ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು ವಿದ್ಯಾರ್ಥಿ ಸಾವು
ಮೈಸೂರಿನ ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾರ್ಥಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದು, ಯುವಕರಲ್ಲಿ ಹೆಚ್ಚುತ್ತಿರುವ ಇಂತಹ ಪ್ರಕರಣಗಳು ತೀವ್ರ ಆತಂಕ ಮೂಡಿಸಿವೆ. ಮಂಡ್ಯ ಮೂಲದ ಮಾದೇಶ್ ಕಾಲೇಜು ಆವರಣದಲ್ಲಿ ಕುಸಿದುಬಿದ್ದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ದುರ್ಘಟನೆ ಪೋಷಕರಲ್ಲಿ ಕಳವಳ ಹೆಚ್ಚಿಸಿದ್ದು, ಸಣ್ಣ ವಯಸ್ಸಿನಲ್ಲೇ ಹೃದಯಾಘಾತದ ಕುರಿತು ಜಾಗೃತಿ ಮತ್ತು ಮುನ್ನೆಚ್ಚರಿಕೆಗಳ ಬಗ್ಗೆ ಚಿಂತನೆಗೆ ಹಚ್ಚಿದೆ.

ಮೈಸೂರು, ಜೂ.19: ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚಾಗುತ್ತಿರುವುದು ತೀವ್ರ ಆತಂಕವೂ ಮೂಡಿಸಿದೆ. ಇದಕ್ಕೆ ಸಾಕ್ಷಿ ಎಂಬಂತೆ, ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು ಕ್ಯಾಂಪಸ್‌ನಲ್ಲೇ (Marimallappa College) ಹೃದಯಾಘಾತದಿಂದ ವಿದ್ಯಾರ್ಥಿಯೊಬ್ಬ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ಚಿಕ್ಕ ವಯಸ್ಸಿನಲ್ಲಿ ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿರುವುದು ಪೋಷಕರಲ್ಲಿ ಆಂತಕ ಉಂಟು ಮಾಡಿದೆ.
ಮೃತ ವಿದ್ಯಾರ್ಥಿಯನ್ನು ಮಾದೇಶ್ ಎಂದು ಗುರುತಿಸಲಾಗಿದೆ. ಇವರು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಮೂಲದವರಾಗಿದ್ದು, ಸದ್ಯ ಮೈಸೂರಿನಲ್ಲಿ ತಮ್ಮ ಅಕ್ಕನ ಜೊತೆ ವಾಸವಿದ್ದುಕೊಂಡು ಮರಿಮಲ್ಲಪ್ಪ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ಬಂದಿದ್ದ ಮಾದೇಶ್, ಕ್ಯಾಂಪಸ್‌ನಲ್ಲಿ ಇದ್ದಕ್ಕಿದ್ದಂತೆ ತೀವ್ರ ಹೃದಯಾಘಾತಕ್ಕೊಳಗಾಗಿ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾರೆ.
ವಿದ್ಯಾರ್ಥಿ ಕುಸಿದುಬೀಳುತ್ತಿದ್ದಂತೆ ಗಾಬರಿಗೊಂಡ ಕಾಲೇಜಿನ ಸಿಬ್ಬಂದಿ ಹಾಗೂ ಸಹಪಾಠಿಗಳು ತಕ್ಷಣವೇ ಕಾಲೇಜು ಮಂಡಳಿಯ ಸಿಬ್ಬಂದಿ ಮಾದೇಶ್ ಅನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ವೈದ್ಯರು ತುರ್ತು ಪರೀಕ್ಷೆ ಮಾಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮಾದೇಶ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಸಣ್ಣ ವಯಸ್ಸಿನಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವುದು ಕಾಲೇಜು ಹಾಗೂ ಮೃತನ ಕುಟುಂಬದಲ್ಲಿ ನೋವು ಉಂಟು ಮಾಡಿದೆ.
ಇದನ್ನೂ ಓದಿ:ಶಿವಮೊಗ್ಗ: ಶಾಲೆಯಲ್ಲಿ ಆಟವಾಡುತ್ತಿದ್ದಾಗ ಆರು ವರ್ಷದ ಬಾಲಕ ಸಾವು, ಹೃದಯಾಘಾತ ಶಂಕೆ
ಕಾಲೇಜು ದಿನಗಳಲ್ಲೇ ಮಗನನ್ನು ಕಳೆದುಕೊಂಡ ಹೆತ್ತವರ ಹಾಗೂ ಅಕ್ಕನ ಆಕ್ರಂದನ ಮುಗಿಲು ಮುಟ್ಟಿದೆ. ಈ ದುರಂತಕ್ಕೆ ಸಂಬಂಧಿಸಿದಂತೆ ಮೈಸೂರಿನ ದೇವರಾಜ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾನೂನು ಪ್ರಕ್ರಿಯೆಗಳನ್ನು ಕೈಗೊಂಡಿದ್ದಾರೆ.
ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗಲೇ ಕುಸಿದುಬಿದ್ದು 1ನೇ ತರಗತಿ ವಿದ್ಯಾರ್ಥಿ ಸಾವು
ಶಾಲಾ ಆವರಣದಲ್ಲಿ ಸ್ನೇಹಿತರೊಂದಿಗೆ ಆಟವಾಡುತ್ತಿದ್ದ ಆರು ವರ್ಷದ ಪುಟ್ಟ ಬಾಲಕನೊಬ್ಬ ಏಕಾಏಕಿ ಕುಸಿದುಬಿದ್ದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹಾಳಸಸಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ತ್ರಿಲೋಕ್ ಜೈನ್ (6) ಎಂದು ಗುರುತಿಸಲಾಗಿದೆ. . ಕೊಡನವಳ್ಳಿಯ ಗೌತಮ್ ಮತ್ತು ಶಿಲ್ಪಾ ದಂಪತಿಯ ಪ್ರೀತಿಯ ಪುತ್ರನಾಗಿದ್ದ ತ್ರಿಲೋಕ್ ಜೈನ್ ಎಂದಿನಂತೆ ಶಾಲೆಗೆ ಬಂದಿದ್ದ ಬಾಲಕ ಬಿಡುವಿನ ವೇಳೆಯಲ್ಲಿ ಶಾಲಾ ಮೈದಾನದಲ್ಲಿ ಆಟವಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿ ಕುಸಿದುಬಿದ್ದಿದ್ದಾನೆ.
ಮಗು ದಿಢೀರನೆ ಕೆಳಗೆ ಬಿದ್ದಿದ್ದನ್ನು ಕಂಡು ಗಾಬರಿಗೊಂಡ ಶಾಲಾ ಶಿಕ್ಷಕರು ಮತ್ತು ಸಿಬ್ಬಂದಿ ತಕ್ಷಣವೇ ಮಗುವನ್ನು ಉಪಚರಿಸಿ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ. ಆದರೆ ದುರದೃಷ್ಟವಶಾತ್, ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯದಲ್ಲೇ ಆ ಪುಟ್ಟ ಕಂದಮ್ಮ ಕೊನೆಯುಸಿರೆಳೆದಿದ್ದಾನೆ. ಆಸ್ಪತ್ರೆಯ ವೈದ್ಯರು ಬಾಲಕನನ್ನು ಪರೀಕ್ಷಿಸಿ ಈಗಾಗಲೇ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.ಪ್ರಾಥಮಿಕ ಮಾಹಿತಿಗಳ ಪ್ರಕಾರ ಬಾಲಕ ತ್ರಿಲೋಕ್ ತೀವ್ರ ಹೃದಯಾಘಾತದಿಂದಲೇ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಇಷ್ಟು ಸಣ್ಣ ವಯಸ್ಸಿನ ಮಗುವಿಗೆ ಹಠಾತ್ ಹೃದಯಾಘಾತ ಸಂಭವಿಸಲು ಕಾರಣವೇನು? ಅಥವಾ ಮಗುವಿಗೆ ಈ ಮೊದಲೇನಾದರೂ ಹೃದಯ ಸಂಬಂಧಿ ಕಾಯಿಲೆ ಇತ್ತೇ? ಎಂಬ ಅಸಲಿ ಸತ್ಯ ವೈದ್ಯಕೀಯ ವರದಿ ಬಂದ ನಂತರವಷ್ಟೇ ತಿಳಿಯಬೇಕಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



