ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳನ್ನು ಕಸ್ಟಡಿಗೆ ಪಡೆದ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳನ್ನು ಕಸ್ಟಡಿಗೆ ಪಡೆದ ಪೊಲೀಸರು, ಗೌಪ್ಯ ಸ್ಥಳದಲ್ಲಿ ವಿಚಾರಣೆ
ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿಗಳು
Edited By:

Updated on: Jul 30, 2022 | 12:15 PM

ದಕ್ಷಿಣ ಕನ್ನಡ: ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಭೀಕರ ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಪ್ರವೀಣ್ ಹತ್ಯೆ ನಡೆದ ಒಂದೇ ದಿನಕ್ಕೆ ಝಾಕಿರ್, ಶಫಿಕ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಝಾಕಿರ್ ಮತ್ತು ಶಫಿಕ್ ಎಂಬವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆ. ಅದರಂತೆ ನ್ಯಾಯಾಲಯವು ಐದು ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಸದ್ಯ ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿರಿಸಿ ತೀವ್ರ ವಿಚಾರಣೆ ನಡೆಸಲಾಗುತ್ತಿದೆ.

ಮಸೂದ್ ಕೊಲೆ ನಡೆದ ಎರಡು ದಿನಗಳ ನಂತರ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬೆಳ್ಳಾರೆಯಲ್ಲಿ ಭೀಕರವಾಗಿ ಹತ್ಯೆಗೈಯಲಾಗಿತ್ತು. ಅಂದಿನಿಂದ ಕರಾವಳಿ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಅಲ್ಲದೆ ಕಾರ್ಯಕರ್ತನನ್ನು ಕಳೆದುಕೊಂಡು ಕೆರಳಿದ ಕರಾವಳಿ ಬಿಜೆಪಿ ಪಡೆ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಸರ್ಕಾರದ ವಿರುದ್ಧವೇ ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳ್ಳಾರೆಯಲ್ಲಿ ಆರಂಭವಾದ ಪ್ರತಿಭಟನೆಯ ಕಿಚ್ಚು ಕರಾವಳಿಯನ್ನು ವ್ಯಾಪಿಸಿ ನಂತರ ಇಡೀ ರಾಜ್ಯಕ್ಕೆ ಹಬ್ಬಿದೆ. ಅದರಂತೆ ಅಲ್ಲಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬಿಸಿ ಮುಟ್ಟಿಸಲಾಗುತ್ತಿದೆ.

ಪ್ರವೀಣ್ ಹತ್ಯೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಜಿಲ್ಲೆಯಲ್ಲೂ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ವಿವಿಧ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೊಶ ಹೊರಹಾಕುತ್ತಿದ್ದಾರೆ. ನಗರದ ಗನಹೌಸ್ ಸರ್ಕಲ್ ಬಳಿ ಜಮಾಯಿಸಿದ ನೂರಾರು ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ನಂತರ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಿದ್ದಾರೆ.

Published On - 12:13 pm, Sat, 30 July 22