
ಬೆಂಗಳೂರು, ಡಿಸೆಂಬರ್ 11: ಮಾಜಿ ಮುಖ್ಯಮಂತ್ರಿ, ಸರಳ ಸಜ್ಜನಿಕೆಯ ರಾಜಕಾರಣಿ, ಅಜಾತ ಶತ್ರು ಎಸ್.ಎಂ.ಕೃಷ್ಣ (SM Krishna) ವಿಧಿವಶರಾಗಿದ್ದಾರೆ. 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನ ಕೊನೆಗೊಳೆಸಿದ್ದಾರೆ. ಇಡೀ ಕರ್ನಾಟಕವೇ ಕಂಬನಿ ಮಿಡಿದಿದೆ. ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್. ಅಶೋಕ್, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ.
ಶಾಸಕ, ಸಚಿವ, ಸ್ಪೀಕರ್, ಉಪಮುಖ್ಯಮಂತ್ರಿ, ಮುಖ್ಯಮಂತ್ರಿ, ಹೀಗೆ ನಾನಾ ಹುದ್ದೆಗಳಲ್ಲಿ ಸೇವೆ ಸಲ್ಲಿಸುವ ಜೊತೆಗೆ, ಜನರ ಬದುಕಿನ ಸುಧಾರಣೆಗಾಗಿ, ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಅವರು ಅಪಾರವಾಗಿ ಶ್ರಮಿಸಿದ್ದರು. ರಾಜಧಾನಿ ಬೆಂಗಳೂರಿಗೆ ಸಿಲಿಕಾನ್ ವ್ಯಾಲಿ ಹಾಗೂ ಐಟಿ ಕೇಂದ್ರದ ಸ್ಥಾನಮಾನ ನೀಡುವಲ್ಲಿ ಅವರ ಪಾತ್ರ ಗಣನೀಯ. ವಿದೇಶಾಂಗ ಸಚಿವರಾಗಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲೂ ಸೇವೆ ಸಲ್ಲಿಸಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ.
ಎಸ್.ಎಂ.ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರ್ಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಕರ್ನಾಟಕ ರತ್ನʼ (ಮರಣೋತ್ತರ) ನೀಡುವುದು ಸೂಕ್ತ ಎಂಬುದು ನನ್ನ ಅಭಿಪ್ರಾಯ. ಆದ್ದರಿಂದ ತಾವು ಈ ಸಲಹೆಯನ್ನು ಪರಿಗಣಿಸಿ ಶ್ರೀಯುತರಿಗೆ ‘ಕರ್ನಾಟಕ ರತ್ನʼ ನೀಡಿ ಗೌರವ ಸಲ್ಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡುತ್ತಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ: ಕೊನೆಯುಸಿರೆಳೆಯೋ ಮುನ್ನ ಕುಟುಂಬ ವೈದ್ಯರಿಗೆ ಫೋನ್ ಮಾಡಿದ್ದ ಎಸ್ಎಂ ಕೃಷ್ಣ: ಅಚ್ಚರಿಯ ಅಂಶ ಬಹಿರಂಗ
ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ಇಂದು ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗಣ್ಯಾತಿಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:55 pm, Wed, 11 December 24