ಮೈಸೂರು, ಜನವರಿ 19: ಅಯೋಧ್ಯೆಯಲ್ಲಿ (Ayodhya) ಭವ್ಯ ರಾಮಮಂದಿರ (Ram Mandir) ನಿರ್ಮಾಣವಾಗಿದೆ. ಈಗಾಗಲೆ ರಾಮಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಜಗತ್ತೇ ಬಾಲ ರಾಮನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮವನ್ನು ವೀಕ್ಷಿಸಲು ತುದಿಗಾಲಿನ ಮೇಲೆ ನಿಂತಿದೆ. ಇನ್ನು ಈ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಗಣ್ಯಾತಿ ಗಣ್ಯರನ್ನು ಆಹ್ವಾನಿಸಲಾಗಿದೆ. ಹಾಗೆಯೇ ಈ ಕಾರ್ಯಕ್ರಮಕ್ಕೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೂ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಜನವರಿ 21 ರಂದು ಅಯೋಧ್ಯಗೆ ತೆರಳುತ್ತಿದ್ದಾರೆ.
ಈ ಬಗ್ಗೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮಾತನಾಡಿ, ರಾಮಲಲ್ಲಾ ಪ್ರಾಣ ಪ್ರತಿಷ್ಠದಲ್ಲಿ ಭಾಗಿಯಾಗುತ್ತಿರುವುದು ನನ್ನ ಸೌಭಾಗ್ಯ. 500 ವರ್ಷಗಳ ನಂತರ ರಾಮಮಂದಿರ ನಿರ್ಮಾಣವಾಗಿದೆ. ಇದು ತುಂಬಾ ಖುಷಿಯ ವಿಚಾರ. ರಾಮಲಲ್ಲಾ ವಿಗ್ರಹ ಕೆತ್ತಿದ ಅರುಣ್ ಯೋಗಿರಾಜ್ ಅವರು ನಮ್ಮ ಮೈಸೂರಿನವರು. ಅವರಿಗೆ ಅಭಿನಂದನೆ ತಿಳಿಸುವೆ. ರಾಮಲಲ್ಲಾ ಮೂರ್ತಿ ಕೆತ್ತಿರುವುದು ಮೈಸೂರಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದರು.
ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರದಲ್ಲಿ ವಿವಿಧ ವಿನ್ಯಾಸ, ಕಲಾಕೃತಿಗಳ ಕೆತ್ತನೆ ಮಾಡಿದ ರಾಯಚೂರು ಯುವಕ
ಅರುಣ್ ಯೋಗಿರಾಜ್ ಅವರು ಈ ಹಿಂದೆ ಶಂಕರಾಚಾರ್ಯರ ಹಾಗೂ ಸುಭಾಷ್ ಚಂದ್ರ ಬೋಸ್ ಅವರ ವಿಗ್ರಹ ಕೆತ್ತನೆ ಮಾಡಿದ್ದರು. ಇದೀಗ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದಾರೆ. ಅಯೋಧ್ಯೆ ಈ ಹಿಂದೆಯೂ ಪವಿತ್ರ ಧಾರ್ಮಿಕ ಕ್ಷೇತ್ರವಾಗಿತ್ತು. ಈಗಲೂ ಅದು ಅದೇ ರೀತಿ ಮುಂದುವರಿಯಲಿದೆ. ಇದು ಎಲ್ಲರಿಗೂ ಹೆಮ್ಮೆಯ ವಿಚಾರ ಎಂದು ಹೇಳಿದರು.
ಅರುಣ್ ಯೋಗಿರಾಜ್ ಕೆತ್ತನೆ ಮಾಡಿರುವ ಮೂರ್ತಿಯೇ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಯಾಗಲಿದೆ ಎಂಬುದು ಈ ಹಿಂದೆಯೇ ಬಹಿರಂಗಗೊಂಡಿತ್ತು. ಆದರೆ, ಅಧಿಕೃತ ಘೋಷಣೆಯಾಗಿರಲಿಲ್ಲ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸೋಮವಾರ ಅಧಿಕೃತ ಘೋಷಣೆ ಮಾಡಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ