ಚನ್ನಪ್ಪಟ್ಟಣ: ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್ ಮುಖಂಡನಿಂದ ಹಲ್ಲೆ
ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್ ಮುಖಂಡ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ.
ರಾಮನಗರ: ಬಿಜೆಪಿ ಕಾರ್ಯಕರ್ತನ ಮೇಲೆ ಜೆಡಿಎಸ್ ಮುಖಂಡ ಹಲ್ಲೆ ಮಾಡಿದ್ದಾರೆ. ಚನ್ನಪಟ್ಟಣದ ಬಸ್ ನಿಲ್ದಾಣದ ಬಳಿ ಬಿಜೆಪಿ ಕಾರ್ಯಕರ್ತ ಸಿದ್ದನಹಳ್ಳಿ ನಿವಾಸಿ ಸಿದ್ದೇಗೌಡ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದಾನೆ. ಜೆಡಿಎಸ್ ಮುಖಂಡ ಹಾಗೂ ಗುತ್ತಿಗೆದಾರ ನಾಗರಾಜ್ ಹಾಗೂ ಬೆಂಬಲಿಗರು ಹಲ್ಲೆ ಮಾಡಲಾಗಿದೆ.
ಸಿದ್ದೇಗೌಡನಿಗೆ ಗಂಭೀರ ಗಾಯವಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕು ಆಸ್ಪತ್ರೆಗೆ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಭೇಟಿ ನೀಡಿ, ಗಾಯಾಳು ಸಿದ್ದೇಗೌಡ ಯೋಗಕ್ಷೇಮ ವಿಚಾರಿಸಿದ್ದಾರೆ. ಸಿದ್ದೇಗೌಡ, ಗುತ್ತಿಗೆದಾರ ನಾಗರಾಜು ಅವರ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮಾಹಿತಿ ಹಕ್ಕು ಮೂಲಕ ಮಾಹಿತಿ ಕೇಳಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ಮಾಡಲಾಗಿದೆ. ಚನ್ನಪಟ್ಟಣ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆ ಹಿನ್ನೆಲೆ
ಚನ್ನಪ್ಪಟಣ್ಣ ರಾಜಕೀಯ ನಾಯಕರ ಕೆಸರೆಚಾಟಕ್ಕೆ ವೇದಿಕೆಯಾಗಿ ಮಾರ್ಪಟ್ಟಿದೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರ ಮಾತಿನ ಚಕಮಕಿಗೆ ಸಾಕ್ಷಿಯಾಗಿದೆ. ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ವಿಚಾರಕ್ಕೆ ವಾಗ್ದಾಳಿಗಳು ಪ್ರಾರಂಭವಾಗಿವೆ.
ಚನ್ನಪಟ್ಟಣ ತಾಲೂಕಿನಲ್ಲಿ ಇಂದು ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿದೆ. ರಾಂಪುರ ಗ್ರಾಮದಲ್ಲಿ ರಸ್ತೆ ಕಾಮಗಾರಿಗಳಿಗೆ ಸಿ.ಪಿ.ಯೋಗೇಶ್ವರ್ ಚಾಲನೆ ನೀಡಿದ್ದರು. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಅಶ್ವತ್ಥ್ ನಾರಾಯಣ್ ಶಂಕುಸ್ಥಾಪನೆ ನೆರವೇರಿಸಬೇಕಿತ್ತು. ಆದರೆ ಅವರು ಗೈರಾದ ಹಿನ್ನೆಲೆ MLC ಯೋಗೇಶ್ವರ್ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು.
ಮತ್ತೊಂದು ಕಡೆ ಮಾಜಿ ಸಿಎಂ ಹಾಗೂ ಚನ್ನಪಟ್ಟಣ ಶಾಸಕ ಹೆಚ್ಡಿ ಕುಮಾರಸ್ವಾಮಿ ಸ್ವಕ್ಷೇತ್ರದಲ್ಲಿ ಶಂಕುಸ್ಥಾಪನೆ ಆಗಿದ್ದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕುಮಾರಸ್ವಾಮಿ ದೂರವಿಟ್ಟು ಶಂಕುಸ್ಥಾಪನೆ ನೆರವೇರಿಸಿದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. 40% ಸರ್ಕಾರ, ಯಾರಪ್ಪ ಗಂಡಸು ಎಂದು ಘೋಷಣೆ ಕೂಗಿದ್ದರು.
ಪ್ರಕರಣ ಸಂಬಂಧ ಎಂಎಲ್‌ಸಿ ಸಿ.ಪಿ. ಯೋಗೆಶ್ವರ್ ಹಾಗೂ ಬೆಂಬಲಿಗರ ವಿರುದ್ಧ JDS ವಿದ್ಯಾರ್ಥಿ ಘಟಕದ ಅಧ್ಯಕ್ಷ ಆಶೀಶ್ ದೂರು ನೀಡಿದ್ದರು. ಈ ವಿವಾದಕ್ಕೆ ಸಂಬಂಧಿಸಿ ಜೆಡಿಎಸ್ನ 14 ಕಾರ್ಯಕರ್ತರ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಲಾಗಿದೆ. ಬಿಜೆಪಿ ನಾಯಕ ಸಿ.ಪಿ.ಯೋಗೇಶ್ವರ ಅವರ ಕಾರು ಚಾಲಕ ವೆಂಕಟೇಶ್ ನೀಡಿದ್ದ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಚನ್ನಪಟ್ಟಣ ತಾಲ್ಲೂಕಿನ ಭೈರಾಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ ಅವರಿದ್ದ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆಯಲಾಗಿತ್ತು. ಈ ಘಟನೆಗೆ ಸಂಬಂಧಿಸಿದಂತ ದಾಖಲಾಗಿರುವ ದೂರು ಆಧರಿಸಿ ಐಪಿಸಿ ಸೆಕ್ಷನ್ 143, 147, 341, 506 149 ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದರ ಬೆನ್ನಲ್ಲೆ ಇದೀಗ ಸಿ.ಪಿ. ಯೋಗೆಶ್ವರ್ ಹಾಗೂ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:59 pm, Mon, 3 October 22