ಬಸ್ ನಿಲ್ಲಿಸಿ ನಮಾಜ್ ಮಾಡಿದ NWKRTC ಚಾಲಕನ ವಿರುದ್ಧ ತನಿಖೆಗೆ ಆದೇಶ
NWKRTC ಬಸ್ ಚಾಲಕನು ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಕರಣದ ಸತ್ಯಾತ್ಯತೆ ತಿಳಿಯಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತನಿಖೆಗೆ ಸೂಚಿಸಿದ್ದಾರೆ. ತನಿಖೆಯಲ್ಲಿ ತಪ್ಪು ಸಾಬೀತಾದರೆ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಬೆಂಗಳೂರು, ಏಪ್ರಿಲ್ 30: ಪ್ರಯಾಣಿಕರಿದ್ದರೂ ಚಾಲಕ ಬಸ್ ನಿಲ್ಲಿಸಿ ಚಾಲಕ ನಮಾಜ್ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ನಡೆಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramlinga Reddy) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಂಗ ಎಂ. ಅವರಿಗೆ ಸೂಚನೆ ನೀಡಿದ್ದಾರೆ. ತನಿಖೆ ನಡೆಸಿ ತಪ್ಪು ಕಂಡುಬಂದರೆ ಚಾಲಕನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಿ.ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸುವಂತೆ ಪತ್ರ ಬರೆದಿದ್ದಾರೆ.
ಏನಿದು ಪ್ರಕರಣ?
ಮಂಗಳವಾರ (ಏ.29) ರಂದು ಸಂಜೆ ಹುಬ್ಬಳ್ಳಿಯಿಂದ ಹಾವೇರಿಗೆ ಹೋಗುವ ಬಸ್ನ ಚಾಲಕ-ಕಂ-ನಿರ್ವಾಹಕ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ. ಚಾಲಕ-ಕಂ-ನಿರ್ವಾಹಕ ನಮಾಜ್ ಮಾಡುತ್ತಿರುವುದನ್ನು ಪ್ರಯಾಣಿಕರೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗುತ್ತಿದ್ದಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಯವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರಿಗೆ ಪತ್ರ ಬರೆದಿದ್ದಾರೆ.
ಇದನ್ನೂ ಓದಿ: ಕೆಎಸ್ಆರ್ಟಿಸಿ ಬಸ್ನಲ್ಲಿ ಕಂಡಕ್ಟರ್ನಿಂದ ಯುವತಿಗೆ ಲೈಂಗಿಕ ಕಿರುಕುಳ
ಸರ್ಕಾರಿ ಸೇವೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಕೆಲವೊಂದು ನೀತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕಾಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದ್ದರೂ ಸಹ ಸಾರ್ವಜನಿಕ ಸೇವೆಯಲ್ಲಿರುವವರು, ಕರ್ತವ್ಯದ ವೇಳೆ ಹೊರತುಪಡಿಸಿ ತಮ್ಮ ತಮ್ಮ ಧರ್ಮವನ್ನು ಪಾಲಿಸಬಹುದಾಗಿರುತ್ತದೆ. ಆದರೆ, ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಬಸ್ ಅನ್ನು ನಿಲ್ಲಿಸಿ, ಬಸ್ನಲ್ಲಿ ಪ್ರಯಾಣಿಕರು ಇದ್ದಾಗ್ಯೂ ಸಹ ನಮಾಜ್ ಮಾಡಿರುವುದು ಆಕ್ಷೇಪಾರ್ಹ. ಈ ವಿಡಿಯೋ ಬಗ್ಗೆ ಕೂಡಲೇ ತನಿಖೆ ನಡೆಸಿ, ಸಂಬಂಧಪಟ್ಟ ಸಿಬ್ಬಂದಿಯು ತಪ್ಪಿತಸ್ಥರೆಂದು ಕಂಡುಬಂದಲ್ಲಿ, ಸೂಕ್ತ ಶಿಸ್ತಿನ ಕ್ರಮ ಜರುಗಿಸಿ. ಇನ್ನು ಮುಂದೆ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಿ ಎಂದು ಸೂಚನೆ ನೀಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:28 pm, Wed, 30 April 25