ಬೆಂಗಳೂರು: 545 ಪಿಎಸ್ಐ ಹುದ್ದೆಗಳ ಭರ್ತಿ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ(PSI Recruitment Scam) ಪ್ರಕರಣ ಸಂಬಂಧ ರಾಜ್ಯ ಸರ್ಕಾರ ತೀರ್ಮಾನಿಸಿದ ಮರು ಪರೀಕ್ಷೆ (Re Exam)ಯನ್ನು ಕೈಬಿಡುವಂತೆ ಒತ್ತಾಯಿಸಿ ನಗರದ ಫ್ರೀಡಂಪಾರ್ಕ್ (Freedom park)ನಲ್ಲಿ ಅಭ್ಯರ್ಥಿಗಳು ಪ್ರತಿಭಟನೆ (Protest) ನಡೆಸಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ನೀಡುವ ಸಲುವಾಗಿ ಮಾಜಿ ಸಚಿವೆ ಬಿ.ಟಿ ಲಲಿತಾ ನಾಯಕ್ ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರ ಸರಿಯಲ್ಲ. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಅನ್ಯಾಯವಾಗಲಿದೆ. ಕೂಡಲೇ ನಿರ್ಧಾರದಿಂದ ಹಿಂದೆಸರಿದು ಪ್ರಾಮಾಣಿಕವಾಗಿ ಆಯ್ಕೆಯಾದವರಿಗೆ ನೇಮಕಾತಿ ಆದೇಶ ಪತ್ರ ನೀಡುವಂತೆ ಅಭ್ಯರ್ಥಿಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಅಭ್ಯರ್ಥಿಗಳು ಒಬ್ಬೊಬ್ಬರಾಗಿಯೇ ಫ್ರೀಡಂಪಾರ್ಕ್ಗೆ ಆಗಮಿಸಿ ಪ್ರತಿಭಟನೆ ಆರಂಭಿಸಿದ್ದು, 300ಕ್ಕೂ ಹೆಚ್ಚು ಮಂದಿ ಜಮಾಯಿಸಿದ್ದಾರೆ. ಇವರಿಗೆ ಸಮತಾ ಸೈನಿಕ ದಳ, ದಲಿತಪರ ಸಂಘಟನೆಗಳು, ರೈತಪರ ಸಂಘಟನೆಗಳು, ಮಹಿಳಾ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಇದನ್ನೂ ಓದಿ: PSI Recruimtnet Scam: ಶಾಂತಕುಮಾರ್ ಬಂಧನ ಬೆನ್ನಲ್ಲೇ ಅಮೃತ್ ಪೌಲ್ ವಿರುದ್ಧ ಗಂಭೀರ ಆರೋಪ: ಸಿಐಡಿ ವಿಚಾರಣೆ
ಈಗಲೇ ಭರವಸೆ ನೀಡಲು ಸಾಧ್ಯವಿಲ್ಲ
ಮರು ಪರೀಕ್ಷೆ ಆದೇಶ ಹಿಂಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭೇಟಿ ನೀಡಿ ಅಭ್ಯರ್ಥಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಅಭ್ಯರ್ಥಿಗಳು ಮರು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಪಿಎಸ್ಐ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆಯುತ್ತಿದೆ. ತನಿಖೆ ಮುಗಿಯುವವರೆಗೂ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ. ತನಿಖೆ ಪೂರ್ಣಗೊಳ್ಳುವವರೆಗೆ ತಾಳ್ಮೆಯಿಂದ ಇರಬೇಕು. ನೀವು ನೀಡಿದ ಮನವಿ ಪತ್ರವನ್ನು ನಾನು ಪರಿಶೀಲಿಸುತ್ತೇನೆ ಎಂದರು.
545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ನಡೆದ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆ ಹರಿದಿರುವುದು ತನಿಖೆ ವೇಳೆ ದೃಢವಾಗಿತ್ತು. ತನಿಖೆ ಹೆಚ್ಚಾದಂತೆ ಒಂದೊಂದು ಅಕ್ರಮ ಬೆಳಕಿಗೆ ಬರುತ್ತಿದೆ. ಬ್ಲೂಟೂತ್ ಬಳಕೆ ಮಾಡಿ ಎಕ್ಸಾಂ ಬರೆದಿರುವುದು, ಒಎಂಆರ್ ಪ್ರತಿಯನ್ನ ಎಕ್ಸಾಂ ಸೆಂಟರ್ನಲ್ಲಿ ತಿದ್ದುಪಡಿ ಮಾಡಿರುವುದು, ನೇಮಕಾತಿ ವಿಭಾಗದಲ್ಲಿ ಒಎಂಆರ್ ಪ್ರತಿಯಲ್ಲಿ ಅಕ್ರಮ ತಿದ್ದುಪಡಿ ಮಾಡಿರುವುದು, ಸೀಟಿಂಗ್ ವ್ಯವಸ್ಥೆ ಮಾಡಿ ಅಕ್ರಮ ಎಸಗಿ ಬರೆದಿರುವುದು, ಸಂಪೂರ್ಣ ಹುದ್ದೆಯನ್ನು ಡೀಲ್ ಮಾಡಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸಿರುವುದು ಸಿಐಡಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:18 pm, Sat, 28 May 22