ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕ್ ಖರ್ಗೆ, UT ಖಾದರ್, ಈಶ್ವರ್ ಖಂಡ್ರೆ ಪರಿಚಯ
ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಡಾ.ಜಿ. ಪರಮೇಶ್ವರ ಉಪಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಇದೇ ವೇಳೆ ಈಶ್ವರ್ ಖಂಡ್ರೆ, ಪ್ರಿಯಾಂಕ್ ಖರ್ಗೆ ಅವರು ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣವನ ಸ್ವೀಕರಿಸಿದರು. ಇದೇ ಸ್ಪೀಕರ್ ಆಗಿದ್ದ ಖಾದರ್ ಸಹ ಡಿಕೆಶಿ ಸಂಪುಟ ಸೇರಿದ್ದಾರೆ.

ಬೆಂಗಳೂರು, ಜೂನ್ 03): ಕರ್ನಾಟಕದ (karnataka) 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣವಚನವನ್ನು ಸ್ವೀಕರಿಸಿದರು. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಸಿಎಂ ಪ್ರತಿಜ್ಞಾವಿಧಿ ಬೋಧಿಸಿದರು. ಡಿ.ಕೆ. ಶಿವಕುಮಾರ್ ಅವರೊಂದಿಗೆ ಉಪಮುಖ್ಯಮಂತ್ರಿಯಾಗಿ ಡಾ.ಜಿ. ಪರಮೇಶ್ವರ ಸ್ವೀಕರಿಸಿದರೆ, ಯುಟಿ ಖಾದರ್, ಈಶ್ವರ್ ಖಂಡ್ರೆ ಹಾಗೂ ಪ್ರಿಯಾಂಕ್ ಖರ್ಗೆ ಅವರು ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡಿದರು. ವಿಶೇಷ ಅಂದ್ರೆ ಖಂಡ್ರೆ ಹಾಗೂ ಖರ್ಗೆ ಮೂರನೇ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಮುಖ್ಯಾಂಶಗಳು
- ಮೂರನೇ ಬಾರಿಗೆ ಸಚಿವರಾದ ಈಶ್ವರ್ ಖಂಡ್ರೆ
- ಕ್ಯಾಬಿನೆಟ್ ಸಚಿವರಾಗಿ ಪ್ರಿಯಾಂಕ್ ಖರ್ಗೆ ಪ್ರಮಾಣವಚನ
- ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಯುಟಿ ಖಾದರ್ ಸಚಿವರಾಗಿ ಅಧಿಕಾರ ಸ್ವೀಕಾರ
ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ಕ್ಷೇತ್ರದ ಶಾಸಕರಾಗಿರುವ ಯು.ಟಿ.ಖಾದರ್ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಣವಚನ ಸ್ವೀಕರಿಸಿದರೆ, ಭಾಲ್ಕಿ ಕ್ಷೇತ್ರದ ಈಶ್ವರ ಖಂಡ್ರೆ ಅವರು ದೇವರು, ಚನ್ನಬಸವ ಪಟ್ಟದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು. ಇನ್ನು ಕಲಬುರಗಿ ಜಿಲ್ಲೆ ಚಿತ್ತಾಪುರ ಕ್ಷೇತ್ರದ ಶಾಸಕರಾಗಿರುವ ಪ್ರಿಯಾಂಕ್ ಖರ್ಗೆ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ ಎಂದು ಅಧಿಕಾರ ಸ್ವೀಕರಿಸಿದರು.
5 ಬಾರಿ ಶಾಸಕರಾಗಿ ಯು.ಟಿ.ಖಾದರ್ ಬಗ್ಗೆ
ಈವರೆಗೆ 5 ಬಾರಿ ಶಾಸಕರಾಗಿ ಯು.ಟಿ.ಖಾದರ್ ಆಯ್ಕೆಯಾಗಿದ್ದಾರೆ. 2007ರಲ್ಲಿ ಮೊದಲ ಸಲ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದ್ರು. 2013ರಲ್ಲಿ ಆರೋಗ್ಯ & ಕುಟುಂಬ ಕಲ್ಯಾಣ ಸಚಿವರಾಗಿದ್ದರು. 2016ರಲ್ಲಿ ಆಹಾರ, ನಾಗರಿಕ ಪೂರೈಕೆ ಖಾತೆ ನಿರ್ವಹಣೆ ಮಾಡಿದ್ರು. 2018ರಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ನಿಭಾಯಿಸಿದ್ದರು. ಚಾಮರಾಜನಗರ, ಕೋಲಾರ ಸೇರಿದಂತೆ ವಿವಿಧ ಜಿಲ್ಲೆಗಳ ಉಸ್ತುವಾರಿ ಸಚಿವರಾಗಿ ಸೇವೆ ಸಲ್ಲಿಸಿದ್ರು. 2022ರಲ್ಲಿ ವಿಧಾನಸಭೆ ಪ್ರತಿಪಕ್ಷ ಉಪನಾಯಕರಾಗಿದ್ದರು. 2023ರಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ವಿಧಾನಸಭೆ ಸ್ಪೀಕರ್ ಆಗಿ ಆಯ್ಕೆಯಾಗಿದ್ರು.
ಪ್ರಿಯಾಂಕ್ ಖರ್ಗೆ ರಾಜಕೀಯ ಜರ್ನಿ
ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಪ್ರಿಯಾಂಕ್ ಖರ್ಗೆ, 2013ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ವಿಧಾನಸಭೆ ಪ್ರವೇಶ ಮಾಡಿದ್ದರು. 2016 ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿ ಪದಾರ್ಪಣೆ ಮಾಡೋ ಮೂಲಕ ಐಟಿ, ಬಿಟಿ ಮತ್ತು ಪ್ರವಾಸೋದ್ಯಮ ಸಚಿವರಾಗಿ ಪ್ರಿಯಾಂಕ್ ಸೇವೆ ಸಲ್ಲಿಸಿದ್ದರು. ಇನ್ನು 2018ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆದ್ದು ಬೀಗಿದ್ದರು. ಆಗಲೂ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿ ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸಿದ್ದರು. 2023ರಲ್ಲಿ ಚಿತ್ತಾಪುರ ಕ್ಷೇತ್ರದಿಂದ 3ನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿ, ಸಿದ್ದರಾಮಯ್ಯ ಸಂಪುಟದಲ್ಲಿ ಐಟಿ-ಬಿಟಿ ಸಚಿವರಾಗಿದ್ದ ಪ್ರಿಯಾಂಕ್, ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಇಲಾಖೆಗಳನ್ನು ನಿರ್ವಹಣೆ ಮಾಡಿದ್ದಾರೆ.
3ನೇ ಬಾರಿಗೆ ಸಚಿವರಾದ ಈಶ್ವರ್ ಖಂಡ್ರೆ
ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಈಶ್ವರ ಖಂಡ್ರೆ ಈ ವರೆಗೆ ಅವರು ನಾಲ್ಕು ಬಾರಿ ಗೆಲುವು ಸಾಧಿಸಿದ್ದಾರೆ. 2013ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಲ್ಲಿ ಪೌರಾಡಳಿತ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿದ್ದ ಖಂಡ್ರೆ, ಬಳಿಕ 2023ರ ಮತ್ತೊಮ್ಮೆ ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದರು. ಇದೀಗ ಡಿಕೆ ಶಿವಕುಮಾರ್ ಸಂಪುಟದಲ್ಲೂ ಸಹ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಅಲ್ಲದೇ ಈ ಹಿಂದೆ ಕೆಪಿಸಿಸಿ ಕಾರ್ಯಧ್ಯಕ್ಷರಾಗಿದ್ದರು. ಅಲ್ಲದೇ ಇದೀಗ ಅವರು ರಾಷ್ಟ್ರೀಯ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷರಾಗಿದ್ದಾರೆ.




