Raichur: ಗೃಹ ಲಕ್ಷ್ಮೀ ಯೋಜನೆ ಅರ್ಜಿಗೆ ಜನರಿಂದ ಹಣ ವಸೂಲಿ, 3 ಸೈಬರ್ ಸೆಂಟರ್ಗಳ ವಿರುದ್ಧ ಎಫ್ಐಆರ್ ದಾಖಲು
ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಜನರಿಂದ ಹಣ ವಸೂಲಿ ಮಾಡುತ್ತಿದ್ದ ಸೈಬರ್ ಸೆಂಟರ್ಗಳ ಮೇಲೆ ಮಾನ್ವಿ ತಹಶೀಲ್ದಾರ್ ದಾಳಿ ಮಾಡಿದ್ದಾರೆ.
ರಾಯಚೂರು, (ಜುಲೈ 25): ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಐದು ಗ್ಯಾರಂಟಿಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮಿ’ ಯೋಜನೆ (gruha lakshmi scheme) ಜಾರಿಯಾಗಿದೆ. ಮನೆ ಯಜಮಾನಿಗೆ ಮಾಸಿಕ 2000 ನೀಡುವ ಈ ‘ಗೃಹಲಕ್ಷ್ಮಿ’ ಯೋಜನೆಗೆ ಆನ್ಲೈನ್ ಮೂಲಕ ಈಗಾಗಲೇ ನೋಂದಣಿ ಪ್ರತಿಕ್ರಿಯೆ ಶುರುವಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಹಣ ಪಡೆಯುವಂತಿಲ್ಲ ಎಂದು ಸರ್ಕಾರವೇ ಹೇಳಿದೆ. ಆದರೂ ಖಾಸಗಿ ಸೈಬರ್ ಸೆಂಟರ್ಗಳು(cyber centre) ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿವೆ. ಅದರಂತೆ ರಾಯಚೂರಿನಲ್ಲಿ ಹಣ ವಸೂಲಿ ಮಾಡುತ್ತಿದ್ದ ಮೂರು ಸೈಬರ್ ಕೇಂದ್ರಗಳ ವಿರುದ್ಧ ದಾಖಲಾಗಿದೆ.
ಇದನ್ನೂ ಓದಿ: Gruha Lakshmi: ಅರ್ಜಿ ಸಲ್ಲಿಸಲು ಹಣ ಪಡೆದ ಗ್ರಾಮ ಒನ್ ಸಿಬ್ಬಂದಿ ಲಾಗಿನ್ ಐಡಿ ರದ್ದು
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಗ್ರಾಹಕರಿಂದ 100-200 ರೂ. ವಸೂಲಿ ಮಾಡುತ್ತಿದ್ದ ರಾಯಚೂರು ಜಿಲ್ಲೆ ಮಾನ್ವಿಯ 3 ಸೈಬರ್ ಕೇಂದ್ರಗಳ ವಿರುದ್ಧ ದೂರು ದಾಖಲಾಗಿದೆ. ಹಣ ವಸೂಲಿ ಮಾಡುತ್ತಿದ್ದ ಮಾಹಿತಿ ಮೇರೆಗೆ ಮಾನ್ವಿ ತಹಶೀಲ್ದಾರ್ ಚಂದ್ರಕಾಂತ್ ಅವರು ಸೈಬರ್ ಸೆಂಟರ್ಗಳ ಮೇಲೆ ದಾಳಿ ಮಾಡಿದ್ದು, ಈ ವೇಳೆ ಅಧಿಕೃತ ಸರ್ಕಾರಿ ಐಡಿಯನ್ನ ಅಕ್ರಮವಾಗಿ ಪಡೆದು ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಅರ್ಜಿ ಸಲ್ಲಿಕೆ ಮಾಡುತ್ತಿರುವುದು ಪತ್ತೆಯಾಗಿದೆ.
ಎಕ್ಸೆಲ್ ಕಂಪ್ಯೂಟರ್, ಲಕ್ಷ್ಮೀ ಕಂಪ್ಯೂಟರ್, ಸೂರ್ಯ ಕಂಪ್ಯೂಟರ್ ಸೆಂಟರ್ನಲ್ಲಿ ಫಲಾನುಭವಿಗಳಿಂದ ಹಣ ವಸೂಲ್ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಚಂದ್ರಕಾಂತ್ ಅವರು ನಗರದ ಮೂರು ಸೈಬರ್ ಸೆಂಟರ್ ವಿರುದ್ಧ ಮಾನ್ವಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇವರ ದೂರಿನ ಮೇರೆಗೆ ಪೊಲೀಸರು, ಐಟಿ ಆಕ್ಟ್ ಹಾಗೂ ಐಪಿಸಿ ಸೆಕ್ಷನ್ 420 ವಂಚನೆ ಆರೋಪದಡಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗಂಭೀರವಾಗಿ ಪರಿಗಣಿಸಿದ್ದು, ಹಣ ಪಡೆದುಕೊಂಡರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಜೊತೆ ಐಡಿ ಕ್ಯಾನ್ಸಲ್ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಆದರೂ ಸಹ ಖಾಸಗಿ ಸೈಬರ್ ಸೆಂಟರ್ಗಳು ಅಕ್ರಮವಾಗಿ ಐಡಿ ಪಡೆದುಕೊಂಡು ಸಾರ್ವಜನಿಕರಿಂದ ಹಣ ವಸೂಲಿಗೆ ಇಳಿದಿವೆ
ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
Published On - 10:27 am, Tue, 25 July 23