ಬೆಂಗಳೂರು, ಜೂನ್ 15: ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ (Retail Sales Tax) ದರವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿ ಶನಿವಾರ ಆದೇಶ ಹೊರಡಿಸಿದೆ. ಆ ಮೂಲಕ ಪೆಟ್ರೋಲ್ ಬೆಲೆ 3 ರೂ. ಹಾಗೂ ಡಿಸೇಲ್ ಬೆಲೆ 3.50 ರೂಪಾಯಿ ಹೆಚ್ಚಳವಾಗಲಿದೆ. ಸದ್ಯ ಈ ವಿಚಾರವಾಗಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಕಾಂಗ್ರೆಸ್ ಚೊಂಬು ಕೊಟ್ಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, ಅಭಿವೃದ್ಧಿ ಕೇಳಬೇಡಿ.. ತೊಗೊಳ್ರಪ್ಪ ಕೊಟ್ರು ಚೊಂಬು.. ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರೂ, ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ.
ಅಭಿವೃದ್ಧಿ ಕೇಳ್ಬೇಡಿ ….
ತೊಗೊಳ್ರಪ್ಪ ಕೊಟ್ರು ಚೊಂಬು…..
ಬೆಲೆ ಏರಿಕೆಯ ಬಗ್ಗೆ ಉದ್ದುದ್ದ ಭಾಷಣ ಬಿಗಿದು, ಕೇಂದ್ರ ಸರ್ಕಾರದ ಮೇಲೆ ಬೊಟ್ಟು ತೋರಿಸಿ ಜನರ ದಿಕ್ಕು ತಪ್ಪಿಸುವ ರಾಜ್ಯ ಕಾಂಗ್ರೆಸ್ ಸರ್ಕಾರ, ಕೇಂದ್ರ ಇಂಧನದ ಬೆಲೆ ಕಡಿಮೆ ಮಾಡಿದ್ದರೂ, ರಾಜ್ಯದಲ್ಲಿ ಏಕಾಏಕಿ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಏರಿಸಿ ಜನರಿಗೆ ಹೊರೆಮಾಡಿದೆ.… pic.twitter.com/GPTV56FZlC— Pralhad Joshi (@JoshiPralhad) June 15, 2024
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ, ದುರಾಡಳಿತ, ರೈತರ ಆತ್ಮಹತ್ಯೆ, ಹಗರಣಗಳ ಭಾಗ್ಯವನ್ನು ರಾಜ್ಯಕ್ಕೆ ನೀಡಿದ್ದು, ಅಧಿಕಾರ ವಹಿಸಿಕೊಂಡ ಕಳೆದ 1.5 ವರ್ಷಗಳಿಂದ ರಾಜ್ಯದಲ್ಲಿ ಅಭಿವೃದ್ಧಿಯಂತೂ ಇಲ್ಲವೇ ಇಲ್ಲ. ಈಗ ನೇರವಾಗಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸಕ್ಕೆ ಕೈ ಹಾಕಿದೆ ಕಾಂಗ್ರೆಸ್ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ: Petrol Diesel Price Hike: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ದರ ಏರಿಕೆ; ಮಾರಾಟ ತೆರಿಗೆ ಹೆಚ್ಚಿಸಿದ ಸರ್ಕಾರ
ವಿಪಕ್ಷ ನಾಯಕ ಆರ್. ಅಶೋಕ್ ಕೂಡ ಟ್ವೀಟ್ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ.
ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ @INCKarnataka ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ.
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ… pic.twitter.com/JKUwZZcGKb
— R. Ashoka (ಮೋದಿ ಅವರ ಕುಟುಂಬ) (@RAshokaBJP) June 15, 2024
ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:50 pm, Sat, 15 June 24