ಮೈಸೂರು, ಆಗಸ್ಟ್ 27: ಮಾಜಿ ಶಾಸಕನಾಗಿ ವರುಣ ಕ್ಷೇತ್ರದ ಜನರ ಕೆಲಸ ಮಾಡಿಕೊಡುತ್ತಿದ್ದೇನೆ. ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ (Yathindra Siddaramaiah) ಹೇಳಿದ್ದಾರೆ. ಗಾಣಿಗ ಸಮುದಾಯದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರು ಕೊಟ್ಟ ಬೇಡಿಕೆಗಳನ್ನು ಸಿಎಂ ಗಮನಕ್ಕೆ ತಂದಿದ್ದೇನೆ. ಹಾಗಂತ ನಾನು ಭ್ರಷ್ಟಾಚಾರದಲ್ಲಿ ಭಾಗಿಯಾಗಿಲ್ಲ. ಅದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ, ಒಂದು ಸಾಕ್ಷಿಯಾದರೂ ಇದ್ದರೆ ಕೊಡಲಿ. ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿಗೆ ಸವಾಲು ಹಾಕಿದ್ದಾರೆ.
ನನ್ನ ವಿರುದ್ಧ ಮಾತಾಡಲು ಏನೂ ಇಲ್ಲ, ಹೀಗಾಗಿ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಚುನಾವಣೆಯಲ್ಲಿ ಸೋಲಿನಿಂದ ಜೆಡಿಎಸ್ನವರು ಹತಾಶರಾಗಿದ್ದಾರೆ. ಕೇವಲ 19 ಸ್ಥಾನಗಳು ಬಂದಿರುವ ಕಾರಣ ಜೆಡಿಎಸ್ ಅಸ್ತಿತ್ವದ ಪ್ರಶ್ನೆ ಮಾಡಲಾಗುತ್ತಿದೆ. ಆಡಳಿತ ಪಕ್ಷದ ವಿರುದ್ಧ ಆರೋಪ ಮಾಡುವುದಕ್ಕೆ ಯಾವುದೇ ವಿಚಾರಗಳು ಸಿಗುತ್ತಿಲ್ಲ. ಹಿಂದೆ ಅವರು ಮಾಡಿದ ತಪ್ಪನ್ನ ನಮ್ಮ ತಲೆ ಮೇಲೆ ಕಟ್ಟಲು ಯತ್ನಿಸುತ್ತಿದ್ದಾರೆ.
ಇದನ್ನೂ ಓದಿ: ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಸಾಂವಿಧಾನಿಕ ಹುದ್ದೆ, ಸದ್ದಿಲ್ಲದೇ ನೇಮಕ ಈಗ ಚರ್ಚೆಗೆ ಗ್ರಾಸ
ಬಿಜೆಪಿ ಸದಸ್ಯರೇ ವಿಎಸ್ಟಿ ಆರೋಪ ಮಾಡಿದ್ದರು. ನಮ್ಮ ಪಕ್ಷದವರು ಯಾರು ಈ ರೀತಿ ಆರೋಪ ಮಾಡಿಲ್ಲ. ಯಾವುದಕ್ಕೂ ಸಾಕ್ಷಿ ಇಲ್ಲ. ಪ್ರತಿ ಪಕ್ಷದವರು ಕೆಸರು ಎರಚುತ್ತಿದ್ದಾರೆ ಎಂದರು.
ಲೋಕಸಭಾ ಚುನಾವಣೆಗೂ ಮುನ್ನ 5 ಗ್ಯಾರಂಟಿ ಜಾರಿಗೊಳಿಸುತ್ತೇವೆ. ಪ್ರತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ಮೈತ್ರಿ ಮಾಡಿಕೊಳ್ಳುತ್ತಿವೆ. ಅಧಿಕೃತವಾಗಿ ಅಥವಾ ಪರೋಕ್ಷವಾಗಿ ಮೈತ್ರಿ ಮಾಡಿಕೊಂಡಿರುತ್ತಾರೆ. 2018 ಹಾಗೂ 2023ರ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದರು. ಮುಂದಿನ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡರೆ ಎದುರಿಸುತ್ತೇವೆ ಎಂದು ತಿಳಿಸಿದರು.
ಪಕ್ಷ ಸೂಚಿಸಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ. ಲೋಕಸಭಾ ಚುನಾವಣೆಗೆ ನಾನು ಯಾವುದೇ ಬೇಡಿಕೆಯನ್ನು ಇಟ್ಟಿಲ್ಲ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ರಾಜ್ಯದ ಜನರು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದಾರೆ. ಬಿಜೆಪಿ ದುರಾಡಳಿತದಿಂದ ಬೇಸತ್ತು ಜನರು ಆಶೀರ್ವಾದ ಮಾಡಿದ್ದಾರೆ ಎಂದರು.
ಇದನ್ನೂ ಓದಿ: ರಾಮನಗರ ರಾಜೀವ್ ಗಾಂಧಿ ವಿವಿ ಸ್ಥಳಾಂತರ ಬೇಡ: ಹೆಚ್ಡಿ ಕುಮಾರಸ್ವಾಮಿ
2024ರ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟ್ ಗೆಲ್ಲಬೇಕು. ಚುನಾವಣೆಯಲ್ಲಿ ಹೆಚ್ಚು ಸೀಟ್ ಗೆಲ್ಲೋಕೆ ತಂತ್ರಗಾರಿಕೆ ಮಾಡಬೇಕು. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಸರ್ವೆ ಮೂಲಕ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ. ಸ್ಥಳೀಯ ಮುಖಂಡರು, ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.