AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಬಗ್ಗೆ ಟೀಕಿಸಿದ್ದ ಆರ್​ ಅಶೋಕ್​ಗೆ ಚರ್ಚೆಗೆ ಆಹ್ವಾನಿಸಿದ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆ ವಿಚಾರವಾಗಿ ಟೀಕೆ ಮಾಡಿದ ಆರ್​ ಅಶೋಕ್​ ವಿರುದ್ಧ ಇದೀಗ ಟ್ವೀಟ್ ಮೂಲಕ ಕಿಡಿಕಾರಿರುವ ಸಚಿವ ರಾಮಲಿಂಗಾರೆಡ್ಡಿ, ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ವಾಗ್ದಾಳಿ ಮಾಡಿದ್ದಾರೆ.

ಶಕ್ತಿ ಯೋಜನೆ ಬಗ್ಗೆ ಟೀಕಿಸಿದ್ದ ಆರ್​ ಅಶೋಕ್​ಗೆ ಚರ್ಚೆಗೆ ಆಹ್ವಾನಿಸಿದ ರಾಮಲಿಂಗಾರೆಡ್ಡಿ
ಶಕ್ತಿ ಯೋಜನೆ ಬಗ್ಗೆ ಟೀಕಿಸಿದ್ದ ಆರ್​ ಅಶೋಕ್​ಗೆ ಚರ್ಚೆಗೆ ಆಹ್ವಾನಿಸಿದ ರಾಮಲಿಂಗಾರೆಡ್ಡಿ
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 02, 2024 | 7:09 PM

Share

ಬೆಂಗಳೂರು, ನವೆಂಬರ್​ 02: ತಮಗೆ ಹಾಗೂ ತಮ್ಮ ಪಕ್ಷದವರಿಗೆ ಟ್ಟೀಟ್ ಮಾಡುವುದನ್ನು ಬಿಟ್ಟರೆ ಬೇರೇನೂ ಗೊತ್ತಿಲ್ಲ ಎಂಬುದನ್ನು ಜಗಜಾಹ್ಹೀರು ಮಾಡಿದ್ದೀರಿ ಎಂದು ವಿಪಕ್ಷ ನಾಯಕ ಆರ್​ ಅಶೋಕ್​ ವಿರುದ್ಧ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕಿಡಿಕಾರಿದ್ದಾರೆ. ಸಾರಿಗೆ ಸಂಸ್ಥೆಗಳಲ್ಲಿ ಕಳೆದ‌ 5 ವರ್ಷದ ತಮ್ಮ ಅಧಿಕಾರಾವಧಿಯಲ್ಲಿ ಯಾವ ಯಾವ ಸಾಧನೆಗಳನ್ನು ಮಾಡಿದ್ದೀರ ಎಂಬ ಪಟ್ಟಿ ಕೊಟ್ಟರೆ ನಾವು ನಿಮ್ಮೊಡನೆ ನೇರಾನೇರ ಚರ್ಚಿಸಲು ಬಯಸುತ್ತೇವೆ‌ ಎಂದಿದ್ದಾರೆ.

ಆರ್​. ಅಶೋಕ್​ಗೆ ನೇರಾನೇರ ಚರ್ಚೆಗೆ ಆಹ್ವಾನ ನೀಡಿದ ರಾಮಲಿಂಗಾರೆಡ್ಡಿ

ಶಕ್ತಿ ಯೋಜನೆ ವಿಚಾರವಾಗಿ ಟೀಕೆ ಮಾಡಿದ ಆರ್​ ಅಶೋಕ್​ ವಿರುದ್ಧ ಇದೀಗ ಟ್ವೀಟ್ ಮೂಲಕ ಕಿಡಿಕಾರಿರುವ ಸಚಿವ ರಾಮಲಿಂಗಾರೆಡ್ಡಿ, ಶಕ್ತಿ ಯೋಜನೆಯು ಅಕ್ಷರಶಃ ಸಾರಿಗೆ ನಿಗಮಗಳಿಗೆ ಶಕ್ತಿಯನ್ನು ತುಂಬಿದೆ ಎಂಬುದರಲ್ಲಿ ಎಳ್ಳಷ್ಟೂ ಸಂಶಯವಿಲ್ಲ ಏಕೆಂದರೆ ಅಂಕಿಅಂಶಗಳು ಇದನ್ನು ಸಾಬೀತುಪಡಿಸುತ್ತವೆ. ನಾವು ನಿಮ್ಮಗಳ ರೀತಿ ಗಾಳಿಯಲ್ಲಿ ಗುಂಡು ಹಾರಿಸೊಲ್ಲ, ಅಂಕಿಅಂಶಗಳೇ ನಮ್ಮ‌ ಅಭಿವೃದ್ಧಿಗೆ ಹಾಗೂ ಸಾಧನೆಗೆ ಮಾನದಂಡ ಎಂದಿದ್ದಾರೆ.

ಇದನ್ನೂ ಓದಿ: ಯಾವುದೇ ಕಾರಣಕ್ಕೂ ಶಕ್ತಿ ಯೋಜನೆ ನಿಲ್ಲಿಸಲ್ಲ: ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಸಾರಿಗೆ ಸಂಸ್ಥೆಗಳನ್ನು ಅಧೋಗತಿ ತಂದು ನಿಲ್ಲಿಸಿರುವುದು ತಮ್ಮ ಅಧಿಕಾರಾವಧಿಯಲ್ಲಿ ಎಂಬ ಕಟುವಾದ ಸತ್ಯ ನಿಮಗೆ‌ ತಿಳಿದಿದ್ದರೂ ಸಹ ಜಾಣ ಕುರುಡು ತೋರುವ ನಿಮ್ಮ ಬಗ್ಗೆ ನನಗೆ ಕನಿಕರವಿದೆ. ನಮ್ಮ ಸರ್ಕಾರದ‌ ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗಳ ಆದಾಯದಲ್ಲಿ‌ ಗಣನೀಯ ವೃದ್ಧಿಯಾದರೂ ಸಾರಿಗೆ ಸಂಸ್ಥೆಗಳಿಗೆ ಶಕ್ತಿ ತುಂಬಲು ಸಾಧ್ಯವಾಗಿಲ್ಲದಿರುವುದು ತಮ್ಮ ಸರ್ಕಾರದ ಕೊಡುಗೆ ಎಂದು ಹೇಳಿದ್ದಾರೆ.

ಸಾರಿಗೆ ಸಂಸ್ಥೆಗಳನ್ನು 5900 ಕೋಟಿ ರೂ. ನಷ್ಟದಲ್ಲಿಟ್ಟು ಬಿಜೆಪಿ

ಶಕ್ತಿ ಯೋಜನೆಯಿಂದ ದಿನನಿತ್ಯ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ 84 ಲಕ್ಷದಿಂದ 1.08 ಕೋಟಿಗೆ ಏರಿಕೆ ಆಗಿದೆ. ಆದಾಯದಲ್ಲಿ ಗಣನೀಯ ವೃದ್ಧಿ ಆಗಿದೆ. ನಾನು ಈಗಾಗಲೇ ಹಲವು ಬಾರಿ ತಿಳಿಸಿದ್ದೇನೆ, ಆದಾಯವೇ ಬೇರೆ ಲಾಭವೇ ಬೇರೆ. ತಮ್ಮ ಬಿ.ಜೆ.ಪಿ ಪಕ್ಷದ ಆಡಳಿತದ ಐದು ವರ್ಷಗಳಲ್ಲಿ ಬಿಎಸ್​ ಯಡಿಯೂರಪ್ಪ‌ ಹಾಗೂ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ, ಸಾರಿಗೆ ಸಂಸ್ಥೆಗಳನ್ನು ರೂ.5900 ಕೋಟಿ ರೂ. ನಷ್ಟದಲ್ಲಿಟ್ಟು ಹೋಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಳೆದ 5 ವರ್ಷಗಳಲ್ಲಿ ಬಿಎಂಟಿಸಿ‌ ಹೊರತುಪಡಿಸಿ ಬೇರೆ ಯಾವುದೇ‌ ಸಾರಿಗೆ ನಿಗಮಗಳಿಗೆ ಬಸ್‌ಗಳ ಸೇರ್ಪಡೆಯೇ ಮಾಡದೆ, ಡಕೋಟ ಬಸ್ಸುಗಳನ್ನು ಕಾರ್ಯಾಚರಣೆ‌ ಮಾಡಲು ಬಿಟ್ಟು ಹೋಗಿದ್ದೀರಾ. ನಮ್ಮ ಸರ್ಕಾರ 6200 ಬಸ್ಸುಗಳ ಸೇರ್ಪಡೆಗೆ ಅನುಮೋದನೆ ನೀಡಿದ್ದು, ಕಳೆದೊಂದು ವರ್ಷದಲ್ಲಿಯೇ 3400 ಹೊಸ ಬಸ್ಸುಗಳ ಸೇರ್ಪಡೆಯಾಗಿದೆ. ಡಕೋಟಾ ಬಸ್ಸುಗಳನ್ನು‌ ಪುನಶ್ಚೇತನ‌ ಮಾಡುವ ಕಾರ್ಯವನ್ನು ಸಹ ಕೈಗೆತ್ತಿಕೊಂಡು 1300 ಬಸ್ಸುಗಳ ಪುನಶ್ಚೇತನ ‌ಕಾರ್ಯ‌ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಬಿಜೆಪಿ ಅವಧಿಯಲ್ಲಿ 13888 ಹುದ್ದೆಗಳು ಖಾಲಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ‌ ಹಾಗೂ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿದ್ದಾಗ ಕಳೆದ 5 ವರ್ಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 13888 ಹುದ್ದೆಗಳು ಖಾಲಿ ಇದ್ದರೂ (ನಿವೃತ್ತಿ ಇನ್ನಿತರೆ ಕಾರಣಗಳಿಂದ) ಒಂದೇ ಒಂದು‌ ನೇಮಕಾತಿ ಮಾಡಿಲ್ಲ. ನಮ್ಮ ಸರ್ಕಾರ ಬಂದ ಕೂಡಲೇ 9000 ಹುದ್ದೆಗಳ ನೇಮಕಾತಿಗೆ ಅನುಮೋದನೆ ನೀಡಿದ್ದು, ಈಗಾಗಲೇ 5800 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳು ವಿವಿಧ ಹಂತದಲ್ಲಿವೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗಳಿಗೆ ತಿಂಗಳ ವೇತನ ಪೂರ್ಣ ಪಾವತಿಯಾಗದೆ, ಅರ್ಧವೇತನ, ಕೆಲವೊಮ್ಮೆ ಆ ವೇತನವೂ ತಿಂಗಳ ಕೊನೆಯವರೆಗೂ, ಒಮ್ಮೊಮ್ಮೆ ಮುಂದಿನ ತಿಂಗಳವರೆಗೂ ಪಾವತಿಯಾಗುತ್ತಿತ್ತು. ಈ ಬಗ್ಗೆ ತಮಗೆ ಮಾಹಿತಿ ಇಲ್ಲವೇ? ನಮ್ಮ ಸರ್ಕಾರ ಬಂದ ಮೇಲೆ ನಿಗದಿತ ದಿನಾಂಕದಂದು ನೌಕರರಿಗೆ ವೇತನ ಪಾವತಿಯಾಗುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಖರ್ಗೆ ಖಡಕ್​ ಮಾತಿನ ನಂತರ ಶಕ್ತಿ ಯೋಜನೆ ಬಗ್ಗೆ ಡಿಕೆಶಿ ವರಸೆ ಬದಲು

ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಕಾರ್ಮಿಕ‌ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಕಳೆದ ಏಳೆಂಟು ವರ್ಷಗಳಿಂದ ಬಾಕಿ ಉಳಿದಿದ್ದ 1000ಕ್ಕೂ ಅಧಿಕ ಮೃತ ಅವಲಂಬಿತ‌ ಕುಟುಂಬಗಳಿಗೆ ಅನುಕಂಪ ಆಧಾರದಲ್ಲಿ ಹುದ್ದೆ ನೀಡಲಾಗಿದೆ ಕಳೆದ‌ 5 ವರ್ಷದಲ್ಲಿ ತಮ್ಮ ಸರ್ಕಾರ ಸಂಪೂರ್ಣ ನಿಲ್ಲಿಸಿದ್ದ ಪ್ರಕ್ರಿಯೆ ಇದು. ತಮ್ಮ ಸರ್ಕಾರವು ಬಿಟ್ಟು ಹೋಗಿದ್ದ ರೂ.5900 ಕೋಟಿ‌ ನಷ್ಟದಿಂದ ಹೊಣೆಗಾರಿಕೆ ಬಾಕಿಗಳಾದ‌ ಡೀಸೆಲ್ ಹಣ, ಸಿಬ್ಬಂದಿಗಳ ಭವಿಷ್ಯ ನಿಧಿ, ಖರೀದಿ ಸಾಮಾಗ್ರಿಗಳ ಹಣ ಸೇರಿ ಎಲ್ಲಾ ಬಾಕಿಗಳನ್ನು ತೀರಿಸುವ ಹೊಣೆಗಾರಿಕೆ ಹೊತ್ತುಕೊಂಡು ನಾವು ಸಂಸ್ಥೆಗಳನ್ನು ಮುನ್ನಡೆಸಬೇಕಾಗಿದೆ.

ಶಕ್ತಿ ಯೋಜನೆ ನಡೆಸಲು ಸಾರಿಗೆ ಸಂಸ್ಥೆಗಳು ಕಷ್ಟಪಡುತ್ತಿವೆ ಎಂದು ಹೇಳಿಲ್ಲ: ರಾಮಲಿಂಗಾರೆಡ್ಡಿ ಸ್ಪಷ್ಟನೆ

ನಾನು ಎಲ್ಲಿಯೂ ಕೂಡ, ಯಾವುದೇ ವೇದಿಕೆಯಲ್ಲಾಗಲೀ, ಮಾಧ್ಯಮಕ್ಕಾಗಲೀ ಶಕ್ತಿ ಯೋಜನೆ ನಡೆಸಲು ಸಾರಿಗೆ ಸಂಸ್ಥೆಗಳು ಕಷ್ಟಪಡುತ್ತಿವೆ ಎಂಬ ಹೇಳಿಕೆಯನ್ನೇ ನೀಡಿಲ್ಲ. ಈ ಬಗ್ಗೆ ಮಾಧ್ಯಮಗಳಿಗೂ ಸಹ ಈ ರೀತಿಯ ಸುದ್ದಿಗಳನ್ನು ಪ್ರಕಟಿಸುವ ಮುನ್ನ ನಮ್ಮಿಂದ ನಿಖರವಾದ ಮಾಹಿತಿಯನ್ನು ಪಡೆದು ಪ್ರಕಟಿಸುವಂತೆ ತಿಳಿಸಿದ್ದಾರೆ. ತಮಗೆ ಜನರನ್ನು ದಾರಿ ತಪ್ಪಿಸಲು ದಿನಕ್ಕೊಂದು ವಿಷಯ ಬೇಕು. ಈ ಖಯಾಲಿ ಬಹಳ ಹಾನಿಕಾರಕವಾದದ್ದು ಸಾಧ್ಯವಾದರೆ ಇದನ್ನು ಸಮಾಜದ ಹಿತದೃಷ್ಟಿಯಿಂದ ಬದಲಿಸಿಕೊಳ್ಳಲು ಪ್ರಯತ್ನಿಸಿ.

ಶಕ್ತಿ ಯೋಜನೆ ಮಹಿಳಾ ಸಬಲೀಕರಣದ ಯೋಜನೆ ಅದನ್ನು ಗೌರವಿಸುವ ಕೆಲಸ ಮಾಡಿ, ಇನ್ನಾದರೂ ಈ ಯೋಜನೆ ನಿರಾತಂಕವಾಗಿ ನಡೆಯಲು ಅವಕಾಶ ಮಾಡಿಕೊಟ್ಟು , ಮಹಿಳೆಯರಿಗೆ ತಲುಪುತ್ತಿರುವ ಈ ಯಶಸ್ವಿ ಯೋಜನೆಯಲ್ಲಿ ತಮ್ಮದೊಂದು ಅಳಿಲು ಸೇವೆ ಇರುವಂತಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.