ಒನ್​ ನೇಷನ್, ಒನ್ ಎಲೆಕ್ಷನ್: ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಕಿಡಿ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 12, 2024 | 8:37 PM

ಕೇಂದ್ರ ಸರ್ಕಾರದ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದು ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ. ರಾಜ್ಯಗಳ ಹಕ್ಕುಗಳನ್ನು ಕಿತ್ತುಕೊಳ್ಳುವ ದುರುದ್ದೇಶ ಇದರ ಹಿಂದಿದೆ ಎಂದು ಆರೋಪಿಸಿದ್ದಾರೆ. ಕೇರಳ ಸರ್ಕಾರದಂತೆ ಕರ್ನಾಟಕ ಸರ್ಕಾರವೂ ಇದನ್ನು ವಿರೋಧಿಸುವ ಗೊತ್ತುವಳಿಯನ್ನು ಅಂಗೀಕರಿಸಬಹುದು ಎಂದೂ ಅವರು ಹೇಳಿದ್ದಾರೆ.

ಒನ್​ ನೇಷನ್, ಒನ್ ಎಲೆಕ್ಷನ್: ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಕಿಡಿ
ಒನ್​ ನೇಷನ್, ಒನ್ ಎಲೆಕ್ಷನ್: ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಕಿಡಿ
Follow us on

ಬೆಂಗಳೂರು, ಡಿಸೆಂಬರ್​​ 12: ಕಳೆದ ಕೆಲ ವರ್ಷಗಳಿಂದ ಬಹು ಚರ್ಚೆಯಲ್ಲಿದ್ದ ಒಂದು ದೇಶ, ಒಂದು ಚುನಾವಣೆಯನ್ನು ಜಾರಿಗೆ ತರೋದಕ್ಕೆ ಕೇಂದ್ರ ಸಚಿವ ಸಂಪುಟ ಅಸ್ತು ಎಂದಿದೆ. ಒನ್​ ನೇಷನ್, ಒನ್ ಎಲೆಕ್ಷನ್ ಬಿಲ್​ಗೆ ಅನುಮೋದನೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರದ ನಡೆ ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿದೆ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿರುವ ‘ಒಂದು ರಾಷ್ಟ್ರ, ಒಂದು ಚುನಾವಣೆ’’ ಮಸೂದೆ ಸಂಸದೀಯ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿರುವುದು ಮಾತ್ರವಲ್ಲ, ಇದರ ಹಿಂದೆ ರಾಜ್ಯಗಳ ಹಕ್ಕುಗಳನ್ನು ಮೊಟಕುಗೊಳಿಸುವ ದುರಾಲೋಚನೆ ಕೂಡ ಇದೆ ಎಂದಿದ್ದಾರೆ.

ಇದನ್ನೂ ಓದಿ: ನನಗೆ ಜ್ಯೋತಿಷಿ ಹೇಳಿದ್ದು ಕೇಳಿದ್ರೆ… ಸಿಎಂ ಆಗೋ ಸುಳಿವು ನೀಡಿದ್ರಾ ಡಿಕೆ ಶಿವಕುಮಾರ್!

ಹಲವಾರು ದೋಷಗಳಿಂದ ಕೂಡಿರುವ ಈಗಿನ ಚುನಾವಣಾ ವ್ಯವಸ್ಥೆಯನ್ನು ಸುಧಾರಣೆಗೊಳಪಡಿಸುವ ತುರ್ತು ಅಗತ್ಯ ಇರುವ ಈ ಸಂದರ್ಭದಲ್ಲಿ ಇಂತಹ ಮಸೂದೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಇನ್ನಷ್ಟು ದುರ್ಬಲಗೊಳಿಸಲಿದೆ. ಇಂತಹದ್ದೊಂದು ಮುಖ್ಯವಾದ ಮಸೂದೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಪಡೆಯುವ ಮೊದಲು ವಿರೋಧಪಕ್ಷಗಳು ಮತ್ತು ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಬೇಕಾಗಿತ್ತು. ಆದರೆ ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆಯಿಂದ ಈ ಮಸೂದೆಯನ್ನು ದೇಶದ ಮೇಲೆ ಹೇರಲು ಹೊರಟಿದೆ.

ಕೇರಳ ಸರ್ಕಾರ ಈಗಾಗಲೇ ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವವನ್ನು ವಿರೋಧಿಸಿ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಟ್ಟಿದೆ. ಅಗತ್ಯ ಬಿದ್ದರೆ ನಮ್ಮ ಸರ್ಕಾರ ಕೂಡ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸಿ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ವಿರುದ್ದ ಬಹುಮತದ ಗೊತ್ತುವಳಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಕಳಿಸಿಕೊಡಲಾಗುವುದು ಎಂದಿದ್ದಾರೆ.

ಲೋಕಸಭೆ ಇಲ್ಲವೇ ವಿಧಾನಸಭೆಯಲ್ಲಿ ಆಡಳಿತಾರೂಢ ಪಕ್ಷ ವಿಶ್ವಾಸಮತ ಗಳಿಸಲು ಸೋತುಹೋಗುವ ಸಂದರ್ಭದಲ್ಲಿ ಎದುರಾಗುವ ಬಿಕ್ಕಟ್ಟಿಗೆ ಈ ಪ್ರಸ್ತಾವದಲ್ಲಿ ಪರಿಹಾರವೇ ಇಲ್ಲ ಎಂದರು ಇಂತಹ ಸಂದರ್ಭದಲ್ಲಿ ಮಧ್ಯಂತರ ಚುನಾವಣೆಯೊಂದೇ ಯೋಗ್ಯ ಪರಿಹಾರ. ಇದರ ಬದಲಿಗೆ ಸದನದಲ್ಲಿ ವಿಶ್ವಾಸ ಮತ ಗಳಿಸಲು ವಿಫಲವಾದ ಅಲ್ಪಸಂಖ್ಯಾತ ಪಕ್ಷ ಅಧಿಕಾರದಲ್ಲಿ ಮುಂದುವರಿಯಲು ಅವಕಾಶ ನೀಡಿದರೆ ಅದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುವ ದ್ರೋಹವಾಗುತ್ತದೆ.

ಇದನ್ನೂ ಓದಿ: ಖಾದರ್ ಜತೆ ಬಿಜೆಪಿ ಶಾಸಕರ ಜಗಳ: ಸ್ಪೀಕರ್ ಕಚೇರಿಯಲ್ಲಿ ಉದ್ವಿಗ್ನ ಪರಿಸ್ಥಿತಿ

ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ವಿಧಿಗಳಿಗೆ ತಿದ್ದುಪಡಿ ತರಬೇಕಾಗಿದೆ. ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗಿನ ಚುನಾವಣಾ ಆಯೋಗಕ್ಕೆ ಇಲ್ಲ. ನರೇಂದ್ರ ಮೋದಿ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಕೊಳ‍್ಳಲು ಆಗಾಗ ಇಂತಹ ಗಿಮಿಕ್ ಗಳನ್ನು ಪ್ರದರ್ಶಿಸುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ವರದಿ: ಈರಣ್ಣ ಬಸವ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.