
ರಾಮನಗರ, ಅಕ್ಟೋಬರ್ 12: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಚಿರತೆ ಉಪಟಳ ಹೆಚ್ಚಳವಾಗಿದೆ. ಇಂದು ಬೆಳ್ಳಂಬೆಳಗ್ಗೆ ಜಮೀನಿನಲ್ಲಿ ಹೂವು ಬಿಡಿಸುವುದಕ್ಕೆ ಅಂತಾ ರೈತ ಹೋಗಿದ್ದು, ಈ ವೇಳೆ ಅಲ್ಲೇ ಅವಿತು ಕುಳಿತಿದ್ದ ಚಿರತೆ ದಾಳಿ ಮಾಡಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ರೈತ ಸಾವನ್ನಪ್ಪಿದ್ದಾರೆ. ಶಿವಸ್ವಾಮಿ (62) ಮೃತ ರೈತ. ಚಿರತೆ ಹಾವಳಿ ನಿಯಂತ್ರಿಸದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲೂಕಿನ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅಂದಹಾಗೆ ಗ್ರಾಮದಲ್ಲಿ ಶಿವಸ್ವಾಮಿ ಆರ್ಚಕನಾಗಿಯೋ ಕೆಲಸ ಮಾಡುತ್ತಿದ್ದರು. ಇಂದು ಬೆಳ್ಳಂಬೆಳಗ್ಗೆ ತಮ್ಮ ಜಮೀನಿನಲ್ಲಿ ಕಾಕಾಡ ಹೂವು ಬಿಡಸಲು ಅಂತಾ ಹೋಗಿದ್ದಾರೆ. ಆದರೆ ಅಷ್ಟರಲ್ಲೇ ಜಮೀನಿನಲ್ಲಿ ಅವಿತು ಕುಳಿತಿದ್ದ ಚಿರತೆ, ಶಿವಸ್ವಾಮಿ ಮೇಲೆ ಏಕಾಏಕಿ ದಾಳಿ ಮಾಡಿದೆ. ಹೀಗಾಗಿ ಚಿರತೆ ದಾಳಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ ತೀವ್ರ ರಕ್ತಸ್ರಾವದಿಂದ ಜಮೀನಿನಲ್ಲೇ ಸಾವನ್ನಪ್ಪಿದ್ದಾರೆ.
ಇನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕಳೆದ ಹಲವು ತಿಂಗಳಿಂದ ಚಿರತೆ ಉಪಟಳ ಹೆಚ್ಚಾಗಿದೆ. ಜಾನುವಾರುಗಳ ಮೇಲೆ ಪದೇ ಪದೇ ದಾಳಿ ಮಾಡುತ್ತಿವೆ. ಅದೇ ರೀತಿ ಕಲ್ಲದೇವನಹಳ್ಳಿ ಗ್ರಾಮದಲ್ಲಿ ಕೂಡ ಕಳೆದ ಹಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಇತ್ತೀಚೆಗೆ ಜಾನುವಾರುಗಳ ಮೇಲೂ ದಾಳಿ ನಡೆದಿತ್ತು. ಹೀಗಾಗಿ ಗ್ರಾಮಸ್ಥರು ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.
ಅರಣ್ಯ ಇಲಾಖೆ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸಿದ್ದರು. ಹೀಗಾಗಿ ಇಂದು ಚಿರತೆ ದಾಳಿಗೆ ರೈತ ಸಾವನ್ನಪ್ಪಿದ್ದಾರೆ. ಈ ವೇಳೆ ಘಟನಾ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು. ಯಾವುದೇ ಕಾರಣಕ್ಕೂ ಮೃತದೇಹವನ್ನ ಎತ್ತಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು. ಆನಂತರ ಚಿರತೆ ಸೆರೆ ಹಿಡಿಯುವ ಭರವಸೆ ನೀಡಿದ ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು. ಇನ್ನು ಈ ಬಗ್ಗೆ ಮಾತನಾಡಿದ ಡಿಎಫ್ಒ ರಾಮಕೃಷ್ಣಪ್ಪ, ‘ಸಂಜೆಯಿಂದ ಡ್ರೋನ್ ಸಹಾಯದಿಂದ ಚಿರತೆ ಸೆರೆಗೆ ಕಾರ್ಯಾಚರಣೆ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಿದ ಚಿರತೆ ಭೀತಿ: ಬ್ಯಾಡರಹಳ್ಳಿಯಲ್ಲಿ ಚಿರತೆ ಇದೆ ಎಚ್ಚರಿಕೆ ಬೋರ್ಡ್, ಬನಶಂಕರಿಯಲ್ಲೂ ಪ್ರತ್ಯಕ್ಷ!
ಚಿರತೆ ದಾಳಿಗೆ ರೈತ ಸಾವನ್ನಪ್ಪಿರುವುದು ಜಿಲ್ಲೆಯ ಜನರನ್ನ ಆತಂಕಕ್ಕೆ ಒಳಗಾಗುವಂತೆ ಮಾಡಿದೆ. ಈ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಹಿಡಿದು ಜನರು ನೆಮ್ಮದಿಯಿಂದ ಇರಲು ಅವಕಾಶ ಮಾಡಿಕೊಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:17 pm, Mon, 12 October 26