ಕಲುಷಿತ ನೀರು ಸೇವಿಸಿ ಬಾಲಕ ಸಾವು: ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಣೆ
ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಂ ಜಂಟಿ ಕಾರ್ಯದರ್ಶಿ ಪಿಎ ಗೋಪಾಲ್ ಅವರು ಹಣ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

ರಾಯಚೂರು: ಕಲುಷಿತ ನೀರು (contaminated water) ಸೇವಿಸಿ ಮೃತಪಟ್ಟಿದ್ದ ಬಾಲಕನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಸಿಎಂ ಜಂಟಿ ಕಾರ್ಯದರ್ಶಿ ಪಿಎ ಗೋಪಾಲ್ ಅವರು ಹಣ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ. ಕುಡಿಯುವ ನೀರಿನ ಪೈಪ್ಗೆ ಚರಂಡಿ ನೀರು ಸೇರಿಸಿಕೊಂಡು ಕಲುಷಿತವಾಗಿದ್ದ ನೀರನ್ನು ಸೇವಿಸಿ ಬಾಲಕ ಹನುಮೇಶ್ ಸಾವನ್ನಪ್ಪಿದ್ದ. ಜಿಲ್ಲೆಯ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ಘಟನೆ ನಡೆದಿತ್ತು. ಈ ಬಗ್ಗೆ ಖುದ್ದು ರಾಯಚೂರು ಜಿಲ್ಲಾ ಪಂಚಾಯತ ಸಿಇಓ ಶಶಿಧರ್ ಕುರೇರಗೆ ಕರೆ ಮಾಡಿ, ಸೂಕ್ತ ಕ್ರಮ ಹಾಗೂ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು.
ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಬೇಕು. ಲ್ಯಾಬ್ಗೆ ನೀರಿನ ಸ್ಯಾಂಪಲ್ ಕಳುಹಿಸಿ ತಕ್ಷಣ ವರದಿ ಪಡೆಯಬೇಕು. ವರದಿ ಆಧಾರದಲ್ಲಿ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಚಿಕಿತ್ಸೆಗೆ ಕ್ರಮಕೈಗೊಳ್ಳಿ. ಮತ್ತೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಅಲ್ಲದೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಸಿಇಒಗೆ ಸಿಎಂ ಸೂಚನೆ ನೀಡಿದ್ದರು.
ಇದನ್ನೂ ಓದಿ: ದೇವದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಸಾವು: ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಕಲುಷಿತ ನೀರು ಕುಡಿದು 30 ಜನ ಅಸ್ವಸ್ಥ
ಮೇ.26 ರಂದು ಬೆಳಗ್ಗೆ ಕಲುಷಿತ ನೀರು ಸೇವಿಸಿ ಓರ್ವ ಬಾಲಕ ಸಾವನ್ನಪ್ಪಿದ್ದು, 30 ಜನ ಅಸ್ವಸ್ಥರಾದ ಘಟನೆ ಇದೇ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿತ್ತು. ಅಸ್ವಸ್ಥರಾದವರಿಗೆ ಸಿರವಾರ, ದೇವದುರ್ಗ, ಅರಕೇರಾ ಹಾಗೂ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.
ಕಳೆದ ಕೆಲ ದಿನಗಳಿಂದ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡಿದ್ದರು. ಈ ಘಟನೆಗೆ ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣವೆಂದು ಆರೋಪ ಕೇಳಿಬಂದಿತ್ತು. ಅಲ್ಲದೇ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಆರೋಗ್ಯ ಇಲಾಖೆ ಗ್ರಾಮದಲ್ಲಿ ತಾತ್ಕಾಲಿಕ ಆರೋಗ್ಯ ಕೇಂದ್ರ ಸ್ಥಾಪನೆ ಮಾಡಿತ್ತು.
ಇದನ್ನೂ ಓದಿ: ರಾಯಚೂರಿನ ರೇಕಲಮರಡಿ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು 20ಕ್ಕೂ ಹೆಚ್ಚು ಜನ ಅಸ್ವಸ್ಥ
ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿ ಗ್ರಾಮದಲ್ಲೇ ಬೀಡು ಬಿಟ್ಟಿದ್ದು, ಮಕ್ಕಳು, ವೃದ್ಧರು ಮೇಲೆ ನಿಗಾ ಇರಿಸಿದ್ದರು. ರೋಗದ ಲಕ್ಷಣಗಳಿರುವವರಿಗೆ ಗ್ಲುಕೋಸ್ ಜೊತೆ, ಔಷಧಿ ನೀಡುತ್ತಿದ್ದರು. ಇನ್ನು ಘಟನಾ ಸ್ಥಳಕ್ಕೆ ದೇವದುರ್ಗ ಕ್ಷೇತ್ರದ ಜೆಡಿಸ್ ಶಾಸಕಿ ಕರಿಯಮ್ಮ ನಾಯಕ್ ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದರು. ಇದೇ ವೇಳೆ ಮೃತ ಬಾಲಕ ಹನುಮೇಶ್ ಕುಟುಂಬಸ್ಥರಿಗೆ ಶಾಸಕಿ ಕರಿಯಮ್ಮ ನಾಯಕ್ ಸಾಂತ್ವಾನ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:48 pm, Wed, 31 May 23