ಕೆಜಿಎಫ್ನಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣಕ್ಕೆ ಪ್ಲ್ಯಾನ್: ವರದಿ ಸಲ್ಲಿಸಲು ಸಚಿವ ಸುರೇಶ್ ಸೂಚನೆ
ಕೋಲಾರ ಜಿಲ್ಲೆಯ ಕೆಜಿಎಫ್ನಲ್ಲಿ ಸಮಗ್ರ ನಗರಾಭಿವೃದ್ಧಿ ಯೋಜನೆಗೆ ಸಚಿವ ಬಿಎಸ್ ಸುರೇಶ್ ವಿಸ್ತೃತ ಯೋಜನಾ ವರದಿ ತಯಾರಿಸಲು ಸೂಚಿಸಿದ್ದಾರೆ. ಈ ಯೋಜನೆಯು ವಸತಿ, ಕೈಗಾರಿಕೆ, ಶಿಕ್ಷಣ ಮತ್ತು ಮನರಂಜನಾ ಸೌಲಭ್ಯಗಳನ್ನು ಒಳಗೊಂಡಿದೆ. ಸುಮಾರು 960 ಎಕರೆ ಜಮೀನನ್ನು ಈ ಯೋಜನೆಗೆ ಬಳಸಲಾಗುತ್ತಿದ್ದು, ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯ ಸಮೀಪದಲ್ಲಿ ಈ ಯೋಜನೆ ಜಾರಿಯಾಗಲಿದೆ.
ಬೆಂಗಳೂರು, ಡಿಸೆಂಬರ್ 04: ಕೋಲಾರ ಜಿಲ್ಲೆಯ ಕೆ.ಜಿ.ಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ (Integrated Township) ಯೋಜನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿಸ್ತೃತ ಯೋಜನೆ ವರದಿಯನ್ನು ಸಿದ್ಧಪಡಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದ್ದಾರೆ.
ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಅಧಿಕಾರಿಗಳು, ಕೆ.ಜಿ.ಎಫ್ ಮತ್ತು ಬಂಗಾರಪೇಟೆ ತಹಶೀಲ್ದಾರ್ ಹಾಗೂ ಕೆ.ಜಿ.ಎಫ್ ನಗರಾಭಿವೃದ್ಧಿ ಆಯುಕ್ತರು ಹಾಗೂ ಕೆ.ಜಿ.ಎಫ್ ನಗರ ಯೋಜನಾ ಆಯುಕ್ತರನ್ನು ಒಳಗೊಂಡಂತೆ ಸಚಿವ ಭೈರತಿ ಸುರೇಶ್ ಸಭೆ ಮಾಡಿದ್ದಾರೆ.
ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣಕ್ಕೆ ಮುಂದಾದ ಕೋಲಾರ ನಗರಾಭಿವೃದ್ಧಿ ಇಲಾಖೆ
ಮುಖ್ಯಮಂತ್ರಿ ಸಿದ್ದರಾಮಯ್ಯ 2024-25ನೇ ಸಾಲಿನ ಆಯ-ವ್ಯಯ ಮಂಡನೆ ವೇಳೆ ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೋಲಾರ ಚಿನ್ನದ ಗಣಿ ಪ್ರದೇಶ (ಕೆ.ಜಿ.ಎಫ್), ಬಳ್ಳಾರಿ ಮತ್ತು ತುಮಕೂರಿನ ವಸಂತ ನರಸಾಪುರದಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣದ ಬಗ್ಗೆ ಘೋಷಿಸಿದ್ದಾರೆ. ಅಂತೆಯೇ ಕೋಲಾರ ಜಿಲ್ಲೆಯ ಕೆ.ಜಿ.ಎಫ್ ಪಟ್ಟಣದಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣ ಮಾಡಲು ನಗರಾಭಿವೃದ್ಧಿ ಇಲಾಖೆ ಮುಂದಡಿ ಇಟ್ಟಿದ್ದು, ಇದನ್ನು ಮತ್ತಷ್ಟು ಚುರುಕುಗೊಳಿಸಲು ಸಚಿವ ಭೈರತಿ ಸುರೇಶ್ ಉತ್ಸುಕರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಕಾರ್ಯ ಸಾಧ್ಯತೆಯ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸುವಂತೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳಿಗೆ ಸಚಿವರು ಸೂಚಿಸಿದ್ದಾರೆ.
ಇದನ್ನೂ ಓದಿ: ಕೋಲಾರದಲ್ಲಿ ಜನಜೀವನ ಬದಲಿಸಿದ ಜಲಜೀವನ್ ಮಿಷನ್; ಮನೆಮನೆಗೆ ಹರಿಯುತ್ತಿದ್ದಾಳೆ ಗಂಗೆ
ಕೆ.ಜಿ.ಎಫ್ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣಕ್ಕಾಗಿ ಬಿ.ಜಿ.ಎಂ.ಎಲ್ ಸುಪರ್ದಿಯಲ್ಲಿರುವ ರಾಜ್ಯ ಸರ್ಕಾರದ ಸುಮಾರು 960 ಎಕರೆ ಜಮೀನು, ಇದರಲ್ಲಿ ಕೆ.ಜಿ.ಎಫ್ ತಾಲ್ಲೂಕಿನಲ್ಲಿ ಬಂಗಾರದ ಗಣಿ ಗ್ರಾಮದ ಸರ್ವೆ ನಂ. 3 ರಲ್ಲಿ 294 ಎಕರೆ ಜಾಗವನ್ನು ಗುರುತಿಸಲಾಗಿದೆ. ಬಿ.ಇ.ಎಂ.ಎಲ್ ಸುಪರ್ದಿಯಲ್ಲಿದ್ದ ಕೆಲವು ಎಕರೆ ಜಾಗವನ್ನು ನಗರಾಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಉಳಿದ ಜಮೀನನ್ನು ಪಡೆಯಲು ಕ್ರಮ ವಹಿಸುವಂತೆ ಸೂಚಿಸಲಾಗಿದೆ.
ಚೆನೈ-ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿ ಕೆ.ಜಿ.ಎಫ್ ಮೂಲಕ ಹಾದು ಹೋಗಿದ್ದು, ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣ ಮಾಡಲು ಉದ್ದೇಶಿಸಿರುವ ಜಾಗದಿಂದ 2.5 ಕಿ.ಮೀ ಅಂತರದಲ್ಲಿದೆ. ಎಕ್ಸ್ಪ್ರೇಸ್ ಹೆದ್ದಾರಿಯಿಂದ ಟೌನ್ಶಿಪ್ ಗೆ ನೇರ ಸಂಪರ್ಕ ಕಲ್ಪಿಸಲು ಸಾಧ್ಯವೇ ಎಂಬುವುದನ್ನು ಪರಿಶೀಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಸಲಾಗಿದೆ.
ಎಕ್ಸ್ಪ್ರೆಸ್ ಹೆದ್ದಾರಿಯ ಮೂಲಕ ಇಂಟಿಗ್ರೇಟೆಡ್ ಟೌನ್ಶಿಪ್ಗೆ ನೇರ ರಸ್ತೆ ಕಲ್ಪಿಸಲು ಸಾಧ್ಯವಾಗದಿದ್ದಲ್ಲಿ, ಸರ್ವಿಸ್ ರಸ್ತೆ, ಎತ್ತರಿಸಿದ (Elevated) ರಸ್ತೆ ಅಥವಾ ಮ್ಯಾಜಿಕ್ ಬಾಕ್ಸ್ ಮೂಲಕ ರಸ್ತೆ ನಿರ್ಮಾಣ ಮಾಡಲು ಸಾಧ್ಯವಿದೆಯೇ ಎನ್ನುವುದನ್ನು ಸಮೀಕ್ಷೆ ಮಾಡಿ ಅದಷ್ಟು ಬೇಗ ವರದಿ ನೀಡುವಂತೆ ಕೆ.ಜಿ.ಎಫ್ ನಗರ ಯೋಜನಾ ಪ್ರಾಧಿಕಾರದ ಆಯುಕ್ತರಿಗೆ ಸಚಿವ ಭೈರತಿ ಸುರೇಶ್ ಸೂಚಿಸಿದ್ದಾರೆ.
ಖಾಸಗಿ ಕಂಪನಿಗಳಿಗೆ ಟೆಂಡರ್ ಆಹ್ವಾನಿಸಲು ಸಿದ್ಧತೆ
ಕೆ.ಜಿ.ಎಫ್ ನಲ್ಲಿ ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣ ಮಾಡಲು ತಗಲುವ ವೆಚ್ಚ ಎಷ್ಟಾಗುತ್ತದೆ ಎನ್ನುವುದರ ಬಗ್ಗೆ ವಿಸ್ತೃತ ವರದಿಯನ್ನು ನೀಡಲು ಮತ್ತು ಇಂಟಿಗ್ರೇಟೆಡ್ ಟೌನ್ಶಿಪ್ ನಿರ್ಮಾಣದ ಬಗ್ಗೆ ವಿಸ್ತೃತ ವರದಿಯನ್ನು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಮೂಲಕ ನೀಡುವಂತೆ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿಯವರಿಗೆ ಸೂಚಿಸಿದರು. ಇದಕ್ಕಾಗಿ ಖಾಸಗಿ ಕಂಪನಿಗಳನ್ನು ಆಹ್ವಾನಿಸಲು ಟೆಂಡರ್ ಕರೆಯಲು ಸಹ ತಿಳಿಸಲಾಗಿದೆ.
ವಸತಿ ಯೋಜನೆ, ಕೈಗಾರಿಕೆಗಳು, ಆರೋಗ್ಯ ಘಟಕಗಳು ಶೈಕ್ಷಣಿಕ ಸಂಸ್ಥೆಗಳು, ವಾಣಿಜ್ಯ ಮುಂಗಟ್ಟುಗಳು, ಬ್ಯಾಂಕ್ಗಳು, ಉದ್ಯಾನವನ, ಮನೋರಂಜನ ತಾಣಗಳು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ, ಸದರಿ ಯೋಜನೆಯಿಂದಾಗಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಮತ್ತು ಉತ್ತಮ ವಸತಿ ಯೋಜನೆಯ ವಿಭಿನ್ನ ಹಾಗೂ ವಿಶಿಷ್ಟವಾದ ಇಂಟಿಗ್ರೇಟೆಡ್ ಟೌನ್ಶಿಪ್ ಅನ್ನು ಕೆ.ಜಿ.ಎಫ್ ನಲ್ಲಿ ನಿರ್ಮಾಣ ಮಾಡಲು ರಾಜ್ಯ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ.
ಇದನ್ನೂ ಓದಿ: ಟಿವಿ9 ಇಂಪ್ಯಾಕ್ಟ್: ಒಂದೂವರೆ ವರ್ಷದ ಬಳಿಕ ಗ್ರಾಮಕ್ಕೆ ವಿದ್ಯುತ್ ಸಂಪರ್ಕ, ಜನರು ಫುಲ್ ಖುಷ್
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧ ಹಾಗೂ ಹಣಕಾಸು ನಿಗಮದ ಅಧ್ಯಕ್ಷರು ಹಾಗೂ ಬಂಗಾರಪೇಟೆ ಶಾಸಕ ಎಸ್. ಎನ್. ನಾರಾಯಣಸ್ವಾಮಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ಎಂ. ದೀಪ, ಕೆ.ಯು.ಐ.ಡಿ.ಎಫ್.ಸಿ ವ್ಯವಸ್ಥಾಪಕ ನಿರ್ದೇಶಕರು ಬಿ. ಶರತ್, ಮುಖ್ಯ ಅಭಿಯಂತರ ನಂದೀಶ್ ಕುಮಾರ್, ಬಂಗಾರಪೇಟೆ ಮತ್ತು ಕೆ.ಜಿ.ಎಫ್ ತಹಶೀಲ್ದಾರ್, ಕೆ.ಜಿ.ಎಫ್ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಸೇರಿದಂತೆ ಕೆಲ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:37 pm, Wed, 4 December 24