ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರ ನೇಮಕಾತಿಗೆ ಸರ್ಕಾರ ಅನುಮತಿ
ಶಿಕ್ಷಕರ ಕೊರತೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿನ ಸರ್ಕಾರಿ ಶಾಲೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಇದು ಶಿಕ್ಷಣ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ ಬಳಿಕ ಕರ್ನಾಟಕ ಸರ್ಕಾರ ಎಚ್ಚೆತ್ತುಕೊಂಡಿದೆ.
ರಾಯಚೂರು, ಅಕ್ಟೋಬರ್ 09: ಕಲ್ಯಾಣ ಕರ್ನಾಟಕ (Kalyan Karnataka) ಭಾಗದ ಸರ್ಕಾರಿ ಶಾಲೆಗಳಲ್ಲಿ ಉದ್ಭವಿಸಿರುವ ಶಿಕ್ಷಕರ (Teachers) ಕೊರತೆ ಬಗ್ಗೆ ಟಿವಿ9 ವರದಿ ಪ್ರಸಾರ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ (Karnataka Government) ಎಚ್ಚೆತ್ತುಕೊಂಡಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಶಿಕ್ಷಕರನ್ನು ನೇಮಕ ಮಾಡಲು ಶಾಲಾ ಶಿಕ್ಷಣ ಇಲಾಖೆಯ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಕಲ್ಯಾಣ ಕರ್ನಾಟಕದ ರಾಯಚೂರು ಜಿಲ್ಲೆಯಲ್ಲಿನ ಶಿಕ್ಷಕರ ಕೊರತೆ ಬಗ್ಗೆ ಟಿವಿ9 ಈ ಹಿಂದೆ ವರದಿ ಪ್ರಸಾರ ಮಾಡಿತ್ತು. ರಾಯಚೂರು ಜಿಲ್ಲೆಯಲ್ಲಿ ಸುಮಾರು 2100ಕ್ಕೂ ಹೆಚ್ಚು ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿವೆ. ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಸುಮಾರು 2.5 ಲಕ್ಷ ಬಡ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಜಿಲ್ಲೆಯಾದ್ಯಂತ ಸುಮಾರು ಆರು ಸಾವಿರಕ್ಕೂ ಹೆಚ್ಚು ಶಿಕ್ಷಕರ ಕೊರತೆ ಇದೆ.
ಈ 2100 ಕ್ಕೂ ಅಧಿಕ ಶಾಲೆಗಳ ಪೈಕಿ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಬರೀ ಓಬ್ಬರೇ ಖಾಯಂ ಶಿಕ್ಷಕರಿದ್ದಾರೆ. ಉಳಿದಂತೆ ಅತಿಥಿ ಶಿಕ್ಷಕರಿದ್ದಾರೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಗುಣ ಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಟಿವಿ9 ವರದಿ ಪ್ರಸಾರ ಮಾಡಿತ್ತು.
ಇದನ್ನೂ ಓದಿ: ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ
ಇದೇ ಅಕ್ಟೋಬರ್ 5 ರಂದು ರಾಯಚೂರು ನಗರದಲ್ಲಿ ನಡೆದಿದ್ದ ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ಕಾರ್ಯಕ್ರಮ ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಲ್ಯಾಣ ಕರ್ನಾಟಕ ಭಾಗದಲ್ಲಿನ ಶಿಕ್ಷಕರ ಕೊರತೆ ಬಗ್ಗೆ ಮಾತನಾಡಿದ್ದರು.
ಈ ವೇಳೆ ಶಿಕ್ಷಣ ತಜ್ಞ ಹಫೀಜುಲ್ಲಾ ಮಾತನಾಡಿ, ಶಿಕ್ಷಕರ ಕೊರತೆ ತೋರಿಸಿ ಸರ್ಕಾರಿ ಶಾಲೆ ಮುಚ್ಚುವ ದೊಡ್ಡ ಹುನ್ನಾರ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ, ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ 5,267 ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ಅನುಮತಿ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:07 am, Wed, 9 October 24