ಬೆಳಗಾವಿ, ಜನವರಿ 18: ಬೆಳಗಾವಿಯಲ್ಲಿ ಗಾಂಧಿ ಭಾರತ ಯಾತ್ರೆಯ ಪೂರ್ವಭಾವಿ ಕಾಂಗ್ರೆಸ್ ಸಭೆಯಲ್ಲಿ ಗದ್ದಲ, ಗೊಂದಲದ ವಾತಾವರಣ ಸೃಷ್ಟಿಯಾದ ಬೆನ್ನಲ್ಲೇ ಇದೀಗ ‘ಕೈ’ ಪಾಳಯದಲ್ಲಿ ಮತ್ತೊಂದು ಬೆಳವಣಿಗೆ ತಲೆ ಎತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಆಪ್ತರೂ ಸೇರಿದಂತೆ, ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ಯೋಜನೆ ಮಾಡಿರುವುದು ತಿಳಿದುಬಂದಿದೆ. ಆದರೆ, ಈ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಡಿಸಿಎಂ ಡಿಕೆ ಶಿವಕುಮಾರ್ ನಿರಾಕರಿಸಿದ್ದಾರೆ.
ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ವಿಚಾರವಾಗಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಅದೆಲ್ಲವೂ ನನಗೆ ಗೊತ್ತಿಲ್ಲ. ಆ ಬಗ್ಗೆ ನಾನು ಮಾತನಾಡುವುದಿಲ್ಲ. ಏನಿದ್ದರೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಾಹೇಬರನ್ನು ಕೇಳಿ. ನನ್ನದೇನ್ನಿದ್ದರೂ ಸಮಾವೇಶ, ಪಕ್ಷ ಸಂಘಟನೆ ಎಂದಿದ್ದಾರೆ.
ಬಜೆಟ್ಗೂ ಮುನ್ನ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ಯೋಜನೆ ರೂಪಿಸಿದ್ದಾರೆ ಎನ್ನಲಾಗಿದೆ. ಈ ಮಧ್ಯೆ, ಶಾಸಕರ ವಿದೇಶ ಪ್ರವಾಸಕ್ಕೆ ಸುರ್ಜೇವಾಲರತ್ತ ಡಿಸಿಎಂ ಡಿಕೆ ಶಿವಕುಮಾರ್ ಬೊಟ್ಟು ಮಾಡಿದ್ದಾರೆ.
ಮೊದಲ ಬಾರಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಬಜೆಟ್ಗೂ ಮುನ್ನ ದುಬೈ, ಸಿಂಗಾಪುರ ಪ್ರವಾಸಕ್ಕೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ವಿದೇಶ ಪ್ರವಾಸದ ಬಗ್ಗೆ ಆಸೀಫ್ ಸೇಠ್, ಬಾಬಾಸಾಹೇಬ್ ಪಾಟೀಲ್ ಮಾಹಿತಿ ನೀಡಿದ್ದಾರೆ. ನಾಲ್ಕು ದಿನಗಳ ವಿದೇಶ ಪ್ರವಾಸಕ್ಕೆ 8ರಿಂದ 10 ಕಾಂಗ್ರೆಸ್ ಶಾಸಕರು ಪ್ಲ್ಯಾನ್ ಮಾಡಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಗದ್ದಲ: ಸುರ್ಜೇವಾಲ ಮೇಲೆ ಮುಗಿಬಿದ್ದ ಸತೀಶ್ ಜಾರಕಿಹೊಳಿ ಬೆಂಬಲಿಗರು
ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಈ ಬೆಳವಣಿಗೆ ನಡೆಯುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಆಗಬೇಕು ಎಂದು ಕೆಲವು ದಿನಗಳ ಹಿಂದಷ್ಟೇ ಸತೀಶ್ ಜಾರಕಿಹೊಳಿ ಆಗ್ರಹಿಸಿದ್ದರು. ಆದರೆ, ಅಹಿಂದ ನಾಯಕರು ಪ್ರಶ್ನೆ ಮಾಡುತ್ತಿರುವುದು ನನ್ನನಲ್ಲ, ಬದಲಿಗೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದರು. ಇದರ ಬೆನ್ನಲ್ಲೇ ಯೂ ಟರ್ನ್ ಹೊಡೆದಿದ್ದ ಸತೀಶ್ ಜಾರಕಿಹೊಳಿ, ಡಿಕೆ ಶಿವಕುಮಾರ್ ಬದಲಾವಣೆ ಮಾಡಬೇಕು ಎಂದು ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಬೆಳಗಾವಿಯಲ್ಲಿ ರಣದೀಪ್ ಸುರ್ಜೇವಾಲ ಮತ್ತು ಸತೀಶ್ ಜಾರಕಿಹೊಳಿ ಬೆಂಬಲಿಗರ ನಡುವೆ ವಾದ-ವಿವಾದ ನಡೆದಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ