ಮೇಕೆದಾಟು ಯೋಜನೆಗೆ ಮತ್ತೆ ಡಿಪಿಆರ್ ಸಲ್ಲಿಸುತ್ತೇವೆ; ಡಿಸಿಎಂ ಡಿಕೆ ಶಿವಕುಮಾರ್ ಮಾಹಿತಿ
ಸುಪ್ರೀಂ ಕೋರ್ಟ್‌ನಲ್ಲಿ ಮೇಕೆದಾಟು ಯೋಜನೆಗೆ ಮುನ್ನಡೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಈ ಯೋಜನೆಯ ತುರ್ತು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದು ಮಹತ್ವದ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಕೆದಾಟು ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು. ಅರಣ್ಯ, ನೀರಾವರಿ, ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಹೊಸ ಡಿಪಿಆರ್ (ವಿವರವಾದ ಯೋಜನಾ ವರದಿ) ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು, ನವೆಂಬರ್ 18: ಮೇಕೆದಾಟು ಯೋಜನೆ ಕುರಿತಾದ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರಕ್ಕೆ ಹೊಸದಾಗಿ ಡಿಪಿಆರ್ (ವಿವರವಾದ ಯೋಜನಾ ವರದಿ) ಸಲ್ಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಮಾಹಿತಿ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ನಡೆದ ಮೇಕೆದಾಟು ಯೋಜನೆ ಅನುಷ್ಠಾನ ಕುರಿತಾದ ಅಧಿಕಾರಿಗಳ ಸಭೆ ಹಾಗೂ ಕಾವೇರಿ ನೀರಾವರಿ ನಿಗಮದ ನಿರ್ದೇಶಕರ ಮಂಡಳಿಯ ಮಹತ್ವದ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ್ದಾರೆ.
ಕಾವೇರಿ ನೀರಾವರಿ ನಿಗಮ ಮಂಡಳಿ ಸಭೆ ಮಾಡಲಾಗಿದೆ. ಇದಕ್ಕೆ ಮೊದಲು, ಮೇಕೆದಾಟು ಯೋಜನೆ ಕುರಿತ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಈ ಯೋಜನೆಯನ್ನು ಹೇಗೆ ಮುಂದಕ್ಕೆ ತೆಗೆದುಕೊಂಡು ಹೋಗಬೇಕು ಎಂದು ಚರ್ಚೆ ಮಾಡಿದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೊಸದಾಗಿ ಡಿಪಿಆರ್ ಸಲ್ಲಿಕೆ ಮಾಡಬೇಕಿದೆ. ಇದರಲ್ಲಿ ಯೋಜನೆಯ ಸಂಪೂರ್ಣ ವಿವರ, ಎಷ್ಟು ಅರಣ್ಯ ಪ್ರದೇಶ ಮುಳುಗಡೆಯಾಗಲಿದೆ ಎಂಬ ಮಾಹಿತಿಯನ್ನು ನೀಡಬೇಕು ಎಂದಿದ್ದಾರೆ.
ಇದನ್ನೂ ಓದಿ: ಬೆಂಗಳೂರಿಗೆ ನೂತನ ಐಟಿ ಸಿಟಿ ಎಂದ ಡಿಸಿಎಂ ಡಿಕೆಶಿ: ಎಲ್ಲಿ ನಿರ್ಮಾಣ?
“ಈ ಹಿಂದೆ ಸಲ್ಲಿಸಿದ್ದ ಡಿಪಿಆರ್ ಅನ್ನು ತಿರಸ್ಕರಿಸಿದ್ದರು. ಹೀಗಾಗಿ ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ ಹೊಸದಾಗಿ ಡಿಪಿಆರ್ ಸಲ್ಲಿಸುತ್ತೇವೆ. ಕಾನೂನು ಪ್ರಕಾರ ಯಾರ ಮುಂದೆ ಮಂಡಿಸಬೇಕೋ ಅವರ ಮುಂದೆ ಮಂಡಿಸುತ್ತೇವೆ” ಎಂದು ಡಿಸಿಎಂ ಸ್ಪಷ್ಟನೆ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
