ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಹಲ್ಲೆ ನಡೆಸಿ ಅಮಾನುಷವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಡಿಜಿಪಿ ಅಲೋಕ್ ಕುಮಾರ್ ಗುರುವಾರ ಭರವಸೆ ನೀಡಿದ್ದಾರೆ. ಘಟನೆ ಸಂಬಂಧ ಟ್ವೀಟ್ ಮಾಡಿರುವ ಅವರು, ಪುತ್ತೂರು ಘಟನೆ ಸಂಬಂಧ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳು ಮತ್ತು ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಅಂತಹ ಕಾನೂನುಬಾಹಿರ ಮತ್ತು ಅನಗತ್ಯ ಕ್ರಮಗಳನ್ನು ಸಹಿಸುವುದಿಲ್ಲ ಎಂದು ಉಲ್ಲೇಖಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗಿರುವುದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಅಲೋಕ್ ಕುಮಾರ್ ಆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
Appropriate action is being taken against the erring Police Officers & men in Puttur incident
Zero tolerance for such illegal and unwarranted actions
— alok kumar (@alokkumar6994) May 18, 2023
ಘಟನೆ ಸಂಬಂಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದ್ದು, ಬಿಜೆಪಿ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಡಿವೈಎಸ್ಪಿ ಸೇರಿ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಶ್ರೀನಾಥ್ ರೆಡ್ಡಿ ಮತ್ತು ಅದೇ ಠಾಣೆಯ ಪೊಲೀಸ್ ಪೇದೆ ಹರ್ಷಿತ್ನನ್ನು ಅಮಾನತುಗೊಳಿಸಲಾಗಿದೆ.
ಈ ಮಧ್ಯೆ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೂ ಘಟನೆ ಸಂಬಂಧ ಪ್ರತಿಕ್ರಿಯಿಸಿದ್ದು, ಶುಕ್ರವಾರ ಬೆಳಿಗ್ಗೆ ಪುತ್ತೂರಿಗೆ ತೆರಳಿ ಗಾಯಾಳು ಹಿಂದೂ ಕಾರ್ಯಕರ್ತರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯವನ್ನು ಖಂಡಿಸುತ್ತೇನೆ. ನಾಳೆ ಬೆಳಗ್ಗೆ ಪುತ್ತೂರಿಗೆ ಭೇಟಿ ಕೊಟ್ಟು ನಮ್ಮ ಕಾರ್ಯಕರ್ತರ ಅರೋಗ್ಯ ವಿಚಾರಿಸಲಿದ್ದೇನೆ. ಹಿಂದೂ ಕಾರ್ಯಕರ್ತರೊಂದಿಗೆ ಸದಾ ನಿಲ್ಲಲಿದ್ದೇನೆ. ಧರ್ಮಕ್ಕಾಗಿ ಹೋರಾಟ ಮಾಡುವ ಕಾರ್ಯಕರ್ತರು ಯಾವುದೇ ಕ್ಷಣದಲ್ಲೂ ಎದೆಗುಂದಬೇಡಿ ನಿಮ್ಮೊಡನೆ ನಾವಿದ್ದೇವೆ ಎಂದು ಫೇಸ್ಬುಕ್ನಲ್ಲಿ ಯತ್ನಾಳ್ ಬರೆದುಕೊಂಡಿದ್ದಾರೆ.
ಮೇ 13ರಂದು ಹೊರಬಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಹೀನಾಯವಾಗಿ ಸೋತ ಬಳಿಕ ಪುತ್ತೂರು ಬಸ್ ನಿಲ್ದಾಣದ ಬಳಿ ರಾತ್ರೋರಾತ್ರಿ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ಡಿವಿ ಸದಾನಂದ ಗೌಡ ಅವರ ಭಾವಚಿತ್ರ ಇರುವ ಶ್ರದ್ಧಾಂಜಲಿ ಬ್ಯಾನರ್ ಹಾಕಲಾಗಿತ್ತು. ಆ ಬ್ಯಾನರ್ಗೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಬಗ್ಗೆ ಪುತ್ತೂರು ನಗರಸಭಾ ಆಯುಕ್ತ ಮಧು ಮನೋಹರ್ ಹಾಗೂ ಇತರರು ಪೊಲೀಸರಿಗೆ ದೂರು ನೀಡಿದ್ದರು. ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಘಟನೆಗೆ ಸಂಬಂಧಿಸಿದಂತೆ 9 ಜನರನ್ನು ವಶಕ್ಕೆ ಪಡೆದಿದ್ದ ಪೊಲೀಸರು ಅವರ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದವು. ಪುತ್ತೂರು ಡಿವೈಎಸ್ಪಿ ನೇತೃತ್ವದಲ್ಲಿ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡಿದೆ. ಆರೋಪಿಗಳಿಗೆ ರಕ್ತ ಒಸರುವಷ್ಟು ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಆರೋಪಗಳು ಕೇಳಿ ಬಂದಿದ್ದವು. ನಂತರ ಹಿಂದೂ ಸಂಘಟನೆ ಮುಖಂಡ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅರುಣ್ ಕುಮಾರ್ ಪುತ್ತಿಲ ಆರೋಪಿಗಳನ್ನು ಬಿಡಿಸಿಕೊಂಡು ಬಂದಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ