
ರಾಯಚೂರು, (ಸೆಪ್ಟೆಂಬರ್ 01): ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಮಂಡ್ಯ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಏಕಾಏಕಿ ಕುಸಿದು ಬಿದ್ದು ಇಬ್ಬರು ಸಾವನ್ನಪ್ಪಿದ್ದರು. ಅದೇ ರೀತಿ ಘಟನೆ ರಾಯಚೂರಿನಲ್ಲೂ ಸಹ ಸಂಭವಿಸಿದೆ. ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಡಿಜೆಗೆ ಡ್ಯಾನ್ಸ್ ಮಾಡುತ್ತಿರುವಾಗಲೇ ರಾಯಚೂರು ನಗರದ ಮಂಗಳವಾರ ಪೇಟೆಯ ಯುವಕ ಅಭಿಷೇಕ್ (24) ಕುಸಿದುಬಿದ್ದು ಮೃತಪಟ್ಟಿದ್ದಾನೆ. ನಿನ್ನೆ (ಆಗಸ್ಟ್ 31_ ರಾತ್ರಿಯಿಡಿ ಡ್ಯಾನ್ಸ್ ಮಾಡಿದ್ದ ಅಭಿಷೇಕ್ ಇಂದು (ಸೆಪ್ಟೆಂಬರ್ 1) ಬೆಳಗಿನ ಜಾವ ಗಣೇಶ ವಿಸರ್ಜನೆ ಮಾರ್ಗ ಮಧ್ಯೆ ರಾಯಚೂರು ನಗರದ ತೀನ್ ಖಂದಿಲ್ ಸರ್ಕಲ್ ಬಳಿ ಕುಸಿದು ಬಿದ್ದಿದ್ದು, ಕೂಡಲೇ ಅಭಿಷೇಕ್ ನನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಯುವಕ ಅಭಿಷೇಕ್ ಕೊನೆಯುಸಿರೆಳೆದಿದ್ದಾನೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜೊತ್ತನಪುರ ಗ್ರಾಮದಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮಂಜುನಾಥ್ ಮೃತ ವ್ಯಕ್ತಿ. ಕೆ.ಆರ್.ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಘಟನೆ ನಡೆದಿದೆ.
ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಯುವಕರ ಜೊತೆ ಡಿಜೆ ಹಾಡಿಗೆ ಮಂಜುನಾಥ್ ಭರ್ಜರಿ ಹೆಜ್ಜೆ ಹಾಕುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ್ ಅವರ ಕೊನೆಯ ಕ್ಷಣದ ದೃಶ್ಯಗಳು ಸ್ಥಳೀಯರ ಮೊಬೈಲ್ನಲ್ಲಿ ಸೆರೆ ಆಗಿದೆ.
ಇದೇ ರೀತಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಕೂಡ ನಿನ್ನೆ ರಾತ್ರಿ ಘಟನೆ ನಡೆದಿದೆ. ಗಣೇಶ ವಿಸರ್ಜನೆ ವೇಳೆ ನಾಗವಲ್ಲಿ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ವ್ಯಕ್ತಿಗೆ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ (40) ಮೃತ ವ್ಯಕ್ತಿ. ಗಣೇಶ ವಿಸರ್ಜನೆ ಹಿನ್ನಲೆ ಗ್ರಾಮಸ್ಥರು ಡ್ಯಾನ್ಸ್ ಮಾಡುತ್ತಿದ್ದರು. ಲಕ್ಷ್ಮಿಪತಿ ಕೂಡ ಡ್ಯಾನ್ಸ್ ಮಾಡುತ್ತಿದ್ದು, ಹಠಾತ್ ಹೃದಯಾಘಾತ ಸಂಭವಿಸಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಲಕ್ಷ್ಮಿಪತಿ ಗ್ರಾಮದಲ್ಲಿ ಕೃಷಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.