೇ ಸರ್ಕಾರದಿಂದ ಆಸ್ಪತ್ರೆಯ ವೆಚ್ಛ ಭರಿಸುವುದಾಗಿ‌ ಹೇಳಿದ್ದರು. ಆದರೆ, ಇದೀಗ ವೈದ್ಯರ ಚಿಕಿತ್ಸೆಗೆ ಸ್ಪಂಧಿಸದೆ ಪಂಡಿತ್‌ ರಾಜೀವ್‌ ತಾರಾನಾಥ್‌ ಅವರು ಇಹಲೋಕ ತ್ಯಜಿಸಿದ್ದಾರೆ.

ರಾಜೀವ್ ತಾರಾನಾಥ ಅವರು ಅಕ್ಟೋಬರ್ 17, 1932ರಂದು ಜನಿಸಿದ್ದು, ಅತ್ಯಂತ ಸರಳತೆ ಮತ್ತು ಶ್ರೇಷ್ಠ ಸಂಗೀತಕ್ಕೆ ಹೆಸರಾಗಿದ್ದಾರೆ. ರಾಜೀವ್ ತಾರಾನಾಥರು ತಮ್ಮ ಪ್ರಾರಂಭಿಕ ಪಾಠಗಳನ್ನು ತಮ್ಮ ತಂದೆ ಪಂಡಿತ ತಾರಾನಾಥ್‌ ರಿಂದ ಪಡೆದರು. ಕೇವಲ ಒಂಭತ್ತು ವರ್ಷದವರಿದ್ದಾಗ ಅವರು ಪ್ರಥಮ ಸಂಗೀತ ಕಚೇರಿಯನ್ನು ನಡೆಸಿದರು. ಇಪ್ಪತ್ತರ ತಾರುಣ್ಯದಲ್ಲಿ ಆಕಾಶವಾಣಿಯಲ್ಲಿ ಸಂಗೀತಗಾರರಾಗಿ ಹಾಡುತ್ತಿದ್ದರು.

ರಾಜೀವ್ ತಾರಾನಾಥರು ಸಾಹಿತ್ಯದಲ್ಲಿ ಪಿ.ಎಚ್.ಡಿ ಪದವಿ ಪಡೆದವರಾದರೂ, ತಮಗಿದ್ದ ಇಂಗ್ಲಿಷ್ ಪ್ರಾಧ್ಯಾಪಕತನವನ್ನು ತ್ಯಜಿಸಿ, ಸಂಗೀತವನ್ನು ಅಭ್ಯಸಿಸಲು ಕೊಲ್ಕೊತ್ತಾಗೆ ತೆರಳಿ ಅಲ್ಲಿ ಉಸ್ತಾದ್ ಆಲಿ ಅಕ್ಬರ್‌ ಖಾನ್‌ ಅವರ ಶಿಷ್ಯರಾಗಿದ್ದರು. 2009ರ ವರ್ಷದಲ್ಲಿ ಅಲಿ ಅಕ್ಬರ್ ಖಾನರು ನಿಧನರಾಗುವವರೆಗೆ ರಾಜೀವ್ ತಾರಾನಾಥರು ಅವರ ಶಿಷ್ಯರಾಗಿಯೇ ಮುಂದುವರೆದಿದ್ದರು. ಕ್ಯಾಲಿಪೋರ್ನಿಯಾ ವಿವಿಯ ಕಲಾವಿಭಾಗದ ಮುಖ್ಯಸ್ಥರಾಗಿ 1995ರಿಂದ 2005ರ ಅವಧಿಯಲ್ಲಿ ಕಾರ್ಯನಿರ್ವಹಿಸಿದ್ದ ರಾಜೀವ ತಾರಾನಾಥರು ಬಳಿಕ ಮೈಸೂರಿನ ನಿವಾಸಿಯಾಗಿದ್ದು ತಮ್ಮ ಶಿಷ್ಯರಿಗೆ ಸಂಗೀತವನ್ನು ಧಾರೆ ಎರೆಯುತ್ತಿದ್ದರು.

ರಾಜೀವ್ ತಾರಾನಾಥ ಅವರು ಹಲವು ಚಲನಚಿತ್ರಗಳಿಗೂ ಸಂಗೀತ ನೀಡಿದ್ದಾರೆ. ಕನ್ನಡದ ಸಂಸ್ಕಾರ, ಪಲ್ಲವಿ, ಅನುರೂಪ, ಶೃಂಗಾರ ಮಾಸ, ಪೇಪರ್ ಬೋಟ್, ಮಲಯಾಳಂನ ಕಾಂಚನ ಸೀತಾ ಮತ್ತು ಕಟವ್ ಮುಂತಾದ ಚಿತ್ರಗಳಿಗೆ ಸಂಗೀತ ನಿರ್ದೇಶನ ನೀಡಿದ್ದಾರೆ.

ತಾರಾನಾಥ್ ಅವರು ಸಂಗೀತ ಲೋಕದಲ್ಲಷ್ಟೇ ಅಲ್ಲದೆ, ಇಂಗ್ಲಿಷ್ ಪ್ರಾಧ್ಯಾಪಕರಾಗಿ, ಅನುವಾದಕರಾಗಿ ಸಾಹಿತ್ಯ ಕ್ಷೇತ್ರದಲ್ಲೂ ಸಾಕಷ್ಟು ಕೆಲಸ ಮಾಡಿದ್ದು, ಇವರ ಸಾಧನೆಯನ್ನು ಗುರುತಿಸಿ ಸಂಗೀತ ರತ್ನ ಮೈಸೂರು ಟಿ. ಚೌಡಯ್ಯ ಸ್ಮಾರಕ ಪ್ರಶಸ್ತಿ 1998 (ಕರ್ನಾಟಕ ಸರಕಾರ, ಭಾರತ), ಸಂಗೀತ ನೃತ್ಯ ಅಕ್ಯಾಡೆಮಿ ಪ್ರಶಸ್ತಿ 1993, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ 1996, ಕೆಂಪೇಗೌಡ ಪ್ರಶಸ್ತಿ 2006, ಗಾಯನ ಸಮಾಜದಿಂದ ಸಂಗೀತ ಕಲಾರತ್ನ ಜ್ಯೋತಿ ಸುಬ್ರಮಣ್ಯ ಪ್ರಶಸ್ತಿ ಭ್ರಮರಾಂಬಾ ಎನ್ ನಾಗರಾಜ್ ಬಂಗಾರದ ಪದಕ, ವಿ. ಟಿ. ಶ್ರೀನಿವಾಸನ್ ಸ್ಮಾರಕ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ‘ನಾಡೋಜ’ ಪ್ರಶಸ್ತಿ ಅಲ್ಲದೇ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿಯೂ ಲಭಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:01 pm, Tue, 11 June 24