Gandhi Seva Award 2022: ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್‌ಗೆ ಗಾಂಧಿ ಸೇವಾ ಪ್ರಶಸ್ತಿ
ಮನೋರೋಗ ತಜ್ಞರಾಗಿರುವ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ ಪ್ರಕಟಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಎ.ವಿ.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯಿಂದ ಪ್ರಶಸ್ತಿಗಾಗಿ ಡಾ.ಸಿ.ಆರ್.ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಪ್ರಸಕ್ತ ಸಾಲಿನ ಗಾಂಧಿ ಸೇವಾ ಪ್ರಶಸ್ತಿ (Gandhi Seva Award 2022)ಗೆ ಮನೋರೋಗ ತಜ್ಞರಾಗಿರುವ ಡಾ.ಸಿ.ಆರ್.ಚಂದ್ರಶೇಖರ್ ಅವರನ್ನು ಆಯ್ಕೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ (A.V. Chandra Shekhar) ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ಡಾ.ಸಿ.ಆರ್.ಚಂದ್ರಶೇಖರ್ (Dr. C.R. Chandra Shekhar) ಅವರನ್ನು ಆಯ್ಕೆ ಮಾಡಿ ಸರ್ಕಾರದ ಮುಂದೆ ಹೆಸರನ್ನು ಪ್ರಸ್ತಾಪಿಸಿದೆ. ಅದರಂತೆ ಸರ್ಕಾರವು ಪ್ರಶಸ್ತಿಗಾಗಿ ಅವರ ಹೆಸರು ಅಧಿಕೃತವಾಗಿ ಘೋಷಣೆ ಮಾಡಿ ಆದೇಶಿಸಿದೆ.
2022ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಮುಂದೆ ಪ್ರಸ್ತಾಪವಾಗಿದ್ದ ಹೆಸರುಗಳ ಪೈಕಿ ಡಾ.ಸಿ.ಆರ್.ಚಂದ್ರಶೇಖರ್ ಅವರ ಹೆಸರನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಅದರಂತೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಮನೋರೋಗ ತಜ್ಞ ಡಾ.ಸಿ.ಆರ್.ಚಂದ್ರಶೇಖರ್ ಅವರಿಗೆ ಅಕ್ಟೋಬರ್ 2ರಂದು ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ರಾಷ್ಟ್ರೀಯ ಮಾನಸಿಕ ಮತ್ತು ನರರೋಗಗಳ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ಯಲ್ಲಿ 45 ಕ್ಕೂ ಹೆಚ್ಚು ವರ್ಷಗಳ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿರುವ ಇವರು 50 ಸಾವಿರಕ್ಕೂ ಹೆಚ್ಚು ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಿದವರಾಗಿದ್ದಾರೆ. ಅಷ್ಟೇ ಅಲ್ಲದೆ ನಿಮ್ಹಾನ್ಸ್ ಸಂಸ್ಥೆಗೆ 1.90 ಕೋಟಿ ರೂ. ದೇಣಿಗೆ ನೀಡಿ ಮಾನವೀಯತೆ ಮೆರೆದಿರುವ ಇವರು ಲೇಖಕರೂ ಆಗಿದ್ದಾರೆ. ಸಾವಿರಾರು ಲೇಖನಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದ್ದಾರೆ. ಇನ್ನೂರಕ್ಕೂ ಹೆಚ್ಚು ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಹಾಗೂ ಹತ್ತಾರು ಇಂಗ್ಲಿಷ್ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿದ್ದಾರೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:15 pm, Thu, 29 September 22