ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ನೌಕರರಿಗೆ ಕಡಿವಾಣ ಹಾಕಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಸಚಿವ ಪ್ರಿಯಾಂಕ್ ಖರ್ಗೆ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದು, ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು RSS ಸೇರಿದಂತೆ ರಾಜಕೀಯ ಸಂಘಟನೆಗಳ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ನಿಷೇಧಿಸುವಂತೆ ಸುತ್ತೋಲೆ ಹೊರಡಿಸಲು ಆಗ್ರಹಿಸಿದ್ದಾರೆ. ಅಸ್ತಿತ್ವದಲ್ಲಿರುವ ಸೇವಾ ನಿಯಮಗಳ ಉಲ್ಲಂಘನೆಯಾಗುತ್ತಿದ್ದು, ಇದನ್ನು ತಡೆಗಟ್ಟಲು ಶಿಸ್ತುಕ್ರಮದ ಸುತ್ತೋಲೆ ಹೊರಡಿಸುವಂತೆ ಕೋರಿದ್ದಾರೆ.

ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವ ನೌಕರರಿಗೆ ಕಡಿವಾಣ ಹಾಕಿ: ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ
ಸಿಎಂಗೆ ಮತ್ತೊಂದು ಪತ್ರ ಬರೆದ ಪ್ರಿಯಾಂಕ್ ಖರ್ಗೆ
Edited By:

Updated on: Oct 16, 2025 | 11:43 AM

ಬೆಂಗಳೂರು, ಅಕ್ಟೋಬರ್ 16: ಸರ್ಕಾರಿ ಶಾಲೆಯ ಆವರಣ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸಂಬಂಧಪಟ್ಟ ಸ್ಥಳಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಇದೀಗ ಮುಖ್ಯಮಂತ್ರಿಗಳಿಗೆ ಮತ್ತೊಂದು ಪತ್ರ ಬರೆದಿದ್ದಾರೆ. ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಆರ್​ಎಸ್​ಎಸ್ ಚಟುವಟಿಕೆಗಳಲ್ಲಿ ಭಾಗಿಯಾಗುವುದಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹಲವು ನಿಯಮಗಳು ಜಾರಿಯಲ್ಲಿವೆ. ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಆಗಲಿದೆ ಎಂಬ ಸುತ್ತೋಲೆ ಹೊರಡಿಸಬೇಕು. ಸಂಬಂಧಿಸಿದವರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಸಿಎಂಗೆ ಬರೆದ ಪತ್ರದಲ್ಲಿ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

ಪ್ರಿಯಾಂಕ್ ಖರ್ಗೆ ಸಿಎಂಗೆ ಬರೆದ ಪತ್ರದಲ್ಲೇನಿದೆ?

ಯಾವನೇ ಸರ್ಕಾರಿ ನೌಕರನು, ಯಾವುದೇ ರಾಜಕೀಯ ಪಕ್ಷದ ಅಥವಾ ರಾಜಕಾರಣದಲ್ಲಿ ಭಾಗವಹಿಸುವ ಸಂಘ ಸಂಸ್ಥೆಯ ಸದಸ್ಯನಾಗಿರಬಾರದು. ಅವುಗಳೊಂದಿಗೆ ಸಂಬಂಧ ಹೊಂದಿರಬಾರದು. ಸ್ಪಷ್ಟವಾಗಿ ನಿರ್ದೇಶನ ನೀಡಲಾಗಿದ್ದರೂ ಸಹ ಇತ್ತೀಚಿನ ದಿನಗಳಲ್ಲಿ ಆರ್​ಎಸ್​ಎಸ್ ಹಾಗೂ ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಭಾಗವಹಿಸುತ್ತಿರುವುದನ್ನು ಗಮನಿಸಲಾಗಿದೆ. ಆದ್ದರಿಂದ ರಾಜ್ಯದ ಸರ್ಕಾರಿ ಅಧಿಕಾರಿ ಮತ್ತು ನೌಕರರು RSS, ಇತರೆ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವ ಕಾರ್ಯಕ್ರಮಗಳು ಹಾಗೂ ಚಟುವಟಿಕೆಗಳಲ್ಲಿ ಭಾಗವಹಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಇದನ್ನು ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ತಿಳಿಸುವ ಸುತ್ತೋಲೆಯನ್ನು ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ನೌಕರರಿಗೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡಿ ಎಂದು ಸಿಎಂಗೆ ಬರೆದ ಪತ್ರದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಜಾಗದಲ್ಲಿ RSS ಚಟುವಟಿಕೆ ನಿಷೇಧ ಬಗ್ಗೆ ಮಹತ್ವದ ಸುಳಿವು ಕೊಟ್ಟ ಸಿಎಂ ಸಿದ್ದರಾಮಯ್ಯ

ಸರ್ಕಾರಿ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇದಕ್ಕೆ ಆರ್​ಎಸ್​ಎಸ್, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಆ ನಂತರ, ತಮಗೆ ಬೆದರಿಕೆ ಕರೆಗಳು ಹಾಗೂ ಸಂದೇಶಗಳು ಬರುತ್ತಿವೆ. ಆದರೆ, ಯಾವುದಕ್ಕೂ ಜಗ್ಗಲ್ಲ ಎಂದು ಅವರು ಹೇಳಿದ್ದರು. ಇದೀಗ ಮತ್ತೆ ಸಿಎಂಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ