ಮುಕ್ಕಾಲು ತಾಸು ಕಾದರೂ ತೆರೆಯದ ದೇಗುಲದ ಬಾಗಿಲು: ನಿಖಿಲ್ ಕುಮಾರಸ್ವಾಮಿ ಭೇಟಿ ವೇಳೆ ಮಾರಮ್ಮ ದೇವಸ್ಥಾನಕ್ಕೆ ಬೀಗ ಹಾಕಿದ ಕಾಂಗ್ರೆಸ್ ಕಾರ್ಯಕರ್ತ
ರಾಮನಗರದ ದೊಡ್ಡ ಕುರುಬರಹಳ್ಳಿ ಶ್ರೀ ಬಿಸಿಲು ಮಾರಮ್ಮ ದೇಗುಲ ಉದ್ಘಾಟನೆಗೆ ನಿಖಿಲ್ ಕುಮಾರಸ್ವಾಮಿ ಆಗಮಿಸಿದ್ದಾಗ ದರ್ಶನ ನಿರಾಕರಿಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಉದ್ದೇಶಪೂರ್ವಕವಾಗಿ ಬೀಗ ಹಾಕಿದ್ದಾರೆಂದು ಜೆಡಿಎಸ್ ಆರೋಪಿಸಿದ್ದು, ಗ್ರಾಮದಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಎಚ್.ಡಿ.ಕುಮಾರಸ್ವಾಮಿ ಇದನ್ನು ಖಂಡಿಸಿ, ರಾಮನಗರ ಜನತೆ ಕಾಂಗ್ರೆಸ್‌ಗೆ ಪಾಠ ಕಲಿಸುತ್ತಾರೆ ಎಂದಿದ್ದಾರೆ.

ರಾಮನಗರ, ನ.14: ರಾಮನಗರ ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ಶುಕ್ರವಾರ (ನ.13) ಉದ್ಘಾಟನೆಯಾದ ನೂತನ ಶ್ರೀ ಬಿಸಿಲು ಮಾರಮ್ಮ ದೇವಿಯ ದೇಗುಲಕ್ಕೆ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭೇಟಿ ನೀಡಿದ ವೇಳೆ, ದೇಗುಲಕ್ಕೆ ಬೀಗ ಹಾಕಿ ದೇವರ ದರ್ಶನಕ್ಕೆ ಅವಕಾಶ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಗ್ರಾಮದಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಗ್ರಾಮಕ್ಕೆ ಆಗಮಿಸಿದ್ದರು.
ನಿಖಿಲ್ ಅವರು ದೇಗುಲಕ್ಕೆ ಭೇಟಿ ನೀಡುತ್ತಿರುವ ವಿಷಯವನ್ನು ಆಯೋಜಕರು ಮೈಕ್‌ನಲ್ಲಿ ಘೋಷಣೆ ಮಾಡುತ್ತಿದ್ದಂತೆಯೇ, ವ್ಯಕ್ತಿಯೊಬ್ಬರು ಏಕಾಏಕಿ ದೇವಾಲಯದ ಬಾಗಿಲಿಗೆ ಬೀಗ ಹಾಕಿಕೊಂಡು ತೆರಳಿದ್ದಾರೆ ಎನ್ನಲಾಗಿದೆ. ದೇವರ ದರ್ಶನಕ್ಕಾಗಿ ನಿಖಿಲ್ ಕುಮಾರಸ್ವಾಮಿ ಸುಮಾರು ಮುಕ್ಕಾಲು ತಾಸು (45 ನಿಮಿಷ) ಕಾದರೂ ಬೀಗ ತೆಗೆಯಲು ಯಾರೂ ವಾಪಸ್ ಬಾರದ ಕಾರಣ, ನಿರಾಸೆಯಿಂದ ಅಲ್ಲಿಂದ ನಿರ್ಗಮಿಸಿದ್ದಾರೆ ಎಂದು ಸ್ಥಳೀಯ ಮುಖಂಡರು ತಿಳಿಸಿದ್ದಾರೆ. “ನಿಖಿಲ್ ಕುಮಾರಸ್ವಾಮಿ ಅವರು ದೇಗುಲಕ್ಕೆ ಬರುತ್ತಿದ್ದಾರೆ ಎಂಬ ವಿಷಯ ತಿಳಿದು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತ ರವಿ ಎಂಬಾತ ಉದ್ದೇಶಪೂರ್ವಕವಾಗಿ ದೇವಾಲಯಕ್ಕೆ ಬೀಗ ಹಾಕಿದ್ದಾನೆ” ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ರಾಮು ಗಂಭೀರವಾಗಿ ಆರೋಪಿಸಿದ್ದಾರೆ.
ತಮ್ಮ ನಾಯಕನಿಗೆ ದೇವರ ದರ್ಶನ ನಿರಾಕರಿಸಿ ಅವಮಾನ ಮಾಡಲಾಗಿದೆ ಎಂದು ಆಕ್ರೋಶಗೊಂಡ ಜೆಡಿಎಸ್ ಬೆಂಬಲಿಗರು ದೇಗುಲದ ಮುಂಭಾಗ ಪ್ರತಿಭಟನೆ ನಡೆಸಿದರು. ಇದೇ ವಿಚಾರವಾಗಿ ಗ್ರಾಮದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಪರಿಸ್ಥಿತಿ ಪರಸ್ಪರ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು. ಘಟನೆಯ ಮಾಹಿತಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡೂ ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಘಟನೆ ರಾಜಕೀಯ ತಿರುವು ಪಡೆದುಕೊಂಡಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಇದನ್ನೂ ಓದಿ: ತಾಯಿಯ ಅಂತ್ಯಕ್ರಿಯೆಗೆ ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ
ರಾಮನಗರದ ಜನತೆ ಮುಂದೆ ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿಯವರಿಗೆ ದೇಗುಲ ಪ್ರವೇಶ ನಿರಾಕರಣೆ ಘಟನೆಗೆ ಸಂಬಂಧಿಸಿದಂತೆ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಘಟನೆಯು ರಾಜಕೀಯ ಬದಲಾವಣೆಗೆ ನಾಂದಿ ಹಾಡಲಿದೆ ಎಂದು ಹೇಳಿದ್ದಾರೆ. ರಾಮನಗರ ಜಿಲ್ಲೆಯ ದೊಡ್ಡ ಕುರುಬರಹಳ್ಳಿ ಗ್ರಾಮದ ದೇವಾಲಯ ಉದ್ಘಾಟನೆಗೆ ನಿಖಿಲ್ ಕುಮಾರಸ್ವಾಮಿಯವರನ್ನು ಆಹ್ವಾನಿಸಲಾಗಿತ್ತು. ಆದರೆ, ಅವರಿಗೆ ದೇವಾಲಯ ಪ್ರವೇಶಕ್ಕೆ ತಡೆಯೊಡ್ಡಲಾಗಿದೆ. ಈ ಗ್ರಾಮವು ತಮಗೆ ಮೊದಲಿನಿಂದಲೂ ದೊಡ್ಡ ಮಟ್ಟದಲ್ಲಿ ಬೆಂಬಲ ನೀಡುತ್ತಿದ್ದು, ಚೀಲೂರು ಪಂಚಾಯಿತಿಗೆ ಸೇರಿದೆ ಎಂದು ಕುಮಾರಸ್ವಾಮಿ ವಿವರಿಸಿದರು. ತಮ್ಮ ಚುನಾವಣಾ ಸಂದರ್ಭಗಳಲ್ಲಿ ಈ ಗ್ರಾಮದ ಜನರು ನಿರಂತರವಾಗಿ ಬಹುಮತ ನೀಡಿದ್ದಾರೆ.
ಇಲ್ಲಿದೆ ನೋಡಿ ವಿಡಿಯೋ:
ಕಾಂಗ್ರೆಸ್ ಸರ್ಕಾರ ಬಂದ ನಂತರ ತಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುವುದು ಮತ್ತು ಜನತಾದಳ ಬೆಂಬಲಿಗರನ್ನು ಭಯಭೀತಗೊಳಿಸುವುದು ನಡೆಯುತ್ತಿದೆ ಎಂದು ಅವರು ಆರೋಪಿಸಿದರು. ಈ ಘಟನೆ ಕಾಂಗ್ರೆಸ್ ಕಾರ್ಯಕರ್ತರ ರೌಡಿತನಕ್ಕೆ ಉದಾಹರಣೆ ಎಂದು ಅವರು ಬಣ್ಣಿಸಿದರು. ಮೈಸೂರಿನಲ್ಲಿ ಮುಖ್ಯಮಂತ್ರಿಗಳು ನೀಡಿರುವ ಹೇಳಿಕೆಗಳ ಬಗ್ಗೆಯೂ ಗಮನ ಸೆಳೆದ ಅವರು, ಮಾತಿಗೂ ಕೃತಿಗೂ ಇರುವ ವ್ಯತ್ಯಾಸವನ್ನು ಕಾಯ್ದು ನೋಡೋಣ ಎಂದಿದ್ದಾರೆ. ರಾಮನಗರದ ಜನತೆ ಮುಂದೆ ಕಾಂಗ್ರೆಸ್‌ಗೆ ಬುದ್ಧಿ ಕಲಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ರಾಜ್ಯದ ಸುದ್ದಿಗಳನ್ನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:38 pm, Sat, 14 November 26




