ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನೋಟಿಸ್: ಕೇಸ್ ರದ್ದು ಕೋರಿ ಬಿಎಸ್​ವೈ ಹೈಕೋರ್ಟ್​​ಗೆ ಮೊರೆ​

| Updated By: Ganapathi Sharma

Updated on: Jun 12, 2024 | 11:51 AM

BS Yedyurappa moves Karnataka High Court in POCSO case: ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ ಪೋಕ್ಸೋ ಕೇಸ್ ಅಡಿ ನೋಟಿಸ್ ನೀಡಲಾಗಿದೆ. ಕೆಲವು ದಿನಗಳ ಹಿಂದೆ ದೂರುದಾರ ಮಹಿಳೆ ಮೃತಪಟ್ಟಿದ್ದು, ಇದೀಗ ತಮಗೆ ನೀಡಲಾಗಿರುವ ನೋಟಿಸ್ ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಪ್ರಕರಣವನ್ನೇ ರದ್ದುಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನೋಟಿಸ್: ಕೇಸ್ ರದ್ದು ಕೋರಿ ಬಿಎಸ್​ವೈ ಹೈಕೋರ್ಟ್​​ಗೆ ಮೊರೆ​
ಬಿಎಸ್ ಯಡಿಯೂರಪ್ಪ
Follow us on

ಬೆಂಗಳೂರು, ಜೂನ್ 12: ಪೋಕ್ಸೋ ಪ್ರಕರಣದಲ್ಲಿ (POCSO Case) ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪಗೆ (BS Yediyurappa) ನೋಟಿಸ್ ನೀಡಲಾಗಿದೆ. ಇದರ ಬೆನ್ನಲ್ಲೇ ಅವರು ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್​​ಗೆ (Karnataka High Court) ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದಿ ಮಹಿಳೆಗೆ ದೂರು ನೀಡುವುದೇ ಹವ್ಯಾಸವಾಗಿತ್ತು. ಎಫ್ಐಆರ್ ದಾಖಲಾದ ನಂತರ ವಿಚಾರಣೆಗೆ ಹಾಜರಾಗಿದ್ದೆ. ಏಪ್ರಿಲ್​​​ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳದೇ ಧ್ವನಿ ಮಾದರಿ ಸಂಗ್ರಹಿಸಿದ್ದರು ಎಂದು ಯಡಿಯೂರಪ್ಪ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ತಮ್ಮ ವಿರುದ್ಧದ ದೂರಿನಲ್ಲಿ ಅಪರಾಧದ ಅಂಶಗಳಿಲ್ಲದಿರುವುದರಿಂದ ಪ್ರಕರಣವನ್ನು ರದ್ದು ಪಡಿಸಬೇಕು ಎಂದು ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ. ತಮ್ಮ ಪುತ್ರಿಯೊಂದಿಗೆ ಅನುಚಿತ ವರ್ತನೆ ತೋರಿದ್ದಾರೆ ಎಂದು ಮಹಿಳೆಯೊಬ್ಬರು ಬಿಎಸ್​ವೈ ವಿರುದ್ಧ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದರು.

ಮತ್ತೊಂದೆಡೆ, ದೂರುದಾರ ಮಹಿಳೆ ಇತ್ತೀಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೇ 27ರಂದು ಮೃತಪಟ್ಟಿದ್ದರು.

ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಹಿನ್ನೆಲೆ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್​ ತಿಂಗಳಲ್ಲಿ ಎಫ್​ಐಆರ್ ದಾಖಲಾಗಿತ್ತು. ಫೆಬ್ರವರಿಯಲ್ಲಿ ಮಗಳ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದ ಸಂದರ್ಭದಲ್ಲೇ ಪ್ರಕರಣ ಸದ್ದುಮಾಡಿತ್ತು.

ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ: ದೂರುದಾರೆ ಸಾವು

ನಂತರ ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ಅಮ್ಮ, ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು. ತಾಯಿ-ಮಗಳು ಅನೇಕ ಸಲ ಮನೆಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ಬಳಿಕ ಅವರನ್ನ ಕಮಿಷನರ್​ ಬಳಿ ಕಳಿಸಿಕೊಟ್ಟೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:47 am, Wed, 12 June 24