
ಬೆಂಗಳೂರು, (ಅಕ್ಟೋಬರ್ 18): ಪಡಿತರ ಚೀಟಿ ಫಲಾನುಭವಿಗಳು ಇ-ಕೆವೈಸಿ ದೃಢೀಕರಿಸುವ ದಿನಾಂಕವನ್ನು ಮತ್ತೆ ವಿಸ್ತರಿಸಲಾಗಿದೆ. ಈ ಮೊದಲು ಇ-ಕೆವೈಸಿ ದೃಢೀಕರಿಸಲು ಅಕ್ಟೋಬರ್ 20 ಕೊನೆಯ ದಿನಾಂಕವನ್ನು ಇದೀಗ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಒಂದು ವರ್ಷಕ್ಕೂ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 1,15,87,298 ಫಲಾನುಭವಿಗಳು ಮತ್ತೊಮ್ಮೆ ಇ-ಕೆವೈಸಿ ಮಾಡಬೇಕೆಂದು ಆದೇಶಿಸಿರುವ ಹಿನ್ನೆಲೆಯಲ್ಲಿ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ರಾಜ್ಯದಲ್ಲಿ ಒಂದು ವರ್ಷದ ಹಿಂದೆ ಇ-ಕೆವೈಸಿ ಮಾಡಿಸಿದ ಫಲಾನುಭವಿಗಳ ಜೊತೆಗೆ, ಇದುವರೆಗೆ ಒಂದು ಬಾರಿಯೂ ಇ-ಕೆವೈಸಿ ಮಾಡಿಸದ 3,82,362 ಹಾಗೂ ಐದು ವರ್ಷ ಮೇಲ್ಪಟ್ಟು ಇ-ಕೆವೈಸಿ ಮಾಡಿಸಿದ 54,27,396 ಫಲಾನುಭವಿಗಳು ಇನ್ನೂ ಇ-ಕೆವೈಸಿ ದೃಢೀಕರಿಸಬೇಕಿದೆ. ಈ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ‘AHARA’ ತಂತ್ರಾಂಶದ ಮೂಲಕ ನವೆಂಬರ್ 10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಹೊರ ರಾಜ್ಯಗಳಿಗೆ ಕೆಲಸಕ್ಕೆಂದು ಹೋಗಿರುವ ರಾಜ್ಯದ ಪಡಿತರ ಚೀಟಿದಾರಿಗೆ ಅನುಕೂಲ ಕಲ್ಪಿಸಲು, ‘ಅನ್ನ ಸೇವೆ’ ಆ್ಯಪ್ ನ ಲಭ್ಯತೆಯನ್ನು ಇಂದಿನಿಂದ ದೇಶಾದ್ಯಂತ ವಿಸ್ತರಿಸಲಾಗಿದೆ. ಹೊರರಾಜ್ಯಗಳಲ್ಲಿರುವ ರಾಜ್ಯದ ಪಡಿತರ ಚೀಟಿದಾರರು ಅವರಿದ್ದಲಿಂದಲೇ ಆ್ಯಪ್ ಡೌನಲೋಡ್ ಮಾಡಿಕೊಂಡು ಇ-ಕೆವೈಸಿ ಪೂರ್ಣಗೊಳಿಸುವಂತೆ ಇಲಾಖೆ ಮನವಿ ಮಾಡಿಕೊಂಡಿದೆ.
ಅನ್ನ ಸೇವೆ ಆ್ಯಪ್ ನ ಅಪ್ಡೇಟ್ ಕೂಡ ಗೂಗಲ್ ಪ್ಲೇ ಸ್ಟೋರ್ ನಲ್ಲಿ ಲಭ್ಯವಿದ್ದು ಈಗಾಗಲೇ ತಮ್ಮ ಮೊಬೈಲ್ ನಲ್ಲಿ ಆ್ಯಪ್ ಡೌನಲೋಡ್ ಮಾಡಿಕೊಂಡಿರುವವರು ಅಪ್ಡೇಟ್ ಮಾಡಿಕೊಳ್ಳಬಹುದು.
ಈ ಹಿಂದೆ ಇ-ಕೆವೈಸಿ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವಾಗಿ ನಿಗದಿಯಾಗಿತ್ತು. ಆದ್ರೆ, ಇನ್ನೂ ಹಲವು ಫಲಾನುಭವಿಗಳು ಇ-ಕೆವೈಸಿ ಮಾಡಿಸುವುದು ಬಾಕಿ ಇರುವ ಹಿನ್ನೆಲೆಯಲ್ಲಿ ಅಕ್ಟೋಬರ್ 20ರವರೆಗೆ ಗಡುವನ್ನು ವಿಸ್ತರಿಸಲಾಗಿತ್ತು. ಇದೀಗ ಮತ್ತೊಮ್ಮೆ ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಿಗದಿತ ದಿನಾಂಕದೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸದ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಉಚಿತ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಕಾರ್ಡ್ ಕೂಡ ರದ್ದಾಗುವ ಸಾಧ್ಯತೆ ಇದೆ.