ಬೆಂಗಳೂರು, ಜ.22: ರಾಜ್ಯದಲ್ಲಿ ನಡೆದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ (545 PSI Recruitment Scam) ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಇಂದು (ಜ.22) ರಂದು ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ತನಿಖಾ ವರದಿಯನ್ನು ನೀಡಿದೆ. ಈ ವೇಳೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಉಪಸ್ಥಿತರಿದ್ದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ 545 PSI ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಲಾಗಿತ್ತು. ಮರು ತನಿಖೆ ನಡೆಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರವು ಪ್ರಕರಣದ ಮರು ತನಿಖೆಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಸರ್ಕಾರದ ನಿರ್ದೇಶನದಂತೆ ವಿಚಾರಣಾ ಆಯೋಗವು PSI ನೇಮಕಾತಿಯ ಅಕ್ರಮದ ವರದಿ ಸಿದ್ದಪಡಿಸಿದೆ. ಪ್ರಕರಣದಲ್ಲಿ ಈಗಾಗಲೇ ಕೆಲ ಪೊಲೀಸ್ ಅಧಿಕಾರಿಗಳ ಬಂಧನವಾಗಿದೆ. ಪ್ರಭಾವಿ ರಾಜಕೀಯ ಮುಖಂಡರೂ ಭಾಗಿಯಾಗಿದ್ದಾರೆ ಎಂಬ ಆರೋಪದಡಿ. ಕೆಲವು ರಾಜಕಾರಣಿಗಳಿಗೂ ವಿಚಾರಣಾ ಆಯೋಗ ನೋಟಿಸ್ ನೀಡಿತ್ತು.
545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.
ಇದನ್ನೂ ಓದಿ: ಪಿಎಸ್ಐ ಮರುಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಸಬ್ಇನ್ಸ್ಪೆಕ್ಟರ್ ಸಿಸಿಬಿ ವಶಕ್ಕೆ
ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು. 545 ಪಿಎಸ್ಐ ಹುದ್ದೆಗಳಿಗೆ ನೇಮಕಾತಿಯಲ್ಲಿ ಅಕ್ರಮ ಪ್ರಕರಣ ಹಿನ್ನೆಲೆ ಪಿಎಸ್ಐ ನೇಮಕಾತಿ ವಿಭಾಗದಲ್ಲಿ ಅಧಿಕಾರಿಗಳಿಗಿಂತ ಬ್ರೋಕರ್ಗಳಿಗೂ ಹಣದ ಹೊಳೆ ಹರಿದಿತ್ತು. ಬ್ರೋಕರ್ಗಳ ಹಂತದಲ್ಲಿಯೂ ಕನಿಷ್ಠ 10 ಲಕ್ಷ, ನೇಮಕಾತಿ ವಿಭಾಗದ ಅಧಿಕಾರಿಗೆ ಮೂವತ್ತರಿಂದ ಮೂವತ್ತೈದು ಲಕ್ಷ ತಲುಪುತ್ತಿತ್ತು ಎಂಬ ಅಂಶ ತಿಳಿದುಬಂದಿತ್ತು.
ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿತ್ತು. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಭ್ರಷ್ಟಾಚಾರ ಪ್ರಕರಣದಲ್ಲಿ ಎಡಿಜಿಪಿ ಶ್ರೇಣಿಯ ಐಪಿಎಸ್ ಅಮೃತ್ ಪಾಲ್ರನ್ನು ಬಂಧಿಸಲಾಗಿತ್ತು. ಸಾಕ್ಷ್ಯಾಧಾರ ಸಿಕ್ಕಿದ್ದರಿಂದ ಅಮೃತ್ ಪಾಲ್ ಬಂಧಿಸಲಾಗಿದೆ ಎಂದು ಕಳೆದ ಸರ್ಕಾದ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಹಿಂದೆ ತಿಳಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:52 pm, Mon, 22 January 24