ಬೆಂಗಳೂರು, ನ.9: ಸರ್ಕಾರದಿಂದ ನಡೆಯುತ್ತಿದ್ದ ಟಿಪ್ಪು ಜಯಂತಿ (Tipu Jayanti) ಆಚರಣೆಯನ್ನು 2019ರಲ್ಲೇ ಹಿಂಪಡೆಯಲಾಗಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೂ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಚರ್ಚೆ ನಡೆದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್ (H.K.Patil) ಹೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಬಾರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ (2019 ರಲ್ಲಿ) ರದ್ದುಗೊಳಿಸಿ ಆದೇಶ ಹೊರಡಿಸಿತ್ತು.
ಇದನ್ನೂ ಓದಿ: ಅಭಿವೃದ್ಧಿ ಕೆಲಸ ಆಗುತ್ತಿಲ್ಲವೆಂದು ಪತ್ರ ಬರೆದಿದ್ದು ನಿಜ, ಆದರೆ ಹಳೆಯದ್ದು: ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್
ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲೂ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಅಧಿಕೃತವಾಗಿ ಟಿಪ್ಪು ಜಯಂತಿ ಆಚರಣೆ ಇಲ್ಲ. ಕ್ಯಾಬಿನೆಟ್ನಲ್ಲೂ ಟಿಪ್ಪು ಜಯಂತಿ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಹೆಚ್ಕೆ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಚಿಂತನೆ ಹಿನ್ನೆಲೆಯಲ್ಲಿ ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಟಿಪ್ಪು ವಕ್ಫ್ ಎಸ್ಟೇಟ್ನಿಂದ ಟಿಪ್ಪು ಜಯಂತಿ ಕಾರ್ಯಕ್ರಮ ನಡೆಸುವ ಸಾಧ್ಯತೆ ಹಿನ್ನೆಲೆ ಮೈಸೂರು ಸೇರಿದಂತೆ ವಿವಿಧ ಕಡೆಗಳಿಂದ ಜನರು ಆಗಮಿಸಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಆದೇಶಿಸಿದ್ದಾರೆ.
ನಾಳೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ನಿಷೇಧಾಜ್ಞೆ ಹೇರಲಾಗಿದ್ದು, ಮೆರವಣಿಗೆ, ಪ್ರತಿಭಟನೆ, ರ್ಯಾಲಿ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ, ಡಿಜೆ ಬಳಕೆ, ಘೋಷಣೆ, ಪ್ರಚೋಧನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸುವುದನ್ನು ನಿರ್ಬಂಧಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:05 pm, Thu, 9 November 23