
ರಾಮನಗರ, ಆಗಸ್ಟ್ 08: ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿದ್ದ ಸೈನ್ ಬೋರ್ಡ್‌ಗೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದ್ದು, ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ (Ramanagar) ತಾಲೂಕಿನ ಅವರಗೆರೆ ಗೇಟ್ ಬಳಿ ಈ ದುರ್ಘಟನೆ ನಡೆದಿದೆ. ಅಪಘಾತದ ರಭಸಕ್ಕೆ ಬಸ್ ಹೆದ್ದಾರಿಯಲ್ಲೇ ಪಲ್ಟಿಯಾಗಿದ್ದು, ಬಸ್‌ನಲ್ಲಿದ್ದ ಹಲವು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.
ಕೇರಳದಿಂದ ಬೆಂಗಳೂರಿನ ಕಡೆಗೆ ಬರುತ್ತಿದ್ದ ಕೆಎಸ್ಆರ್‌ಟಿಸಿ ಬಸ್, ರಾಮನಗರ ತಾಲೂಕಿನ ಅವರಗೆರೆ ಗೇಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ಬೃಹತ್ ಸೈನ್ ಬೋರ್ಡ್‌ಗೆ (ದಿಕ್ಸೂಚಿ ಫಲಕ) ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತಕ್ಷಣ ಬಸ್ ರಸ್ತೆಯಲ್ಲೇ ಉರುಳಿ ಬಿದ್ದಿದೆ. ಪರಿಣಾಮವಾಗಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಸ್‌ನಲ್ಲಿದ್ದ ಇತರ ಪ್ರಯಾಣಿಕರಿಗೆ ಸಣ್ಣಪುಟ್ಟ ಹಾಗೂ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಭೀಕರ ಅಪಘಾತದ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಕೆಲಕಾಲ ವಾಹನ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು.ವಿಷಯ ತಿಳಿಯುತ್ತಿದ್ದಂತೆ ಬಿಡದಿ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಭೀಕರ ಅಪಘಾತದ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ