ಮೈಸೂರು, ಆ.27: ಆಗಸ್ಟ್ 30ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ(Gruha Lakshmi Scheme) ಚಾಲನೆ ಸಿಗಲಿದೆ. ಹೀಗಾಗಿ ಮಹಾರಾಜ ಕಾಲೇಜು ಮೈದಾನದಲ್ಲಿ(Mysore Maharaja College Ground) ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. 80 ಅಡಿ ಉದ್ದ, 60 ಅಡಿ ಅಗಲ, 8 ಅಡಿ ಎತ್ತರದ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ವೇದಿಕೆ ಹಿಂಭಾಗ 140 ಅಡಿಯ ಬೃಹತ್ ಎಲ್ಇಡಿ ನಿರ್ಮಾಣ ಮಾಡಲಾಗುತ್ತಿದೆ. ವಿಐಪಿ, ವಿವಿಐಪಿಗಳಿಗೆ ವಿಶ್ರಾಂತಿ ಕೊಠಡಿಗಳನ್ನೂ ಸಹ ನಿರ್ಮಾಣ ಮಾಡಲಾಗುತ್ತಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ವಾಟರ್ ಪ್ರೂಫ್ ಜರ್ಮನ್ ಟೆಂಟ್ ನಿರ್ಮಾಣ ಮಾಡಲಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವ ಮಹಿಳೆಯರಿಗೆ ಸುಸಜ್ಜಿತ ಶೌಚಾಲಯ ನಿರ್ಮಿಸಲಾಗುತ್ತಿದೆ. ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ವೇದಿಕೆ ಮುಂಭಾಗ 1 ಲಕ್ಷ ಆಸನಗಳ ವ್ಯವಸ್ಥೆ ಮಾಡಲಾಗುತ್ತಿದೆ. ಹಾಗೂ ಮೈದಾನದ ಸುತ್ತಮುತ್ತ ಕಾಂಗ್ರೆಸ್ ನಾಯಕರ ಫ್ಲೆಕ್ಸ್ಗಳು ರಾರಾಜಿಸುತ್ತಿವೆ. ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಗಲು ರಾತ್ರಿ ಎನ್ನದೆ 500ಕ್ಕೂ ಹೆಚ್ಚು ಕಾರ್ಮಿಕರು ವೇದಿಕೆಯ ನಿರ್ಮಾಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ, ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ
ಇನ್ನು ರಾಜ್ಯದಾದ್ಯಂತ 1.1 ಕೋಟಿ ಕುಟುಂಬಗಳ ಮುಖ್ಯಸ್ಥೆಯರು ಈ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಯ ಮುಖ್ಯಸ್ಥೆಗೆ ಮಾಸಿಕ 2 ಸಾವಿರ ರೂ. ನೀಡಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಈ ಹಿಂದೆ ಮಾಹಿತಿ ನೀಡಿದ್ದರು. ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ, ಕೊಡಗು ಜಿಲ್ಲೆಗಳಿಂದ 2 ಸಾವಿರ ಬಸ್‌ಗಳಲ್ಲಿ 1 ಲಕ್ಷ ಫಲಾನುಭವಿಗಳು ಪಾಲ್ಗೊಳ್ಳಲಿದ್ದಾರೆ.
ಮೈಸೂರಿಗೆ ಸಂಬಂಧಿಸಿದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ