ಕರ್ನಾಟಕದಲ್ಲಿ ಅ.29ರವರೆಗೂ ಮಳೆ! ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್
ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಅಕ್ಟೋಬರ್ 29ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲೂ ಸಾಧಾರಣ ಮಳೆಯ ನಿರೀಕ್ಷೆಯಿದೆ. ಮುಂದಿನ ಕೆಲವು ದಿನಗಳಲ್ಲಿ ವಿವಿಧ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತಷ್ಟು ಚುರುಕು ಪಡೆದಿದೆ. ಹೀಗಾಗಿ ರಾಜ್ಯದ ವಿವಿಧ ಕಡೆಗಳಲ್ಲಿ ಅಕ್ಟೋಬರ್ 29ರವರೆಗೆ ಮಳೆ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇನ್ನೂ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ: ಯಲ್ಲೋ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಹಿಂಗಾರು ಮುಂಗಾರು ಮಳೆ ಮುಂದುವರಿಯಲಿದೆ. ಇತ್ತ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಮಳೆಯಾಗುತ್ತಿದ್ದು, ಇನ್ನೂ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಭಾಗದಲ್ಲಿ ಸಾಧಾರಣ ಮಳೆ ಸಾಧ್ಯತೆ
ಕರಾವಳಿ ಕರ್ನಾಟಕ ಭಾಗದಲ್ಲಿ ಅಕ್ಟೋಬರ್ 24ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಗುಡುಗು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣ ಹವಾಮಾನವಿರುವ ಸಾಧ್ಯತೆಯಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಇನ್ನೂ 2 ದಿನ ಮಳೆ: ಬೆಂಗಳೂರು, ಕೋಲಾರಕ್ಕೆ ಯೆಲ್ಲೋ ಅಲರ್ಟ್
ಇನ್ನು ದಕ್ಷಿಣ ಒಳಭಾಗದಲ್ಲಿ ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ವಿಜಯನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 25ರಂದು ಮಳೆ ಮುನ್ಸೂಚನೆ
ಅಕ್ಟೋಬರ್ 25ರಂದು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಕರ್ನಾಟಕ ಹಾಗೂ ದಕ್ಷಿಣ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಅಕ್ಟೋಬರ್ 26ರಂದು ಮಳೆ ಮುನ್ಸೂಚನೆ
ಅಕ್ಟೋಬರ್ 26ರಂದು ಕೂಡ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.
ಇದನ್ನೂ ಓದಿ: ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ: ರಿಕ್ಟರ್ ಮಾಪಕದಲ್ಲಿ 3.0ರಷ್ಟು ತೀವ್ರತೆ ದಾಖಲು
ಇನ್ನು ಅಕ್ಟೋಬರ್ 27, 28 ಮತ್ತು 29 ರಂದು ಕರಾವಳಿ ಭಾಗದಲ್ಲಿ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಈ ದಿನ ಒಣ ಹವೆ ಇರಲಿದೆ. ಜೊತೆಗೆ ದಕ್ಷಿಣ ಒಳನಾಡಿನ ಭಾಗದಲ್ಲಿ ಒಂದೆರೆಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
