ಪಿರಿಯಾಪಟ್ಟಣ: ಖಾಸಗಿ ಬಸ್–ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಮುಂಜಾನೆ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಮೈಸೂರು, ಅಕ್ಟೋಬರ್ 16: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೀರನಹಳ್ಳಿ ಗೇಟ್ ಬಳಿ ಖಾಸಗಿ ಸ್ಲೀಪರ್ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಶುಕ್ರವಾರ ಮುಂಜಾನೆ ನಾಲ್ವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 3.30ರ ವೇಳೆಗೆ ಈ ದುರ್ಘಟನೆ ನಡೆದಿದೆ. ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ಗೆ, ಮಡಿಕೇರಿ ಕಡೆಯಿಂದ ಮೈಸೂರು ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ಪಿರಿಯಾಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮೃತಪಟ್ಟ ನಾಲ್ವರಲ್ಲಿ ಮೂವರ ಗುರುತು ಪತ್ತೆಯಾಗಿದೆ. ಬಸ್ ಚಾಲಕ ಮೈಸೂರಿನ ಸುನಿಲ್ (26), ಕ್ಲೀನರ್ ಸಂದೇಶ್ (25) ಹಾಗೂ ಬಸ್ ಪ್ರಯಾಣಿಕ ಅಫ್ತಾಬ್ (23) ಮೃತಪಟ್ಟಿರುವುದು ದೃಢಪಟ್ಟಿದೆ. ಮತ್ತೊಬ್ಬ ಮೃತರ ಗುರುತು ಇನ್ನೂ ಪತ್ತೆಯಾಗಬೇಕಿದೆ.
ಮರದ ಕೊಂಬೆಯೊಂದು ರಸ್ತೆಗೆ ಬಿದ್ದಿದ್ದೇ ಅವಘಡಕ್ಕೆ ಕಾರಣ
ಗುರುವಾರ ರಾತ್ರಿ ಸುರಿದ ಭಾರಿ ಮಳೆಗೆ ಮರದ ಕೊಂಬೆಯೊಂದು ರಸ್ತೆಗೆ ಬಿದ್ದಿದ್ದು, ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ರಸ್ತೆಯಲ್ಲಿ ಬಿದ್ದಿದ್ದ ಕೊಂಬೆಯನ್ನು ತಪ್ಪಿಸಲು ಲಾರಿ ಚಾಲಕ ವಾಹನವನ್ನು ಬಲಕ್ಕೆ ತಿರುಗಿಸಿದ್ದಾನೆ. ಈ ವೇಳೆ ಎದುರಿನಿಂದ ವೇಗವಾಗಿ ಬಂದ ಸ್ಲೀಪರ್ ಕೋಚ್ ಖಾಸಗಿ ಬಸ್ ಲಾರಿಗೆ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಮತ್ತು ಲಾರಿ ಸಂಪೂರ್ಣ ನಜ್ಜುಗುಜ್ಜಾಗಿವೆ.
ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಪಿರಿಯಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:12 am, Fri, 16 October 26




