ರಾಯಚೂರು ಕೃಷಿ ವಿವಿಯಲ್ಲಿ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ರಾಜ್ಯ ಸರ್ಕಾರ ಆದೇಶ
ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ ಎನ್ನಲಾದ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮದ ಕುರಿತು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದೆ. ಟಿವಿ9 ವರದಿ ಬಳಿಕ ಎಚ್ಚೆತ್ತ ಸರ್ಕಾರ, ಕೃಷಿ ಇಲಾಖೆ ಆಯುಕ್ತರ ನೇತೃತ್ವದಲ್ಲಿ 30 ದಿನಗಳೊಳಗೆ ವರದಿ ಸಲ್ಲಿಸಲು ಸೂಚಿಸಿದೆ. ಲಕ್ಷಾಂತರ ರೂಪಾಯಿ ಹಣ ಪಡೆದು ಅಕ್ರಮ ನೇಮಕಾತಿ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ರಾಯಚೂರು, ನ.27: ರಾಯಚೂರು ಕೃಷಿ ವಿಶ್ವವಿದ್ಯಾಲಯದಲ್ಲಿ 75 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪದ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಟಿವಿ9 ವರದಿಯ ಬಳಿಕ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಕೃಷಿ ಇಲಾಖೆ ಆಯುಕ್ತರ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ಆದೇಶ ಹೊರಡಿಸಿದ್ದು, 30 ದಿನಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಡೆಡ್‌ಲೈನ್ ನೀಡಿದೆ.
ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ನೇಮಕಾತಿ ಮಾಡಲಾಗಿದೆ ಹಾಗೂ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದಾಗಲೇ ನೇಮಕಾತಿ ಆದೇಶ ಹೊರಡಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿ ಎಸ್. ಪೂವಿತಾ ಅವರ ನೇತೃತ್ವದಲ್ಲಿ ನಡೆದ ಪ್ರಾಥಮಿಕ ತನಿಖೆಯ ವಿಚಾರವನ್ನು ಸರ್ಕಾರ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಪ್ರಾಥಮಿಕ ತನಿಖೆ ವೇಳೆ ಕೃಷಿ ವಿವಿ ಆಡಳಿತ ಮಂಡಳಿಯು ಮೂಲ ಕಡತಗಳನ್ನು ನೀಡದೆ ತನಿಖೆಗೆ ಸರಿಯಾಗಿ ಸ್ಪಂದಿಸಿಲ್ಲ ಎಂಬ ಅಂಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದೀಗ ಕೃಷಿ ಇಲಾಖೆ ಆಯುಕ್ತರ ನೇತೃತ್ವದ ತನಿಖಾ ತಂಡದಲ್ಲಿ ರಾಯಚೂರು ಜಿಲ್ಲಾಧಿಕಾರಿ ಪೂವಿತಾ ಎಸ್. ಅವರಿಗೂ ಸ್ಥಾನ ನೀಡಲಾಗಿದೆ.
ಈ ಅಕ್ರಮದ ವಿರುದ್ಧ ಹೋರಾಟ ನಡೆಸಿದ್ದ ಜೆಡಿಎಸ್ ಜಿಲ್ಲಾಧ್ಯಕ್ಷ ವಿರೂಪಾಕ್ಷ ಸರ್ಕಾರದ ಆದೇಶಕ್ಕೆ ಪ್ರತಿಕ್ರಿಯಿಸಿದ್ದು, “ಇದು ಕೆಪಿಎಸ್‌ಸಿ ಮಾದರಿಯ ಹಗರಣವಾಗಿದೆ. ಬೆಂಗಳೂರಿನ ಜಿಕೆವಿಕೆಯಲ್ಲಿ ಪರೀಕ್ಷೆ ಬರೆಸಲಾಗಿದ್ದು, ಓಎಂಆರ್ ಶೀಟ್ ಮತ್ತು ಆನ್ಸರ್ ಶೀಟ್‌ಗಳನ್ನು ಇವರೇ ಸಿದ್ಧಪಡಿಸಿದ್ದಾರೆ. ನೇಮಕಾತಿಗಾಗಿ 40 ರಿಂದ 50 ಲಕ್ಷ ರೂಪಾಯಿ ಹಣ ಕೊಟ್ಟಿದ್ದೇವೆ ಎಂದು ಸ್ವತಃ ಅಭ್ಯರ್ಥಿಗಳೇ ನನ್ನ ಬಳಿ ಹೇಳಿಕೊಂಡಿದ್ದಾರೆ” ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.
ಇದನ್ನೂ ಓದಿ: ಖಾಸಗಿ ಸೋಲಾರ್ ಕಂಪನಿಗೆ ಜಮೀನು ನೀಡದ 8 ರೈತರ ವಿರುದ್ಧ ಎಫ್‌ಐಆರ್; ಯಾರು ನೆರವಿಗೆ ಬಂದಿಲ್ಲ ಎಂದು ಕಣ್ಣೀರು ಹಾಕಿದ ರೈತ ಕುಟುಂಬ
“ಜಿಲ್ಲಾಧಿಕಾರಿಗಳಿಗೆ ನಾವು ಈ ಬಗ್ಗೆ ದೂರು ನೀಡಿದ್ದೆವು. ಈಗ ಸರ್ಕಾರ ತನಿಖೆಗೆ ಆದೇಶಿಸಿದೆ. ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರನ್ನು ಜೈಲಿಗೆ ಕಳುಹಿಸಬೇಕು. ಒಂದು ವೇಳೆ ತನಿಖಾ ತಂಡಕ್ಕೆ ವಿವಿಯಿಂದ ದಾಖಲೆಗಳು ಸಿಗದೇ ಇದ್ದರೆ ನಮ್ಮನ್ನು ಪಾರ್ಟಿ ಮಾಡಿ, ನಾವೇ ಎಲ್ಲಾ ದಾಖಲೆಗಳನ್ನು ಒದಗಿಸುತ್ತೇವೆ. ಒಂದು ವೇಳೆ ತನಿಖೆಯಲ್ಲಿ ಸತ್ಯಾಸತ್ಯತೆ ಬೆಳಕಿಗೆ ಬಾರದೇ ಇದ್ದರೆ ತನಿಖಾ ತಂಡದ ವಿರುದ್ಧವೂ ದೂರು ನೀಡುತ್ತೇವೆ” ಎಂದು ವಿರೂಪಾಕ್ಷ ಎಚ್ಚರಿಸಿದ್ದಾರೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




