ರಾಯಚೂರಿನಲ್ಲಿ ಮತ್ತೋರ್ವ ಬಾಣಂತಿಯ ಸಾವು: ಹೆಚ್ಚಿದ ಆತಂಕ
ರಾಯಚೂರು ಜಿಲ್ಲೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಮಟಮಾರಿ ಆರೋಗ್ಯ ಕೇಂದ್ರ ಸಿಬ್ಬಂದಿ ನಿರ್ಲಕ್ಷ್ಯದಿಂದ ಮೃತಪಟ್ಟಿದ್ದಾರೆ ಎಂದು ಬಾಣಂತಿ ಕುಟುಂಬಸ್ಥರು ಆರೋಪಿಸಿದ್ದಾರೆ. ಮೂರು ತಿಂಗಳಲ್ಲಿ 10 ಬಾಣಂತಿಯರು ಸಾವನ್ನಪ್ಪಿರುವುದು ಕರ್ನಾಟಕ ಸರ್ಕಾರದ ನಿರ್ಲಕ್ಷ್ಯವನ್ನು ತೋರಿಸುತ್ತದೆ. ಈ ಘಟನೆಗಳು ತೀವ್ರ ಆರೋಗ್ಯ ಸೌಲಭ್ಯಗಳ ಅವಶ್ಯಕತೆಯನ್ನು ಎತ್ತಿ ತೋರಿಸುತ್ತವೆ.
ರಾಯಚೂರು, ಡಿಸೆಂಬರ್ 15: ಬಳ್ಳಾರಿ (Ballari), ರಾಯಚೂರು (Raichur), ಬೆಳಗಾವಿ (Belagavi) ಮತ್ತು ಹುಬ್ಬಳ್ಳಿಯಲ್ಲಿನ (Hubballi) ಬಾಣಂತಿಯರ ಸಾವಿನ ಸಂಖ್ಯೆ ಕರ್ನಾಟಕ ಸರ್ಕಾರ ತಲೆ ತಗ್ಗಿಸುವಂತೆ ಮಾಡಿದೆ. ಈ ಎಲ್ಲ ಪ್ರಕರಣಗಳ ತನಿಖೆ ನಡೆಯುತ್ತಿದೆ. ಇದರ ಮಧ್ಯೆಯೇ ರಾಯಚೂರು ಜಿಲ್ಲೆಯಲ್ಲಿ ಮತ್ತೋರ್ವ ಬಾಣಂತಿ ಮೃತಪಟ್ಟಿದ್ದಾರೆ. ಗಾರಲದಿನ್ನಿ ಗ್ರಾಮದ ಈಶ್ವರಿ (32) ಮೃತ ಬಾಣಂತಿ. ಗರ್ಭಿಣಿ ಈಶ್ವರಿಯವರನ್ನು ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಡಿಸೆಂಬರ್ 8ರಂದು ಈಶ್ವರಿ ಅವರಿಗೆ ಹೆರಿಗೆಯಾಗಿತ್ತು.
ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆಗೆ ಬಂದ ಬಳಿಕ ರಕ್ತಸ್ರಾವ, ಜ್ವರದಿಂದ ಬಳಲಿದ್ದರು. ಕೂಡಲೆ ಅವರನ್ನು ರಾಯಚೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಾಣಂತಿ ಈಶ್ವರಿ ಸಾವಿಗೆ ಮಟಮಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಸರಿಯಾಗಿ ಚಿಕಿತ್ಸೆ ನೀಡದೆ ಹಾಗೂ ಸ್ಪಂದಿಸದೆ ಇರುವುದೇ ಕಾರಣ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ ಒಟ್ಟು 10 ಮಂದಿ ಬಾಣಂತಿಯರು ಮೃತಪಟ್ಟಿದ್ದಾರೆ.
1 ತಿಂಗಳಲ್ಲಿ ನಾಲ್ವರು ಬಾಣಂತಿಯರ ಸಾವು
ಸಿಂಧನೂರು ತಾಲೂಕು ಆಸ್ಪತ್ರೆಗೆ ಅಕ್ಟೋಬರ್ ತಿಂಗಳಲ್ಲಿ ದಾಖಲಾಗಿದ್ದ ನಾಲ್ವರು ಬಾಣಂತಿಯರು ಸಿಸೇರಿಯನ್ ಬಳಿಕ ಮೃತಪಟ್ಟಿದ್ದರು. ರಾಯಚೂರು ಜಿಲ್ಲೆಯವರೇಯಾದ ಮೌಸಂಬಿ ಮಂಡಲ್, ಚನ್ನಮ್ಮ, ಚಂದ್ರಕಲಾ, ರೇಣುಕಮ್ಮ ಮೃತ ಬಾಣಂತಿಯರು. ಈ ನಾಲ್ವರು ಬಾಣಂತಿಯರಿಗೂ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗಿದ್ದ IVದ್ರಾವಣವೇ ನೀಡಲಾಗಿತ್ತು ಎಂದು ಹೇಳಲಾಗಿತ್ತು.
ಇದನ್ನೂ ಓದಿ: ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ಫೋಟಕ ಹೇಳಿಕೆ
ತನಿಖೆ ನಡೆಸುತ್ತಿರುವ ಸರ್ಕಾರ
ಬಳ್ಳಾರಿ, ರಾಯಚೂರು, ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿನ ಬಾಣಂತಿಯರ ಸಾವಿನ ಸಂಖ್ಯೆ ಬೆಳಕಿಗೆ ಬರುತ್ತಿದ್ದಂತೆ ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ. ಕಳೆದ ಮೂರು ತಿಂಗಳಲ್ಲಿ ಕರ್ನಾಟಕದಲ್ಲಿ ಎಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ? ಇವರ ಸಾವಿಗೆ ಕಾರಣವೇನು? ಎಂಬುವುದರ ಕುರಿತು ಸಮಗ್ರವಾಗಿ ತನಿಖೆ ನಡೆಸುತ್ತಿದ್ದು, ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿದೆ.
ಬಳ್ಳಾರಿಯಲ್ಲಿ ಐವರ ಬಾಣಂತಿಯರ ಸಾವು ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗಿತ್ತು. ಐವರು ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ತಿಳಿದುಬಂದಿದ್ದು, ಸರ್ಕಾರದ ನಿದ್ದೆಗೆಡಿಸಿದೆ. ಇನ್ನು, ಬಾಣಂತಿಯರ ಸಾವಿಗೆ ಕರ್ನಾಟಕ ಸರ್ಕಾರ ನೇರ ಹೊಣೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿವೆ. IV ರಿಂಗರ್ ಲ್ಯಾಕ್ಟೇಟ್ ದ್ರಾವಣ ತಯಾರಿಸಿದ ಪಶ್ಚಿಮ ಬಂಗಾಳದ ಕಂಪನಿ ವಿರುದ್ಧ ಕರ್ನಾಟಕ ಸರ್ಕಾರ ಕಾನೂನು ಹೋರಾಟ ನಡೆಸುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:43 pm, Sun, 15 December 24