ಚನ್ನಪಟ್ಟಣ: ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ (Bengaluru Mysuru Expressway) ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಐವರು ಮೃತಪಟ್ಟಿದ್ದಾರೆ. ಈ ಪೈಕಿ ಮೂವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ನೂತನ ಬೆಂಗಳೂರು ಮೈಸೂರು ದಶಪಥ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಆಲ್ಟೊ ಕಾರು ಟೈರ್ ಸ್ಫೋಟಗೊಂಡು ನಿಯಂತ್ರಣತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಆಲ್ಟೊ ಕಾರಿನ ಟೈರ್ ಸ್ಫೋಟವಾಗಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ರವಿ ಪೂಜಾರ್ (45), ಲಕ್ಷ್ಮೀ ಪೂಜಾರ್(40), ಇಂಚರಾ ಪೂಜಾರ್ (15), ಶಾಂತಲಾ ಪೂಜಾರ್(10), ಸಿರಿ ಪೂಜಾರ್ (3) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆಂಗೇರಿಯಲ್ಲಿ ನೆಲೆಸಿದ್ದ ರವಿ ಪೂಜಾರ್ ಕುಟುಂಬಸ್ಥರು ಬೆಂಗಳೂರಿನಿಂದ ಟಿ.ನರಸೀಪುರಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ರವಿ ಪೂಜಾರ್ ಅವರು ರಾಜೀವ್ ಗಾಂಧಿ ಆರೋಗ್ಯ ವಿವಿಯಲ್ಲಿ ಕ್ಲರ್ಕ್ ಆಗಿದ್ದರು. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಮತ್ತೊಂದು ಅಪಘಾತ; ಟೋಲ್ ತಪ್ಪಿಸಲು ಹೋಗಿ ಬೈಕ್ ಸವಾರನ ಬಲಿ ಪಡೆದ KSRTC ಬಸ್
ಕೆಎಸ್‌ಆರ್‌ಟಿಸಿ ಬಸ್ ಕಣಿಮಿಣಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಳೆದ ತಿಂಗಳು ಸಂಭವಿಸಿತ್ತು. ಹಿಂಬದಿ ಸವಾರ ಗಾಯಗೊಂಡಿದ್ದರು. ಈ ಕಹಿ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ಕುರಿಗಳ ಮೈತೊಳೆಯಲು ಹೋಗಿದ್ದ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾದ ಘಟನೆ ಮಾಗಡಿ ತಾಲೂಕಿನ ಮುತ್ತಸಾಗರ ಬಳಿ ಕೆರೆಯಲ್ಲಿ ಶನಿವಾರ ಸಂಭವಿಸಿದೆ. ಮೃತರನ್ನು ನಾಗರಾಜು (30), ಜ್ಯೋತಿ (35) ಮತ್ತು ಲಕ್ಷ್ಮೀ (22) ಎಂದು ಗುರುತಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 5:52 pm, Sat, 22 April 23