ಬೆಂಗಳೂರು: ನೆರೆಯ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಯಂತ್ರಿಸುವ ಅಗತ್ಯ ಇಲ್ಲ. ಬದಲಾಗಿ ಜನಸಂದಣಿ ಸೇರುವುದನ್ನು ತಡೆಯಬೇಕಾದ ಅಗತ್ಯ ಇದೆ. ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳ ಪಾಲನೆಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಧಾರ್ಮಿಕ ಆಚರಣೆಗಳನ್ನು ಸಂಪ್ರದಾಯಕ್ಕಷ್ಟೇ ಸೀಮಿತಗೊಳಿಸಿ ಆಚರಿಸಬೇಕಿದೆ. ಬೇರೆಬೇರೆ ವಲಯಗಳ ನೌಕರರಿಗೆ ಕಡಿಮೆ ಅವಧಿಗೆ ಕೆಲಸದ ಪಾಳಿಗಳನ್ನು ನೀಡಬೇಕು. ಸಮೂಹ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಗೂ ಮಿತಿ ಹೇರಬೇಕಿದೆ. ಕರ್ನಾಟಕದಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನು ಇನ್ನೂ ಚುರುಕುಗೊಳಿಸುವ ಅಗತ್ಯವಿದೆ ಎಂದು ಕೇಂದ್ರದ ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರಿಗೆ ರಾಜ್ಯದ ಪರವಾಗಿ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ತಿಳಿಸಿದ್ದಾರೆ.
ದೇಶದಲ್ಲಿ ಕೊರೊನಾ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿರುವ ಕಾರಣ ಕೇಂದ್ರ ಸಂಪುಟ ಕಾರ್ಯದರ್ಶಿ ವಿವಿಧ ರಾಜ್ಯಗಳ ಮುಖ್ಯಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಹಾಗೂ ಪೊಲೀಸ್ ಮಹಾ ನಿರ್ದೇಶಕರ ಸಭೆ ನಡೆಸುತ್ತಿದ್ದಾರೆ. ಈ ಸಭೆಯ ನಂತರ ಕೊರೊನಾ ಸೋಂಕು ತಡೆಯಲು ರೂಪಿಸಿರುವ ನೂತನ ಮಾರ್ಗದರ್ಶಿ ಸೂತ್ರಗಳು ಬಿಡುಗಡೆಯಾಗಲಿವೆ. ರಾಜ್ಯದ ಪರವಾಗಿ ಮುಖ್ಯಕಾರ್ಯದರ್ಶಿ ರವಿಕುಮಾರ್, ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಗೃಹ ಕಾರ್ಯದರ್ಶಿ, ಕೊವಿಡ್‌ಗೆ ಸಂಬಂಧಿಸಿದ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿರುವ ಸಭೆಯಲ್ಲಿ ಕೇಂದ್ರ ಸರ್ಕಾರ ನೀಡುವ ಸಲಹೆ ಮೇರೆಗೆ ನೂತನ ಗೈಡ್ಲೈನ್ಸ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಕಳೆದ 24 ಗಂಟೆಗಳಲ್ಲಿ 81,466 ಹೊಸ ಕೊರೊನಾ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿವೆ. ಅಲ್ಲದೇ ಕೊರೊನಾ ಲಸಿಕೆ ವಿತರಣೆಯೂ ವೇಗವಾಗಿ ನಡೆಯುತ್ತಿದ್ದು ಕಳೆದ 24 ಗಂಟೆಗಳಲ್ಲಿ 36 ಲಕ್ಷ ಡೋಸ್ ಕೊರೊನಾ ಲಸಿಕೆ ವಿತರಣೆ ನಡೆದಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮುಂದಿನ ಆದೇಶ ನೀಡುವವರೆಗೆ 6ರಿಂದ 9ನೇ ತರಗತಿಗಳನ್ನು ಭೌತಿಕವಾಗಿ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಿನ್ನೆ (ಏಪ್ರಿಲ್ 1) ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದರು. 10ನೇ ತರಗತಿಗಳು ಎಂದಿನಂತೆ ಮುಂದುವರಿಯಲಿವೆ. ಆದರೆ, ವಿದ್ಯಾರ್ಥಿಗಳು ಶಾಲೆಗೆ ಬರುವುದು ಕಡ್ಡಾಯವಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ. ರಾಜ್ಯದ ಉಳಿದೆಡೆ ಸದ್ಯ ಈಗ ಜಾರಿಯಲ್ಲಿರುವ ವ್ಯವಸ್ಥೆಯೇ ಮುಂದುವರೆಯಲಿದೆ. ಈ ನೂತನ ಆದೇಶ ಸದ್ಯ ಕೇವಲ ಬೆಂಗಳೂರು ನಗರ ವ್ಯಾಪ್ತಿಗೆ ಮಾತ್ರ ಒಳಪಡಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವರು ಹೇಳಿದ್ದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿಯ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದರು.
ಕಡ್ಡಾಯ ಶಿಕ್ಷಣ ಕಾಯ್ದೆ ಅವಕಾಶಗಳಡಿಯಲ್ಲಿ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತು ಮುಂದಿನ ದಿನಗಳಲ್ಲಿ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು. ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಹಿತರಕ್ಷಣೆಗೆ ಬದ್ಧವಾಗಿದೆ. ಹೀಗಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 6ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದರು.
ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಗುತ್ತಿದೆ ಕೊರೊನಾ.. ಇದಕ್ಕೆ ಸರ್ಕಾರವೇ ಕಾರಣನಾ?
ಕೊವಿಡ್ ಹಾವಳಿ ಶಾಂತವಾದ ನಂತರ ಹುಟ್ಟಿಕೊಳ್ಳಲಿವೆಯೇ ಸೂಪರ್ ಬ್ಯಾಕ್ಟೀರಿಯಾಗಳು?