ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ

ನಾಳೆ 76ನೇ ಗಣರಾಜ್ಯೋತ್ಸವ ಹಿನ್ನೆಲೆ ಬೆಂಗಳೂರಿನಲ್ಲಿ ಸಿದ್ಧತೆ ಮಾಡಲಾಗಿದೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗ್ಗೆ 9ಕ್ಕೆ ರಾಜ್ಯಪಾಲ ಗೆಹ್ಲೋಟ್ ಧ್ವಜಾರೋಹಣ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಪೊಲೀಸರಿಂದ ಬಿಗಿ ಭದ್ರತೆ ಏರ್ಪಡಿಸಲಾಗಿದೆ.

ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವಕ್ಕೆ ಸಿದ್ಧತೆ
Manekshaw Parade
Edited By:

Updated on: Jan 25, 2025 | 10:14 PM

ಬೆಂಗಳೂರು: ಬೆಂಗಳೂರಿನಲ್ಲಿರುವ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಾಳೆ (ಜನವರಿ 26) ಗಣರಾಜ್ಯೋತ್ಸವ ಸಮಾರಂಭಕ್ಕೆ ಸಿದ್ಧತೆ ನಡೆದಿದೆ. ನಾಳೆ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರಿಂದ ಧ್ವಜಾರೋಹಣ ನಡೆಯಲಿದ್ದು, ಗೌರವ ವಂದನೆಗೆ ಸಿದ್ಧತೆ ನಡೆಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಗಣರಾಜ್ಯೋತ್ಸವದ ಪರೇಡ್​ನಲ್ಲಿ ಭಾಗಿಯಾಗಲಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬೆಂಗಳೂರು ಪೊಲೀಸರ ಬಿಗಿ ಭದ್ರತೆ ಒದಗಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದಾರೆ. 8 ಮಂದಿ ಡಿಸಿಪಿ, 17 ಮಂದಿ ಎಸಿಪಿ, 44 ಮಂದಿ ಪಿಐ ಸೇರಿ 1051 ಪೊಲೀಸರ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ 114 ಪಿಎಸ್​​ಐ, 58 ಎಎಸ್ಐ, 80 ಸಿಬ್ಬಂದಿ, 30 ಕ್ಯಾಮೆರಾ ಸಿಬ್ಬಂದಿಯಿಂದ ಭದ್ರತೆ ಒದಗಿಸಲಾಗಿದೆ. ಬಂದೋಬಸ್ತ್​​ಗೆ 10 ಕೆಎಸ್​ಆರ್​ಪಿ ತುಕಡಿ, 2 ಅಗ್ನಿಶಾಮಕ ವಾಹನ, ಕ್ಷಿಪ್ರ ಕಾರ್ಯಾಚರಣೆ ತಂಡ ಇರಲಿದೆ.

ಮಾಣಿಕ್ ಷಾ ಪರೇಡ್ ಮೈದಾನದ ಸುತ್ತ ಒಟ್ಟು 103 ಸಿಸಿಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಕಲರ್ ಕೋಡ್​ಗಳ ಮೂಲಕ ಪಾಸ್ ವಿತರಿಸಿ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಪಿಂಕ್ ಬಣ್ಣದ ಪಾಸ್ ನೀಡಲಾಗುತ್ತದೆ. ವಿಐಪಿ ಪಾಸ್ ಇದ್ದವರು ಗೇಟ್-2ರ ಮೂಲಕ ಪ್ರವೇಶಿಸಬಹುದು. ಮುಖ್ಯ ಅತಿಥಿಗಳು, ಗಣ್ಯರು ಗೇಟ್-3 ಮೂಲಕ ಪ್ರವೇಶಿಸಬಹುದು. ಗೇಟ್-4ರಲ್ಲಿ ಬಿಳಿ ಪಾಸ್ ನೀಡಲಾಗುತ್ತದೆ. ಇಲ್ಲಿ ಮಾಧ್ಯಮದವರಿಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇದನ್ನೂ ಓದಿ: ಗಣರಾಜ್ಯೋತ್ಸವ: ಭಾನುವಾರ ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾರ್ಕಿಂಗ್​ ನಿಷೇಧ

ನಾಳೆ ಬೆಳಗ್ಗೆ 8.30ರಿಂದ 10.30ರವರೆಗೆ ಮಾಣಿಕ್ ಷಾ ಮೈದಾನದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ ಹೇರಲಾಗಿದೆ. ಕಬ್ಬನ್ ರಸ್ತೆ, ಕಾಮರಾಜ ರಸ್ತೆ, ಬಿಆರ್​ವಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಪರ್ಯಾಯ ರಸ್ತೆಗಳಲ್ಲಿ ಸಂಚರಿಸಲು ನಗರ ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ಇನ್ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟ‌ರ್ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್ ಫೆಂಟ್ರಿರಸ್ತೆ ಸಫೀನಾ ಪ್ಲಾಜಾದಲ್ಲಿ ಎಡತಿರುವು ಪಡೆದು ಮೈನ್​ಗಾರ್ಡ್​ರಸ್ತೆ – ಆಲೀಸ್​ ಸರ್ಕಲ್​​-ಡಿಸ್ಸೆನ್ಸರಿ ರಸ್ತೆ – ಕಾಮರಾಜರಸ್ತೆ ಮತ್ತು ಡಿಕನ್ಸನ್ ರಸ್ತೆ ಜಂಕ್ಷನ್​ನಲ್ಲಿ ಬಲಕ್ಕೆ ತಿರುವು ಪಡೆಯಬೇಕು. ಅಲ್ಲಿಂದ ಕಾಮರಾಜ ರಸ್ತೆ- ಕಬ್ಬನ್​ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್​ನಲ್ಲಿ ಎಡಕ್ಕೆ ತಿರುವು ಪಡೆದು- ಕಬ್ಬನ್‌ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್ ಕಡೆಗೆ ಸಾಗಬೇಕು.

ಅದರ ಜೊತೆಗೆ ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತ, ಶಿವಾಜಿನಗರ ಬಸ್ ನಿಲ್ದಾಣ, ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ, ಕಬ್ಬನ್ ಜಂಕ್ಷನ್​​ವರೆಗೆ ಹಾಗೂ ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.

 

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ